ಬೆಂಗಳೂರು, ಸೆ. 21 : ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆಯ ತೀವ್ರತೆಗೆ ಅನುಗುಣವಾಗಿ ವಿವಿಧ ಜಿಲ್ಲೆಗಳಿಗೆ ರೆಡ್, ಆರೆಂಜ್ ಮತ್ತು ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ಸೆ. 21: ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಬಳ್ಳಾರಿ, ಉಡುಪಿ, ದಕ್ಷಿಣ ಕನ್ನಡ, ಮೈಸೂರು, ಮಂಡ್ಯ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯೊಂದಿಗೆ ಜೋರಾದ ಗಾಳಿ ಬೀಸುವ ಸಾಧ್ಯತೆಯಿದ್ದು, ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ಸೆ. 22: ಬಾಗಲಕೋಟೆ, ರಾಯಚೂರು, ಕೊಪ್ಪಳ, ಗದಗ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆಯಿದ್ದು, ಯಲ್ಲೋ ಅಲರ್ಟ್ ನೀಡಲಾಗಿದೆ.
ಸೆ. 23: ಕಲಬುರಗಿ, ವಿಜಯಪುರ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿಯಿಂದ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೀದರ, ಯಾದಗಿರಿ, ರಾಯಚೂರು, ಬಾಗಲಕೋಟೆ, ವಿಜಯನಗರ, ಉತ್ತರ ಕನ್ನಡ, ಚಿತ್ರದುರ್ಗ ಮತ್ತು ಹಾಸನ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ನೀಡಲಾಗಿದೆ.
ಸೆ. 24: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಅತಿ ಭಾರಿ ಮಳೆಯ ಸಾಧ್ಯತೆ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ತುಮಕೂರು, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಹವಾಮಾನ ಇಲಾಖೆಯ ಮುನ್ನೆಚ್ಚರಿಕೆಗಳನ್ನು ಪಾಲಿಸುವಂತೆ ಸೂಚಿಸಲಾಗಿದೆ.