ಭಟ್ಕಳ, ಮೇ 24 : ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಸಮೀಪದ ತಟ್ಟೆಹಕ್ಕಲು ನದಿಯಲ್ಲಿ ಚಿಪ್ಪು ತೆಗೆಯಲು ನೀರಿಗೆ ಇಳಿದ ಒಂದೇ ಕುಟುಂಬದ 8 ಮಂದಿ ಮೃತಪಟ್ಟ ದಾರುಣ ಘಟನೆ ಭಾನುವಾರ ನಡೆದಿದೆ. ಘಟನೆಯಲ್ಲಿ ಇನ್ನೂ ಕೆಲವರು ನಾಪತ್ತೆಯಾಗಿದ್ದು, ಅವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ.
ರವಿವಾರ ರಜೆ ಹಿನ್ನೆಲೆಯಲ್ಲಿ ಒಂದೇ ಕುಟುಂಬದ 13 ಮಂದಿ ಅಳ್ವೇಕೋಡಿ ಸಮುದ್ರ ತೀರಕ್ಕೆ ವಿಹಾರಕ್ಕೆ ತೆರಳಿದ್ದರು. ಈ ವೇಳೆ ಸಮುದ್ರ ತೀರದ ಸಮೀಪದ ನದಿಯಲ್ಲಿ ಕೆಲವರು ಕಪ್ಪೆಚಿಪ್ಪು ಸಂಗ್ರಹಿಸಲು ನೀರಿಗೆ ಇಳಿದಾಗ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿಕೊಂಡು ಹೋಗಿದ್ದಾರೆ ಎಂದು ತಿಳಿದುಬಂದಿದೆ.
ಮೃತಪಟ್ಟ 8 ಮಂದಿಯ ಪೈಕಿ 6 ಮೃತದೇಹಗಳನ್ನು ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಹಾಗೂ ಉಳಿದ 2 ಮೃತದೇಹಗಳನ್ನು ಆರ್.ಎನ್.ಎಸ್. ಆಸ್ಪತ್ರೆಗೆ ರವಾನಿಸಲಾಗಿದೆ.
ಘಟನೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಒಂದೇ ಕುಟುಂಬದ 8 ಮಂದಿ ನೀರಿನಲ್ಲಿ ಮುಳುಗಿ ಸಾವಿಗೀಡಾದ ಸುದ್ದಿ ತಿಳಿದು ಸಂಕಟವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಇದು ಅತ್ಯಂತ ದುರದೃಷ್ಟಕರ ಮತ್ತು ನೋವಿನ ಘಟನೆ ಎಂದು ಅವರು ಹೇಳಿದ್ದಾರೆ.
ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರದ ವತಿಯಿಂದ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಘೋಷಿಸಿದ್ದಾರೆ.
ಇನ್ನೂ ಕೆಲವರು ಕಾಣೆಯಾಗಿರುವ ಮಾಹಿತಿ ಇದ್ದು, ಅವರಿಗಾಗಿ ತೀವ್ರ ಹುಡುಕಾಟ ನಡೆಸಲಾಗುತ್ತಿದೆ. ಕಾಣೆಯಾದವರು ಸುರಕ್ಷಿತವಾಗಿ ಮರಳಲಿ ಎಂದು ದೇವರಲ್ಲಿ ಪ್ರಾರ್ಥಿಸೋಣ ಎಂದು ಮುಖ್ಯಮಂತ್ರಿ ಎಕ್ಸ್ ಪೋಸ್ಟಿನಲ್ಲಿ ತಿಳಿಸಿದ್ದಾರೆ.
ಪೊಲೀಸ್ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದು, ನಾಪತ್ತೆಯಾದವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿಸಿದ್ದಾರೆ.