ಹೊಸದಿಲ್ಲಿ, ಜುಲೈ 21: ‘ಸಂಸತ್ ಚಲೊ’ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ಕ್ರೂರ ವರ್ತನೆ, ಲಾಠಿ ಪ್ರಹಾರ ಹಾಗೂ ದೇಶದಲ್ಲಿ ಮರುಕಳಿಸುತ್ತಿರುವ ಪರೀಕ್ಷಾ ಅಕ್ರಮಗಳ ಕುರಿತು ಸಂಸತ್ತಿನಲ್ಲಿ ಚರ್ಚೆಗೆ ಅವಕಾಶ ನೀಡುವಂತೆ ಒತ್ತಾಯಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದ ವಿಪಕ್ಷಗಳ ಸಂಸದರು ಮಂಗಳವಾರ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ರಾಹುಲ್ ಗಾಂಧಿ ಅವರೊಂದಿಗೆ ಸಮಾಜವಾದಿ ಪಕ್ಷದ ಧರ್ಮೇಂದ್ರ ಯಾದವ, ಶಿವಸೇನೆ (ಯುಬಿಟಿ)ಯ ಅರವಿಂದ ಸಾವಂತ ಹಾಗೂ ಆರ್‌ಎಸ್‌ಪಿಯ ಎನ್.ಕೆ. ಪ್ರೇಮಚಂದ್ರನ್ ಸೇರಿದಂತೆ ಹಲವು ವಿಪಕ್ಷಗಳ ಸಂಸದರು ಉಪಸ್ಥಿತರಿದ್ದರು.
ಸ್ಪೀಕರ್ ಅವರನ್ನು ಭೇಟಿಯಾದ ಬಳಿಕ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, ವಿದ್ಯಾರ್ಥಿಗಳ ಮೇಲೆ ನಡೆದ ಕ್ರೂರ ವರ್ತನೆ ಮತ್ತು ಪರೀಕ್ಷಾ ಬಿಕ್ಕಟ್ಟಿನ ಕುರಿತು ಸರ್ಕಾರದ ಸಂಪೂರ್ಣ ಹೊಣೆಗಾರಿಕೆಯ ಕೊರತೆಯ ಬಗ್ಗೆ ಸದನದಲ್ಲಿ ಚರ್ಚೆಗೆ ಅವಕಾಶ ಕೋರಿದ್ದೇವೆ ಎಂದು ತಿಳಿಸಿದ್ದಾರೆ.
ಸರ್ಕಾರದಲ್ಲಿ ಉತ್ತರದಾಯಿತ್ವದ ಕೊರತೆ ಸ್ಪಷ್ಟವಾಗಿ ಕಾಣುತ್ತಿದೆ. ತಮ್ಮ ನ್ಯಾಯಸಮ್ಮತ ಪ್ರಶ್ನೆಗಳನ್ನು ಕೇಳಿದ ಕಾರಣಕ್ಕೆ ವಿದ್ಯಾರ್ಥಿಗಳ ಮೇಲೆ ಲಾಠಿ ಎತ್ತಲಾಗಿದೆ. ಶಾಂತಿಯುತವಾಗಿ ಪ್ರತಿಭಟಿಸಿದ ವಿದ್ಯಾರ್ಥಿಗಳೊಂದಿಗೆ ಅಧಿಕಾರಿಗಳು ಕ್ರೂರವಾಗಿ ವರ್ತಿಸಿರುವುದು ಪ್ರಜಾಪ್ರಭುತ್ವಕ್ಕೆ ಕಳಂಕ. ದೇಶದ ಯುವಜನರ ಭವಿಷ್ಯಕ್ಕೆ ಸಂಬಂಧಿಸಿದ ಇಂತಹ ಗಂಭೀರ ವಿಷಯಗಳ ಬಗ್ಗೆ ಚರ್ಚಿಸಲು ಸಾಧ್ಯವಾಗದಿದ್ದರೆ ಸಂಸತ್ತಿನ ಉದ್ದೇಶವೇನು ಎಂದು ಅವರು ಪ್ರಶ್ನಿಸಿದರು.
ಈ ವಿಚಾರವನ್ನು ಮುಚ್ಚಿಹಾಕಲು ವಿರೋಧ ಪಕ್ಷ ಅವಕಾಶ ನೀಡುವುದಿಲ್ಲ. ವಿದ್ಯಾರ್ಥಿಗಳ ಧ್ವನಿ ಸಂಸತ್ತಿನ ಒಳಗೂ ಹೊರಗೂ ಪ್ರತಿಧ್ವನಿಸುವಂತೆ ಹೋರಾಟ ಮುಂದುವರಿಯಲಿದೆ ಎಂದು ಅವರು ಎಚ್ಚರಿಸಿದರು.
ಲೋಕಸಭೆಯ ಕಾಂಗ್ರೆಸ್ ಮುಖ್ಯ ಸಚೇತಕ ಮಾಣಿಕಂ ಟ್ಯಾಗೋರ್ ಮಾತನಾಡಿ, ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ನಡೆದ ಪ್ರತಿಭಟನೆಯ ವೇಳೆ ವಿದ್ಯಾರ್ಥಿಗಳ ಮೇಲೆ ನಡೆದ ಕ್ರೂರ ವರ್ತನೆ ಮತ್ತು ಹಲ್ಲೆ ಕುರಿತು ಸದನದಲ್ಲಿ ಸಮಗ್ರ ಚರ್ಚೆ ನಡೆಯಬೇಕು. ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸದನಕ್ಕೆ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದರು.
ಇದಕ್ಕೂ ಮುನ್ನ ಸಂಸತ್ತಿನ ಮುಂಗಾರು ಅಧಿವೇಶನದ ಎರಡನೇ ದಿನದ ಕಲಾಪ ಆರಂಭಕ್ಕೂ ಮುನ್ನ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕಚೇರಿಯಲ್ಲಿ ‘ಇಂಡಿಯಾ’ ಮೈತ್ರಿಕೂಟದ ನಾಯಕರು ಸಭೆ ನಡೆಸಿ, ಸದನದಲ್ಲಿ ಅನುಸರಿಸಬೇಕಾದ ಮುಂದಿನ ಕಾರ್ಯತಂತ್ರದ ಕುರಿತು ಚರ್ಚಿಸಿದರು. ಸಭೆಯಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಜೈರಾಮ ರಮೇಶ, ಕೆ.ಸಿ.ವೇಣುಗೋಪಾಲ, ಧರ್ಮೇಂದ್ರ ಯಾದವ, ಸುಪ್ರಿಯಾ ಸುಳೆ, ಸಂಜಯ ರಾವುತ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರು.