ಹೊಸದಿಲ್ಲಿ, ಜುಲೈ 24: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಸೇರಿದಂತೆ ಅತಿಯಾದ ಬಲಪ್ರಯೋಗ ನಡೆಸಲಾಗಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆರೋಪಿಸಿದರು.
ಗಾಯಗೊಂಡ ವಿದ್ಯಾರ್ಥಿಗಳನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಅವರು, ಪ್ರತಿಭಟನಾಕಾರ ಸಾಹಿಲ್ ಅವರ ಒಂದು ಕಣ್ಣಿಗೆ ಪೆಲೆಟ್ ತಗುಲಿ ತೀವ್ರ ಹಾನಿಯಾಗಿದ್ದು, ದೃಷ್ಟಿ ಮರಳುವ ಬಗ್ಗೆ ವೈದ್ಯರು ಖಚಿತವಾಗಿ ಹೇಳಿಲ್ಲ ಎಂದು ತಿಳಿಸಿದರು.
ಜುಲೈ 20ರಂದು ನಡೆದ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆಯಾಗಿರುವ ಬಗ್ಗೆ ಇಂಡಿಯಾ ಟುಡೆ ಪ್ರಕಟಿಸಿದ ವರದಿಯನ್ನು ಉಲ್ಲೇಖಿಸಿದ ಅವರು, ದೆಹಲಿ ಪೊಲೀಸರ ನಿರಾಕರಣೆಯ ನಡುವೆಯೂ ಹಲವರಿಗೆ ಕಣ್ಣು ಸೇರಿದಂತೆ ದೇಹದ ವಿವಿಧ ಭಾಗಗಳಿಗೆ ಗಂಭೀರ ಗಾಯಗಳಾಗಿವೆ ಎಂದು ಹೇಳಿದರು.
ಪ್ರಶ್ನೆಪತ್ರಿಕೆ ಸೋರಿಕೆಗೆ ಹೊಣೆಗಾರರ ವಿರುದ್ಧ ಕಠಿಣ ಕ್ರಮ, ವಿದ್ಯಾರ್ಥಿಗಳ ಮೇಲೆ ಬಲಪ್ರಯೋಗ ನಡೆಸಿದವರ ವಿರುದ್ಧ ತನಿಖೆ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಥಿಗಳ ಬಳಿ ಕ್ಷಮೆಯಾಚಿಸಬೇಕು ಎಂದು ರಾಹುಲ್ ಗಾಂಧಿ ಒತ್ತಾಯಿಸಿದರು.
ಪ್ರತಿಭಟನಾಕಾರರ ವಿರುದ್ಧ ದಾಖಲಿಸಿರುವ ಪ್ರಕರಣಗಳನ್ನು ಹಿಂತೆಗೆದುಕೊಳ್ಳುವ ಹಾಗೂ ಬಲಪ್ರಯೋಗದ ಆರೋಪಗಳ ಕುರಿತು ಕ್ರಮ ಕೈಗೊಳ್ಳುವ ವಿಷಯಕ್ಕೆ ಸರ್ಕಾರ ತಾತ್ವಿಕ ಒಪ್ಪಿಗೆ ಸೂಚಿಸಿದೆ ಎಂದ ಅವರು, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರ ರಾಜೀನಾಮೆ ಕುರಿತು ಇನ್ನೂ ತೀರ್ಮಾನವಾಗಿಲ್ಲ ಎಂದು ಹೇಳಿದರು.
19 ವರ್ಷದ ದಿಲ್ಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಾಹಿಲ್, ಎಸ್‌ಎಸ್‌ಸಿ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆಯಿಂದ ಸಂತ್ರಸ್ತರಾಗಿದ್ದು, ನ್ಯಾಯಕ್ಕಾಗಿ ಪ್ರತಿಭಟನೆಗೆ ಬಂದಿದ್ದರು. ಈಗ ಅವರು ಒಂದು ಕಣ್ಣಿನ ದೃಷ್ಟಿ ಕಳೆದುಕೊಳ್ಳುವ ಅಪಾಯ ಎದುರಿಸುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದರು.