ಅಳ್ನಾವರ, ನ. 16: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಹಿಂಬದಿ ಕುಳಿತಿದ್ದ ಮತ್ತೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಕಡಬಗಟ್ಟಿ ಗ್ರಾಮದ ಹೊರವಲಯದ ಗುಂಜೀಕರ ಪೆಟ್ರೋಲ್ ಪಂಪ್ ಬಳಿ ಭಾನುವಾರ ಮಧ್ಯಾಹ್ನ ನಡೆದಿದೆ.
ಹುಬ್ಬಳ್ಳಿ ತಾಲೂಕಿನ ಸುಳ್ಳ ಗ್ರಾಮದ ನಿವಾಸಿ ದಯಾನಂದ ಶಿವಳಿಮಠ (25) ಮೃತಪಟ್ಟ ಯುವಕ. ಬೈಕ್ ಹಿಂಬದಿ ಕುಳಿತಿದ್ದ ಕಲ್ಮೇಶ ಬಸಪ್ಪ ಯಾಬಣ್ಣವರ ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಧಾರವಾಡದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ದಯಾನಂದ ಅವರು ಅಳ್ನಾವರದಿಂದ ಧಾರವಾಡದತ್ತ ಬೈಕ್ನಲ್ಲಿ ತೆರಳುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿಯ ರಭಸಕ್ಕೆ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಈ ಕುರಿತು ಅಳ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.