State

ಭಾರಿ ಮಳೆ: ಕೃಷ್ಣಾ ನದಿಯಲ್ಲಿ ಮತ್ತೆ ಪ್ರವಾಹ ಭೀತಿ

 

ಕಲಬುರಗಿ, ಸೆ 26- ಕಲ್ಯಾಣ ಕರ್ನಾಟಕ ಜಿಲ್ಲೆಗಳಾದ ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಹಾಗು ಮುಂಬೈ ಕರ್ನಾಟಕ ಪ್ರದೇಶದಲ್ಲಿ ಶುಕ್ರವಾರ ರಾತ್ರಿಯಿಡೀ ಭಾರೀ ಮಳೆಯಾಗಿದ್ದರಿಂದ ಕೃಷ್ಣಾ ನದಿಯಲ್ಲಿ ಮತ್ತೆ ಪ್ರವಾಹ ಉಂಟಾಗಿ ಸಾವಿರಾರು ಎಕರೆಯಲ್ಲಿ ಬೆಳೆದಿರುವ ಬೆಳೆ ನೀರಿನಲ್ಲಿ ಮುಳುಗುವ ಭೀತಿ ಎದುರಾಗಿದೆ.

ಕಲಬುರಗಿ ಜಿಲ್ಲೆಯಲ್ಲಿ ರಾತ್ರಿಯಿಡೀ ಸುರಿದ ಭಾರೀ ಮಳೆಯಿಂದ ನೂರಾರು ಎಕರೆ ಜಮೀನಿನಲ್ಲಿ ಬೆಳೆದು ನಿಂತಿದ್ದ ಬೆಳೆ ಪ್ರವಾಹಕ್ಕೆ ತುತ್ತಾಗಿದೆ. ಕಲಬುರಗಿ ನಗರದ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿದೆ.
ಚಿಂಚೋಳಿ ಮತ್ತು ಬೀದರ್ ನಡುವಿನ ರಾಜ್ಯ ಹೆದ್ದಾರಿ 15ರಲ್ಲಿನ ಒಂದು ಸೇತುವೆ ಮತ್ತು ಸೇಡಂ, ಕಲಗಿ ಮತ್ತು ಚಿತ್ತಾಪುರ ತಾಲ್ಲೂಕುಗಳಲ್ಲಿ ಅನೇಕ ಸೇತುವೆಗಳು ಪ್ರವಾಹದಲ್ಲಿ ಮುಳುಗಿವೆ. ಇದರಿಂದ ಈ ಪ್ರಾಂತ್ಯಗಳಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ.

ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಅಲ್ಲಿನ ಜಲಾಶಯಗಳಿಂದ ನೀರು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಕೃಷ್ಣಾ ಜಲಾನಯನ ಪ್ರದೇಶದ ಜಿಲ್ಲೆಗಳಾದ ಬಾಗಲಕೋಟೆ, ವಿಜಯಪುರ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಪ್ರವಾಹದಿಂದ ಇನ್ನೂ ಮುಕ್ತಿ ಇಲ್ಲದಂತಾಗಿದೆ.

ಶನಿವಾರ ಹೆಚ್ಚಿನ ಪ್ರಮಾಣದ ಒಳಹರಿವಿನ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನ ನಾರಾಯಣಪುರ ಗ್ರಾಮದಲ್ಲಿನ ಕೃಷ್ಣಾ ನದಿಗೆ ಅಡ್ಡಲಾಗಿ ಕಟ್ಟಿರುವ ಬಸವಸಾಗರ ಜಲಾಶಯದಿಂದ ನೀರನ್ನು ಹೊರಬಿಡಲಾಗುತ್ತಿದೆ.
ಶನಿವಾರ ಬೆಳಿಗ್ಗೆ 10 ಗಂಟೆ ವೇಳೆಗೆ ಜಲಾಶಯದಿಂದ 98,800 ಕ್ಯೂಸೆಕ್ ನೀರನ್ನು ಹೊರಬಿಡಲಾಗಿದೆ. ಇದೇ ಪ್ರಮಾಣದ ನೀರು ಆಲಮಟ್ಟಿ ಜಲಾಶಯದಿಂದ ಹರಿದು ಬಂದಿತ್ತು.

ಜಲಾಶಯದಿಂದ ಒಂದು ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ ನೀರನ್ನು ಹೊರಬಿಟ್ಟರೆ ಯಾದಗಿರಿ ಮತ್ತು ಕಲಬುರಗಿಯನ್ನು ರಾಯಚೂರು ಜಿಲ್ಲೆಯೊಂದಿಗೆ ಸಂಪರ್ಕಿಸುವ ಪ್ರಮುಖ ರಸ್ತೆ ಮತ್ತು ಕೃಷಿ ಜಮೀನು ನೀರಿನಲ್ಲಿ ಮುಳುಗಲಿದೆ ಎಂದು ಕೃಷ್ಣಾ ಭಾಗ್ಯ ಜಲ ನಿಗಮದ ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

Back to top button
error: Content is protected !!