ಹೊಸದಿಲ್ಲಿ, ನ. 19: ಪ್ರಯಾಣದ ಟಿಕೆಟ್ ಹಾಗೂ ಅಗತ್ಯ ದಾಖಲೆಗಳಿಲ್ಲದೆ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದೊಳಗೆ ಬಲವಂತವಾಗಿ ನುಗ್ಗಲು ಯತ್ನಿಸಿದ ವ್ಯಕ್ತಿಯನ್ನು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ.
ಬುಧವಾರ ಮಧ್ಯಾಹ್ನ ಸುಮಾರು 3 ಗಂಟೆಗೆ ವಿಮಾನ ನಿಲ್ದಾಣದ 3ನೇ ಟರ್ಮಿನಲ್ನ ನಿರ್ಗಮನ ದ್ವಾರದಲ್ಲಿ ಈ ಘಟನೆ ನಡೆದಿದೆ. ಹರಿಯಾಣ ಮೂಲದ ವ್ಯಕ್ತಿಯೊಬ್ಬ ಭದ್ರತಾ ಸಿಬ್ಬಂದಿಯನ್ನು ತಳ್ಳಿ ಒಳಗೆ ನುಗ್ಗಿ ಓಡಲು ಆರಂಭಿಸಿದ್ದಾನೆ. ಕೂಡಲೇ ಕಾರ್ಯಪ್ರವೃತ್ತರಾದ ಭದ್ರತಾ ಸಿಬ್ಬಂದಿ ಕೆಲವೇ ಮೀಟರ್ ದೂರದಲ್ಲಿ ಆತನನ್ನು ಹಿಡಿದಿದ್ದಾರೆ.
ಶಸ್ತ್ರಸಜ್ಜಿತ ಸಿಬ್ಬಂದಿ ಹಾಗೂ ತ್ವರಿತ ಕಾರ್ಯಾಚರಣೆ ತಂಡದ ನೆರವಿನಿಂದ ಕೆಲವೇ ಸೆಕೆಂಡುಗಳಲ್ಲಿ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ. ಇದರಿಂದ ಸಂಭವನೀಯ ಭದ್ರತಾ ಅಪಾಯವನ್ನು ತಪ್ಪಿಸಲಾಗಿದೆ ಎಂದು ಸಿಐಎಸ್ಎಫ್ ತಿಳಿಸಿದೆ.
ಘಟನೆಯ 25 ಸೆಕೆಂಡ್ಗಳ ದೃಶ್ಯಾವಳಿಯನ್ನು ಸಿಐಎಸ್ಎಫ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ. ವ್ಯಕ್ತಿಯ ಬ್ಯಾಗ್ ಪರಿಶೀಲಿಸಿದಾಗ ಗುರುತಿನ ಚೀಟಿಗಳು ಹಾಗೂ ಶೈಕ್ಷಣಿಕ ಪ್ರಮಾಣಪತ್ರಗಳು ಪತ್ತೆಯಾಗಿವೆ. ಹೆಚ್ಚಿನ ವಿಚಾರಣೆಗಾಗಿ ಆತನನ್ನು ದೆಹಲಿ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.
ವಿಮಾನ ನಿಲ್ದಾಣದೊಳಗೆ ಪ್ರವೇಶಿಸಲು ಮಾನ್ಯ ಪ್ರಯಾಣದ ದಾಖಲೆ ಹಾಗೂ ಗುರುತಿನ ಚೀಟಿ ಕಡ್ಡಾಯವಾಗಿದ್ದು, ಘಟನೆಯ ಹಿನ್ನೆಲೆಯಲ್ಲಿ ಭದ್ರತಾ ಸಿಬ್ಬಂದಿಯ ತ್ವರಿತ ಕಾರ್ಯಾಚರಣೆ ಗಮನ ಸೆಳೆದಿದೆ.