ಹೊಸದಿಲ್ಲಿ, ನ. 20: ಮುಖ್ಯ ಚುನಾವಣಾ ಆಯುಕ್ತರು ಹಾಗೂ ಚುನಾವಣಾ ಆಯುಕ್ತರ ನೇಮಕಾತಿಗೆ ಸಂಬಂಧಿಸಿದ 2023ರ ಕಾಯ್ದೆಯನ್ನು ಪ್ರಶ್ನಿಸಿರುವ ಪ್ರಕರಣದಲ್ಲಿ ವಿಭಜಿತ ತೀರ್ಪಿನ ಮರುಪರಿಶೀಲನಾ ಅರ್ಜಿಯನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಬೇಕೆಂಬ ಮನವಿಯನ್ನು ಸುಪ್ರೀಂ ಕೋರ್ಟ ಶುಕ್ರವಾರ ತಿರಸ್ಕರಿಸಿದೆ.
ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ನ್ಯಾಯಮೂರ್ತಿಗಳಾದ ಜಾಯ್ಮಲ್ಯ ಬಾಗ್ಚಿ ಮತ್ತು ವಿ. ಮೋಹನ ಅವರ ಪೀಠವು, ಮರುಪರಿಶೀಲನಾ ಅರ್ಜಿ ಸೇರಿದಂತೆ ಪ್ರಕರಣವನ್ನು ದೊಡ್ಡ ಪೀಠಕ್ಕೆ ವರ್ಗಾಯಿಸಿರುವ ಆದೇಶದ ವಿರುದ್ಧದ ಆಕ್ಷೇಪಣೆಗಳನ್ನು ಈಗಾಗಲೇ ರಚಿಸಲಾಗಿರುವ ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠವೇ ಪರಿಗಣಿಸಬಹುದು ಎಂದು ಸ್ಪಷ್ಟಪಡಿಸಿತು.
ವಿಭಜಿತ ತೀರ್ಪು ನೀಡಿದ ನ್ಯಾಯಮೂರ್ತಿಗಳಲ್ಲಿ ಒಬ್ಬರು ನಿವೃತ್ತರಾದರೂ ಸಂವಿಧಾನ ಪೀಠವು ಮರುಪರಿಶೀಲನಾ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ಅವಕಾಶವಿದೆ ಎಂದು ಮುಖ್ಯ ನ್ಯಾಯಮೂರ್ತಿ ತಿಳಿಸಿದರು.
ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಪ್ರಶಾಂತ್ ಭೂಷಣ್, ಸೆಪ್ಟೆಂಬರ್ 23ರಂದು ವಿಭಜಿತ ತೀರ್ಪು ನೀಡಿದ್ದ ನ್ಯಾಯಮೂರ್ತಿಗಳಾದ ದೀಪಂಕರ್ ದತ್ತಾ ಮತ್ತು ಸತೀಶ್ ಚಂದ್ರ ಶರ್ಮಾ ಅವರ ಮೂಲ ಪೀಠದ ಮುಂದೆಯೇ ಮರುಪರಿಶೀಲನಾ ಅರ್ಜಿಯನ್ನು ಪಟ್ಟಿ ಮಾಡಬೇಕೆಂದು ಒತ್ತಾಯಿಸಿದರು.
ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮುಂದಿನ ವಾರ ನಿವೃತ್ತರಾಗಲಿದ್ದು, ಪ್ರಕರಣದಲ್ಲಿ ಅವರಿಗೆ ಹಿತಾಸಕ್ತಿ ಸಂಘರ್ಷವಿದೆ ಎಂದು ಆರೋಪಿಸಿದ ಭೂಷಣ್, ದೊಡ್ಡ ಪೀಠಕ್ಕೆ ವರ್ಗಾಯಿಸುವ ಆದೇಶವನ್ನು ಹಿಂಪಡೆಯುವಂತೆ ಕೋರಿದರು. ಆದರೆ, ಈ ಎಲ್ಲ ಆಕ್ಷೇಪಣೆಗಳನ್ನು ಸಂವಿಧಾನ ಪೀಠದ ಮುಂದೆಯೇ ಪ್ರಸ್ತಾಪಿಸಬಹುದು ಎಂದು ಮುಖ್ಯ ನ್ಯಾಯಮೂರ್ತಿ ಸೂಚಿಸಿದರು.
ನೇಮಕಾತಿ ಸಮಿತಿಯಿಂದ ಮುಖ್ಯ ನ್ಯಾಯಮೂರ್ತಿ ಹೊರಗೆ
ಮುಖ್ಯ ಚುನಾವಣಾ ಆಯುಕ್ತರು ಹಾಗೂ ಚುನಾವಣಾ ಆಯುಕ್ತರ ನೇಮಕಾತಿ ಸಮಿತಿಯಿಂದ ಭಾರತದ ಮುಖ್ಯ ನ್ಯಾಯಮೂರ್ತಿಯನ್ನು ಹೊರಗಿಟ್ಟಿರುವುದು 2023ರ ಕಾಯ್ದೆಯ ವಿರುದ್ಧದ ಪ್ರಮುಖ ಆಕ್ಷೇಪಣೆಯಾಗಿದೆ. ಪ್ರಸ್ತುತ ಸಮಿತಿಯಲ್ಲಿ ಪ್ರಧಾನಮಂತ್ರಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಪ್ರಧಾನಮಂತ್ರಿ ನಾಮನಿರ್ದೇಶನ ಮಾಡುವ ಕೇಂದ್ರ ಸಚಿವರೊಬ್ಬರು ಸದಸ್ಯರಾಗಿದ್ದಾರೆ.
ಈ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿರುವ ಅರ್ಜಿಗಳನ್ನು ದೊಡ್ಡ ಪೀಠಕ್ಕೆ ವರ್ಗಾಯಿಸುವ ಕುರಿತು ಸೆಪ್ಟೆಂಬರ್ 23ರಂದು ಇಬ್ಬರು ನ್ಯಾಯಮೂರ್ತಿಗಳು ಭಿನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದರು.
ನ್ಯಾಯಮೂರ್ತಿ ದೀಪಂಕರ್ ದತ್ತಾ ಅವರು ಇಬ್ಬರು ನ್ಯಾಯಮೂರ್ತಿಗಳ ಪೀಠವೇ ಪ್ರಕರಣವನ್ನು ತೀರ್ಮಾನಿಸಬಹುದು ಎಂದಿದ್ದರೆ, ಮಹತ್ವದ ಸಾಂವಿಧಾನಿಕ ಪ್ರಶ್ನೆಗಳಿರುವುದರಿಂದ ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠಕ್ಕೆ ವರ್ಗಾಯಿಸಬೇಕು ಎಂದು ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಅಭಿಪ್ರಾಯಪಟ್ಟಿದ್ದರು.