LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ನೀಟ್‌ ಪರೀಕ್ಷೆ ರದ್ದು ಯುವಜನತೆಗೆ ಮಾಡಿದ ದ್ರೋಹ: ಸಿದ್ದರಾಮಯ್ಯ

ಬೆಂಗಳೂರು, ಮೇ 14 : ದೇಶಾದ್ಯಂತ 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಬರೆದಿದ್ದ ನೀಟ್‌-ಯುಜಿ 2026 ಪರೀಕ್ಷೆಯನ್ನು ರದ್ದುಗೊಳಿಸಿರುವ ಕೇಂದ್ರ ಸರಕಾರದ ನಿರ್ಧಾರವು ಆಡಳಿತಾತ್ಮಕ ವೈಫಲ್ಯ ಮಾತ್ರವಲ್ಲ, ದೇಶದ ಯುವಜನತೆಗೆ ಮಾಡಿದ ಕ್ರೂರ ದ್ರೋಹವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಕರ್ನಾಟಕದ 1 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಸೇರಿದಂತೆ ದೇಶದ 22 ಲಕ್ಷಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ತಿಂಗಳುಗಟ್ಟಲೆ ಶ್ರಮಪಟ್ಟು ಪರೀಕ್ಷೆ ಬರೆದಿದ್ದರು. ಪೋಷಕರು ತಮ್ಮ ಮಕ್ಕಳ ಭವಿಷ್ಯಕ್ಕಾಗಿ ತರಬೇತಿ, ಪ್ರಯಾಣ ಹಾಗೂ ಇತರೆ ವೆಚ್ಚಗಳಿಗೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿದ್ದಾರೆ. ಆದರೆ ಕೇಂದ್ರದ ನಿರ್ಧಾರ ಇಡೀ ವಿದ್ಯಾರ್ಥಿ ಸಮುದಾಯವನ್ನು ಅನಿಶ್ಚಿತತೆ ಮತ್ತು ಸಂಕಷ್ಟಕ್ಕೆ ತಳ್ಳಿದೆ ಎಂದು ಕಿಡಿಕಾರಿದ್ದಾರೆ.

2024ರಲ್ಲಿಯೇ ನೀಟ್‌ ಪರೀಕ್ಷೆಯು ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುತ್ತಿದೆ, ಶಾಲಾ ಶಿಕ್ಷಣ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತಿದೆ ಮತ್ತು ದಾಖಲಾತಿ ವಿಚಾರದಲ್ಲಿ ರಾಜ್ಯಗಳ ಅಧಿಕಾರ ಕಸಿದುಕೊಳ್ಳುತ್ತಿದೆ ಎಂದು ರಾಜ್ಯ ಸರಕಾರ ಸದನದಲ್ಲಿ ನಿರ್ಣಯ ಕೈಗೊಂಡಿತ್ತು. ಅಂದು ವ್ಯಕ್ತಪಡಿಸಿದ್ದ ಆತಂಕಗಳು ಈಗ ಸತ್ಯವಾಗಿವೆ ಎಂಬುದನ್ನು ಪರೀಕ್ಷೆ ರದ್ದುಪಡಿಸಿರುವ ಘಟನೆ ಸಾಬೀತುಪಡಿಸಿದೆ ಎಂದು ತಿಳಿಸಿದ್ದಾರೆ.

ನೇಮಕಾತಿ ಪರೀಕ್ಷೆಗಳಿಂದ ಹಿಡಿದು ರಾಷ್ಟ್ರೀಯ ಪ್ರವೇಶ ಪರೀಕ್ಷೆಗಳವರೆಗೆ ಪೇಪರ್‌ ಸೋರಿಕೆ ಪ್ರಕರಣಗಳು ನಡೆಯುತ್ತಲೇ ಇವೆ. ಪ್ರತಿಭಾವಂತ ವಿದ್ಯಾರ್ಥಿಗಳ ಹಿತ ರಕ್ಷಿಸುವಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.

ಈ ಪ್ರಕರಣಕ್ಕೆ ಹೊಣೆ ಹೊತ್ತ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಮಾಧ್ಯಮಗಳಿಂದ ದೂರ ಉಳಿದಿದ್ದು, ಯುವಜನರ ಭವಿಷ್ಯದ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲದ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಪರೀಕ್ಷಾ ಅಕ್ರಮ ಪ್ರಕರಣದ ಬಗ್ಗೆ ಪಾರದರ್ಶಕ ಮತ್ತು ಕಾಲಮಿತಿಯ ತನಿಖೆ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಹೊಸ ಪರೀಕ್ಷಾ ವೇಳಾಪಟ್ಟಿಯನ್ನು ಕೂಡಲೇ ಪ್ರಕಟಿಸಬೇಕು. ಜೊತೆಗೆ ಪ್ರವೇಶ ಪರೀಕ್ಷೆಗಳನ್ನು ನಡೆಸುವ ಅಧಿಕಾರವನ್ನು ಮತ್ತೆ ರಾಜ್ಯಗಳಿಗೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಪೇಪರ್‌ ಸೋರಿಕೆಯಿಂದ ಸಂಕಷ್ಟಕ್ಕೊಳಗಾದ ಪ್ರತಿಯೊಬ್ಬ ವಿದ್ಯಾರ್ಥಿ ಮತ್ತು ಪೋಷಕರ ಜೊತೆ ರಾಜ್ಯ ಸರಕಾರ ನಿಂತಿದೆ. ವಿದ್ಯಾರ್ಥಿಗಳ ಪರಿಶ್ರಮಕ್ಕೆ ತಕ್ಕ ನ್ಯಾಯ ಸಿಗುವಂತೆ ಮಾಡುವುದು ಮತ್ತು ಅವರ ಭವಿಷ್ಯ ರಕ್ಷಿಸುವುದು ನಮ್ಮ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST