Bengaluru

ಪ್ರವಾಹ ಪೀಡಿತ ಜಿಲ್ಲೆಗಳಿಗೆ ಹೆಚ್ಚುವರಿ ಎನ್ ಡಿಆರ್ ಎಫ್ ತಂಡ -ಯಡಿಯೂರಪ್ಪ

ಬೆಂಗಳೂರು, ಅ.15- ಪ್ರವಾಹ ಪೀಡಿತ ಜಿಲ್ಲೆಗಳಿಗೆ ಹೆಚ್ಚುವರಿಯಾಗಿ ಎನ್ ಡಿಆರ್ ಎಫ್ ತಂಡಗಳನ್ನು ಒದಗಿಸಲು ಕ್ರಮಕೈಗೊಳ್ಳಲಾಗಿದ್ದು, ಎರಡು ಹೆಲಿಕಾಪ್ಟರ್ ಗಳನ್ನು ಬೀದರ್ ಗೆ ಕಳುಹಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ವಾಯುಭಾರ ಕುಸಿತದಿಂದ ಮೂರು-ನಾಲ್ಕು ದಿನಗಳಿಂದ ರಾಜ್ಯದ ಹಲವೆಡೆ ಹೆಚ್ಚಿನ ಮಳೆಯಾಗುತ್ತಿದೆ. ವಿಶೇಷವಾಗಿ ಭೀಮಾ ನದಿಯಲ್ಲಿ ನೀರು ಹೆಚ್ಚಾಗಿರುವುದರಿಂದ ನದಿಯ ಪಾತ್ರದ ಗ್ರಾಮಗಳು ಪ್ರವಾಹಕ್ಕೆ ಒಳಪಟ್ಟಿವೆ. ಈಗಾಗಲೇ ಜಿಲ್ಲಾಡಳಿತಗಳು, ಮುಂಜಾಗ್ರತೆ ಕ್ರಮವಾಗಿ ಅಪಾಯದಲ್ಲಿರುವ ಜನರನ್ನು ಗಂಜಿ ಕೇಂದ್ರಗಳಿಗೆ ಸ್ಥಳಾಂತರಿಸಲು ಕ್ರಮಕೈಗೊಂಡಿವೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಜನರ ಸುರಕ್ಷತೆಗಾಗಿ ಕೇಂದ್ರ ಸರ್ಕಾರದ ವತಿಯಿಂದ ಕಲಬುರಗಿಯಲ್ಲಿ -2, ಯಾದಗಿರಿಯಲ್ಲಿ 2 ಮತ್ತು ರಾಯಚೂರಿನಲ್ಲಿ 1 ಎನ್ ಡಿಆರ್ ಎಫ್ ತಂಡಗಳು ಈಗಾಗಲೇ ಕಾರ್ಯನಿರ್ವಹಿಸುತ್ತಿವೆ. ಹೆಚ್ಚುವರಿಯಾಗಿ ಇನ್ನೂ ಎರಡು ತಂಡಗಳನ್ನು ಅದರಲ್ಲಿ ಒಂದು ತಂಡವನ್ನು ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಿಗೆ ಕಳುಹಿಸಲು ಕ್ರಮಕೈಗೊಳ್ಳಲಾಗುತ್ತಿದೆ. ಜನರ ಸಂರಕ್ಷಣೆಗಾಗಿ ಎರಡು ಹೆಲಿಕಾಪ್ಟರ್ ಗಳನ್ನು ಸಹ ಬೀದರ್ ವಿಮಾನ ನಿಲ್ದಾಣಕ್ಕೆ ಕಳುಹಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಈಗಾಗಲೇ ಪ್ರವಾಹದಿಂದ ಆಗುವ ಅನಾಹುತಗಳನ್ನು ತಡೆಗಟ್ಟಲು ಹೆಚ್ಚಿನ ನಿಗಾವಹಿಸುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮತ್ತು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಶುಕ್ರವಾರ ಬೆಳಿಗ್ಗೆ ಪ್ರವಾಹ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಪಂ ಮುಖ್ಯ ನಿರ್ವಹಣಾಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಮುಖಾಂತರ ಸಭೆ ನಡೆಸಲಾಗುವುದು. ಮಳೆ ನಿಂತ ನಂತರ ಹಾನಿಯ ಬಗ್ಗೆ ಸಮೀಕ್ಷೆ ಕೈಗೊಂಡು ಪರಿಹಾರ ನೀಡಲು ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!