hubli

ಅನಾರೋಗ್ಯ; ಹುಬ್ಬಳ್ಳಿ ಪೊಲೀಸ್ ಕಮಿಷನರ್ ಲಾಬೂರಾಮ ಮಧ್ಯರಾತ್ರಿ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ

ಹುಬ್ಬಳ್ಳಿ, ೧೨- ಇಲ್ಲಿನ ಎಸ್ ಡಿಎಂ ಆಸ್ಪತ್ರೆಯಲ್ಲಿ ಗಂಟಲು ನೋವಿಗೆ ಶಸ್ತ್ರ ಚಿಕಿತ್ಸೆಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಲಾಭೂರಾಮ ಅವರ ಆರೋಗ್ಯದಲ್ಲಿ ಏರುಪೇರಾಗಿ ವ್ಯತ್ಯಾಸ ಕಂಡುಬಂದದರಿಂದ ಮಧ್ಯರಾತ್ರಿ ಅವರನ್ನು ಏರ್ ಆಂಬುಲೆನ್ಸ್ ವಿಮಾನದ ಮೂಲಕ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಂಟಲು ನೋವಿನಿಂದ ಬಳಲುತ್ತಿದ್ದ ಅವರು ವೈದ್ಯರ ಸಲಹೆ ಮೇರೆಗೆ ಶಸ್ತ್ರ ಚಿಕಿತ್ಸೆಗೆ ಒಳಗಾಗಿ ಆಸ್ಪತ್ರೆಯಲ್ಲಿ ಉಪಚರಿಸಲ್ಪಡುತ್ತಿದರು. ಆದರೆ ಆರೋಗ್ಯ ತೀರಾ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಮಧ್ಯರಾತ್ರಿ ವೈದ್ಯರ ಸಲಹೆ ಮೇರೆಗೆ ಬೆಂಗಳೂರಿಗೆ ಕಳಿಸಲಾಗಿದೆ.

ಶಸ್ತ್ರ ಚಿಕಿತ್ಸೆ ನಂತರ ಕಳೆದ ಎರಡು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಬುಧವಾರ ರಾತ್ರಿ ಅವರನ್ನು ಬೆಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಹುಬ್ಬಳ್ಳಿ ಏರ್ ಪೋರ್ಟ್ ಮತ್ತು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅನುಮತಿ ಪಡೆದ ನಂತರ ಬೆಂಗಳೂರಿನಿಂದ ಹುಬ್ಬಳ್ಳಿಗೆ ವಿಮಾನ ಬಂದಿತು. ರಾತ್ರಿ ಸುಮಾರು 2.30 ರ ವೇಳೆಗೆ ವಿಮಾನ ಬೆಂಗಳೂರು ತಲುಪಿದ್ದು, ಆಂಬುಲೆನ್ಸ್ ನಲ್ಲಿ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯ ಸುಧಾರಿಸುತ್ತಿದ್ದು, ಆತಂಕ ಪಡುವ ಅಗತ್ಯವಿಲ್ಲ
ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

2004 ಬ್ಯಾಚ್ ಐಪಿಎಸ್ ಅಧಿಕಾರಿಯಾಗಿರುವ ಲಾಭೂರಾಮ್ ಈಗಷ್ಟೇ ಅಂದರೆ ಅಕ್ಟೋಬರ್ 22 ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

 

Leave a Reply

Your email address will not be published. Required fields are marked *

Back to top button
error: Content is protected !!