ಬೆಳಗಾವಿ, ನ. 16: ಬರ ಪರಿಸ್ಥಿತಿಯಿಂದ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ರೈತರಿಗೆ ಸಾಲ ಮರುಪಾವತಿಗಾಗಿ ಒತ್ತಡ ಹೇರಬಾರದು. ಬ್ಯಾಂಕ್‌ಗಳು ರೈತರೊಂದಿಗೆ ಮಾನವೀಯತೆಯಿಂದ ವರ್ತಿಸಿ, ಸಾಲ ತೀರಿಸಲು ಸೂಕ್ತ ಕಾಲಾವಕಾಶ ನೀಡಬೇಕು. ಅನಗತ್ಯ ಕಿರುಕುಳ ನೀಡುವ ಬ್ಯಾಂಕ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಂಸದ ಜಗದೀಶ ಶೆಟ್ಟರ್ ಎಚ್ಚರಿಸಿದರು.
ಸೋಮವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ 2026–27ನೇ ಸಾಲಿನ ತೃತೀಯ ತ್ರೈಮಾಸಿಕ ಜಿಲ್ಲಾ ಸಮಾಲೋಚನಾ ಸಮಿತಿ ಹಾಗೂ ಜಿಲ್ಲಾಮಟ್ಟದ ಪರಿಶೀಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬರದಿಂದ ಬೆಳೆ ನಷ್ಟ ಅನುಭವಿಸಿರುವ ರೈತರು ಈಗಾಗಲೇ ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಸಾಲ ವಸೂಲಾತಿಗೆ ಒತ್ತಡ ಹೇರುವುದು ಸರಿಯಲ್ಲ. ರೈತರು ಹಂತ ಹಂತವಾಗಿ ಸಾಲ ಮರುಪಾವತಿಸಲು ಅವಕಾಶ ಕಲ್ಪಿಸಬೇಕು. ಮುಂದಿನ ಬೆಳೆ ಬೆಳೆಯಲು ಅನುಕೂಲವಾಗುವಂತೆ ಹೊಸ ಬೆಳೆ ಸಾಲ ಮಂಜೂರು ಮಾಡಲು ಬ್ಯಾಂಕ್‌ಗಳು ಸಹಕರಿಸಬೇಕು ಎಂದು ಸೂಚಿಸಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳಿಗೆ ದೊರೆಯಬೇಕಾದ ಸಾಲ ಹಾಗೂ ಇತರ ಸೌಲಭ್ಯಗಳನ್ನು ವಿಳಂಬವಿಲ್ಲದೆ ತಲುಪಿಸಬೇಕು. ಬ್ಯಾಂಕ್ ಅಧಿಕಾರಿಗಳು ಅನಗತ್ಯ ಕಾರಣಗಳನ್ನು ನೀಡಿ ಅರ್ಜಿಗಳನ್ನು ತಿರಸ್ಕರಿಸಬಾರದು. ಗ್ರಾಮೀಣ ಜನರಿಗೆ ಬ್ಯಾಂಕಿಂಗ್ ಸೇವೆಗಳು ಸುಲಭವಾಗಿ ದೊರೆಯುವಂತೆ ಅಗತ್ಯವಿರುವ ಗ್ರಾಮಗಳಲ್ಲಿ ಹೊಸ ಬ್ಯಾಂಕ್ ಶಾಖೆಗಳನ್ನು ತೆರೆಯಲು ಕ್ರಮ ಕೈಗೊಳ್ಳಬೇಕು ಎಂದರು.
ಬ್ಯಾಂಕ್‌ಗಳಲ್ಲಿ ಕನ್ನಡ ಬಳಕೆ ಕಡ್ಡಾಯ
ಬ್ಯಾಂಕ್‌ಗಳಲ್ಲಿ ಕನ್ನಡ ಭಾಷೆಯ ಬಳಕೆಗೆ ಆದ್ಯತೆ ನೀಡಬೇಕು. ಸಿಬ್ಬಂದಿ ಗ್ರಾಹಕರೊಂದಿಗೆ ಕನ್ನಡದಲ್ಲೇ ವ್ಯವಹರಿಸಬೇಕು. ಭಾಷೆಯ ಸಮಸ್ಯೆಯಿಂದ ರೈತರು ಹಾಗೂ ಗ್ರಾಮೀಣ ಪ್ರದೇಶದ ಜನರು ಬ್ಯಾಂಕಿಂಗ್ ಸೇವೆಗಳಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದು ಶೆಟ್ಟರ್ ನಿರ್ದೇಶಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಮಾತನಾಡಿ, ಸರ್ಕಾರದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳಿಗೆ ಸಾಲ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸಬೇಕು. ಸಾಲ ಮಂಜೂರಾತಿಯಲ್ಲಿ ಅನಗತ್ಯ ವಿಳಂಬ ಅಥವಾ ಕಾರಣವಿಲ್ಲದೆ ಅರ್ಜಿ ತಿರಸ್ಕರಿಸುವುದು ಕಂಡುಬಂದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಬ್ಯಾಂಕ್ ಸಿಬ್ಬಂದಿ ಗ್ರಾಹಕರೊಂದಿಗೆ ಕನ್ನಡದಲ್ಲೇ ವ್ಯವಹರಿಸಬೇಕು. ಭಾಷೆಯ ಕಾರಣದಿಂದ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಎಚ್ಚರ ವಹಿಸಬೇಕು ಎಂದು ಸೂಚಿಸಿದರು.
ಇದೇ ಸಂದರ್ಭದಲ್ಲಿ ಹಣಕಾಸು ಯೋಜನೆಗಳ ಸ್ಯಾಚ್ಯುರೇಷನ್ ಅಭಿಯಾನ ಹಾಗೂ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯ ಪ್ರಚಾರ ಪತ್ರಗಳನ್ನು ಬಿಡುಗಡೆ ಮಾಡಲಾಯಿತು.
ಲೀಡ್ ಬ್ಯಾಂಕ್ ವ್ಯವಸ್ಥಾಪಕ ಪ್ರಶಾಂತ ಘೋಡಕೆ, ಕೆನರಾ ಬ್ಯಾಂಕ್ ಸಹಾಯಕ ಪ್ರಾದೇಶಿಕ ವ್ಯವಸ್ಥಾಪಕ ಜೆ. ಪರಮೇಶ್ವರನ್ ಸೇರಿದಂತೆ ವಿವಿಧ ಬ್ಯಾಂಕ್‌ಗಳ ಅಧಿಕಾರಿಗಳು ಉಪಸ್ಥಿತರಿದ್ದರು.