

ಬಸವಕಲ್ಯಾಣ, ನ. 28: ಸರ್ಕಾರಿ ಸವಲತ್ತುಗಳಿಗಾಗಿ ಪ್ರತ್ಯೇಕ ಧರ್ಮದ ಬೇಡಿಕೆ ಮುಂದಿಡದೆ, ನಾವೆಲ್ಲರೂ ಹಿಂದೂಗಳು ಎಂಬ ಭಾವನೆಯೊಂದಿಗೆ ಒಗ್ಗಟ್ಟಾಗಿ ಸಾಗಬೇಕು ಎಂದು ಹೇಳಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಲಿಂಗಾಯತ ಸಮುದಾಯದ ಮುಖಂಡರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಪ್ರತಿಭಟನೆಯ ಹಿನ್ನೆಲೆಯಲ್ಲಿ ಅವರು ತಮ್ಮ ಭಾಷಣವನ್ನು ಅರ್ಧದಲ್ಲೇ ಮೊಟಕುಗೊಳಿಸಿದ ಘಟನೆ ನಡೆದಿದೆ.
ಬಸವಕಲ್ಯಾಣದ ಅನುಭವ ಮಂಟಪದ ಆವರಣದಲ್ಲಿ ನಡೆಯುತ್ತಿರುವ 47ನೇ ಶರಣ ಕಮ್ಮಟ ಹಾಗೂ ಅನುಭವ ಮಂಟಪ ಉತ್ಸವವನ್ನು ಉದ್ಘಾಟಿಸಿ ಮಾತನಾಡಿದ ವಿಜಯೇಂದ್ರ, ಸರ್ಕಾರಿ ಸವಲತ್ತುಗಳನ್ನು ಪಡೆಯುವುದಕ್ಕಾಗಿ ಪ್ರತ್ಯೇಕ ಧರ್ಮದ ಬೇಡಿಕೆ ಮುಂದಿಡಬಾರದು. ಆ ಜಾತಿ, ಈ ಜಾತಿ, ಆ ಧರ್ಮ, ಈ ಧರ್ಮ ಎಂಬ ಭೇದಭಾವ ಮಾಡದೆ, ನಾವೆಲ್ಲರೂ ಹಿಂದೂಗಳು, ನಾವೆಲ್ಲರೂ ಒಂದು ಎಂಬ ಭಾವನೆಯೊಂದಿಗೆ ಮುನ್ನಡೆಯಬೇಕು ಎಂದು ಹೇಳುವ ಮೂಲಕ ಪರೋಕ್ಷವಾಗಿ ಲಿಂಗಾಯತ ಪ್ರತ್ಯೇಕ ಧರ್ಮದ ಬೇಡಿಕೆಗೆ ವಿರೋಧ ವ್ಯಕ್ತಪಡಿಸಿದರು.
ವಿಜಯೇಂದ್ರ ಅವರ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಲಿಂಗಾಯತ ಸಮುದಾಯದ ಮುಖಂಡರು, ಅವರು ಭಾಷಣ ಮಾಡುತ್ತಿದ್ದಾಗಲೇ ಪ್ರತಿಭಟನೆಗೆ ಮುಂದಾದರು. ‘ಲಿಂಗಾಯತ ಸ್ವತಂತ್ರ ಧರ್ಮಕ್ಕೆ ಜಯವಾಗಲಿ’, ‘ಲಿಂಗಾಯತ ಸ್ವತಂತ್ರ ಧರ್ಮಕ್ಕೆ ಮಾನ್ಯತೆ ಸಿಗಬೇಕು’, ‘ಗೋ ಬ್ಯಾಕ್ ವಿಜಯೇಂದ್ರ’ ಎಂದು ಘೋಷಣೆಗಳನ್ನು ಕೂಗಿದರು.
ನಿಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಧರ್ಮವನ್ನು ಬಲಿ ಕೊಡಬಾರದು ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ ವಿಜಯೇಂದ್ರ ತಮ್ಮ ಭಾಷಣವನ್ನು ಅರ್ಧದಲ್ಲೇ ಮೊಟಕುಗೊಳಿಸಿದರು. ಇದರಿಂದ ಅನುಭವ ಮಂಟಪದ ಉತ್ಸವದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು.