ಬೆಳಗಾವಿ, ನ. 5: ಕಬ್ಬಿನ ದರ ಹೆಚ್ಚಳಕ್ಕೆ ಆಗ್ರಹಿಸಿ ರೈತ ಸಂಘಟನೆಗಳು ನಡೆಸುತ್ತಿರುವ ಹೋರಾಟದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಕಬ್ಬಿಗೆ ಹೆಚ್ಚಿನ ದರ ನಿಗದಿಪಡಿಸುವಂತೆ ಒತ್ತಾಯಿಸಿ ರೈತ ಸಂಘಟನೆಗಳು ಜಿಲ್ಲೆಯ ವಿವಿಧೆಡೆ ಪ್ರತಿಭಟನೆ ನಡೆಸುತ್ತಿವೆ. ಹೋರಾಟ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯಿರುವುದರಿಂದ ಕಾನೂನು ಸುವ್ಯವಸ್ಥೆ ಕಾಪಾಡಲು ಮುನ್ನೆಚ್ಚರಿಕೆ ಕ್ರಮವಾಗಿ ಮದ್ಯ ಮಾರಾಟ ನಿಷೇಧಿಸಲಾಗಿದೆ.
ನವೆಂಬರ್ 5ರ ಸಂಜೆ 4 ಗಂಟೆಯಿಂದ ನವೆಂಬರ್ 6ರ ಬೆಳಗ್ಗೆ 6 ಗಂಟೆಯವರೆಗೆ ಬೆಳಗಾವಿ ಜಿಲ್ಲೆಯಾದ್ಯಂತ ಮದ್ಯದ ಅಂಗಡಿಗಳು, ಬಾರ್ಗಳು ಹಾಗೂ ಇತರ ಮದ್ಯ ಮಾರಾಟ ಕೇಂದ್ರಗಳಲ್ಲಿ ಮದ್ಯ ಮಾರಾಟ ಮತ್ತು ಪೂರೈಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21(1)ರ ಅಡಿಯಲ್ಲಿ ಈ ಆದೇಶ ಹೊರಡಿಸಲಾಗಿದ್ದು, ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಪೊಲೀಸ್ ಹಾಗೂ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ನಿಷೇಧಾಜ್ಞೆ ಉಲ್ಲಂಘಿಸುವವರ ವಿರುದ್ಧ ಕರ್ನಾಟಕ ಅಬಕಾರಿ ಕಾಯ್ದೆಯ ಕಲಂ 32ರ ಅನ್ವಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆದೇಶದಲ್ಲಿ ಎಚ್ಚರಿಸಲಾಗಿದೆ.
ರೈತರ ಪ್ರತಿಭಟನೆ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ತಡೆಯುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.

