ತುಮಕೂರು, ನ. 21: ರೈತರು ತಮ್ಮ ಜಮೀನಿಗೆ ಸಂಬಂಧಿಸಿದ ಪಹಣಿ, ಆಕಾರಬಂದ್, ನಕಾಶೆ ಸೇರಿದಂತೆ ವಿವಿಧ ದಾಖಲೆಗಳಿಗಾಗಿ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು, ಭೂಮಿಯ ಸಮಗ್ರ ಮಾಹಿತಿ ಒಂದೇ ದಾಖಲೆಯಲ್ಲಿ ಲಭ್ಯವಾಗುವಂತೆ ಹೊಸ ಮಾದರಿಯ ‘ನಮೂನೆ 16-ಎ’ ಪಹಣಿ ವ್ಯವಸ್ಥೆಯನ್ನು ರೂಪಿಸಲಾಗಿದೆ ಎಂದು ಡಾ. ಜಿ. ಪರಮೇಶ್ವರ ತಿಳಿಸಿದರು.
ಜಿಲ್ಲೆಯ ಕೊರಟಗೆರೆಯಲ್ಲಿ ಶನಿವಾರ ಪ್ರಜಾಸೇವೆ ಅಭಿಯಾನ ಉದ್ಘಾಟಿಸಿ ಮಾತನಾಡಿದ ಅವರು, ಹೊಸ ಪಹಣಿಯಲ್ಲಿ ರೈತರ ವಿವರ, ಬೆಳೆ ಮಾಹಿತಿ, ಆಧಾರ್ ವಿವರ, ಭಾವಚಿತ್ರ ಹಾಗೂ ಭೂಮಿಗೆ ಸಂಬಂಧಿಸಿದ ಇತರ ದಾಖಲೆಗಳು ಒಂದೇ ಕಡೆ ಲಭ್ಯವಾಗಲಿವೆ. ದೇಶದಲ್ಲಿಯೇ ಮೊದಲ ಬಾರಿಗೆ ಇಂತಹ ವ್ಯವಸ್ಥೆಯನ್ನು ರೂಪಿಸಲಾಗುತ್ತಿದೆ ಎಂದರು.
ಸಾರ್ವಜನಿಕರು ಸಣ್ಣಪುಟ್ಟ ಕೆಲಸಗಳಿಗೂ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ಪ್ರಜಾಸೇವೆ ಅಭಿಯಾನ ಆರಂಭಿಸಲಾಗಿದೆ. ಜನರಿಂದ ಸ್ವೀಕರಿಸುವ ಅರ್ಜಿಗಳನ್ನು ಸಾಧ್ಯವಾದಷ್ಟು ಅಂದೇ ಸಂಜೆ ವೇಳೆಗೆ ವಿಲೇವಾರಿ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.
15 ಲಕ್ಷ ನಿವೇಶನಗಳ ವಿತರಣೆಗೆ ನಿರ್ಧಾರ
ರಾಜ್ಯದಲ್ಲಿ ನಿವೇಶನರಹಿತ ಬಡ ಕುಟುಂಬಗಳಿಗೆ 15 ಲಕ್ಷ ನಿವೇಶನಗಳನ್ನು ಒದಗಿಸಲು ಸರ್ಕಾರ ನಿರ್ಧರಿಸಿದೆ. ಈವರೆಗೆ ನೀಡುತ್ತಿದ್ದ 20×30 ಅಡಿ ನಿವೇಶನಗಳ ಬದಲಿಗೆ 30×40 ಅಡಿ ಅಳತೆಯ ನಿವೇಶನಗಳನ್ನು ವಿತರಿಸಲಾಗುವುದು. ತುಮಕೂರು ಜಿಲ್ಲೆಯಲ್ಲಿ ಈಗಾಗಲೇ 20 ಸಾವಿರ ನಿವೇಶನಗಳನ್ನು ಸಿದ್ಧಪಡಿಸಲಾಗಿದ್ದು, ಗ್ರಾಮಸಭೆಗಳ ಮೂಲಕ ಅರ್ಹ ಫಲಾನುಭವಿಗಳನ್ನು ಗುರುತಿಸಲಾಗುವುದು ಎಂದರು.
ಚುನಾವಣೆಗೆ ಮುನ್ನ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಈ ಯೋಜನೆಗಳಿಗೆ ಪ್ರತಿವರ್ಷ ಸುಮಾರು ₹50 ಸಾವಿರ ಕೋಟಿ ವೆಚ್ಚ ಮಾಡಲಾಗುತ್ತಿದ್ದು, ಈವರೆಗೆ ಒಟ್ಟು ₹1.62 ಲಕ್ಷ ಕೋಟಿ ಖರ್ಚು ಮಾಡಲಾಗಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ 4,500 ಎಲೆಕ್ಟ್ರಿಕ್ ಬಸ್ಗಳನ್ನು ಒದಗಿಸಲು ಸಚಿವ ಸಂಪುಟ ನಿರ್ಧರಿಸಿದೆ. ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ₹6 ಸಾವಿರ ಕೋಟಿ ಹಾಗೂ ಕುಡಿಯುವ ನೀರಿನ ಯೋಜನೆಗಳಿಗೆ ₹16 ಸಾವಿರ ಕೋಟಿ ವೆಚ್ಚ ಮಾಡಲಾಗಿದೆ. ಕೊರಟಗೆರೆ ಕ್ಷೇತ್ರದ ರಸ್ತೆ ಅಭಿವೃದ್ಧಿಗೆ ₹25 ಕೋಟಿ ಅನುದಾನ ಒದಗಿಸಲಾಗಿದೆ ಎಂದು ಹೇಳಿದರು.
ವಿರೋಧ ಪಕ್ಷಗಳ ಟೀಕೆಗಳಿಗೆ ಸರ್ಕಾರ ಜಗ್ಗುವುದಿಲ್ಲ. ಅಭಿವೃದ್ಧಿ ಕಾರ್ಯಗಳನ್ನು ಮುಂದುವರಿಸಲಿದ್ದು, 2028ರ ವಿಧಾನಸಭೆ ಚುನಾವಣೆಯಲ್ಲಿಯೂ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.