ರಾಯಬಾಗ, ಮೇ 26 : ಬೈಕ್ ಮತ್ತು ಟಂಟಂ ವಾಹನದ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 9 ತಿಂಗಳ ಮಗು ಸೇರಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ರೈಲ್ವೆ ನಿಲ್ದಾಣ ಸಮೀಪ ಸೋಮವಾರ ರಾತ್ರಿ ನಡೆದಿದೆ.
ಮೃತರನ್ನು ರಾಯಬಾಗ ತಾಲೂಕಿನ ಬೋಮ್ಮನಾಳ ಗ್ರಾಮದ ನಿವಾಸಿಗಳಾದ ಮಹಾಂತೇಶ ಮಾನೆ (27), ಅವರ ಪತ್ನಿ ಪಾಯಲ ಮಾನೆ (23) ಹಾಗೂ 9 ತಿಂಗಳ ಪುತ್ರ ಸಮರ್ಥ ಮಾನೆ ಎಂದು ಗುರುತಿಸಲಾಗಿದೆ.
ಇವರೊಂದಿಗೆ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಎರಡೂವರೆ ವರ್ಷದ ಪುತ್ರ ಚೈತನ್ಯ ಮಾನೆಗೆ ಗಂಭೀರ ಗಾಯಗಳಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಸೋಮವಾರ ರಾತ್ರಿ ಸುಮಾರು 7 ಗಂಟೆ ವೇಳೆಗೆ ರಾಯಬಾಗ ರೈಲ್ವೆ ನಿಲ್ದಾಣ ಸಮೀಪ ಈ ದುರ್ಘಟನೆ ಸಂಭವಿಸಿದೆ. ಕುಟುಂಬದವರು ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಟಂಟಂ ವಾಹನ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಡಿಕ್ಕಿಯ ತೀವ್ರತೆಗೆ ಬೈಕ್ ಸಂಪೂರ್ಣ ಜಖಂಗೊಂಡಿದ್ದು, ಮಹಾಂತೇಶ, ಪಾಯಲ ಹಾಗೂ ಮಗು ಸಮರ್ಥ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ದೃಶ್ಯ ಕಂಡ ಸ್ಥಳೀಯರು ತಕ್ಷಣ ಗಾಯಾಳುವನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸಿದ್ದಾರೆ.
ಅಪಘಾತ ಸಂಭವಿಸುತ್ತಿದ್ದಂತೆ ಟಂಟಂ ಚಾಲಕ ವಾಹನವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ರಾಯಬಾಗ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪರಾರಿಯಾದ ಚಾಲಕನ ಪತ್ತೆಗೆ ಮುಂದಾಗಿದ್ದಾರೆ.