ಬೆಂಗಳೂರು, ಮೇ 23 : ಎಬೋಲಾ ವೈರಸ್ ಕುರಿತು ಸಾರ್ವಜನಿಕರು ಅನಗತ್ಯ ಆತಂಕಕ್ಕೆ ಒಳಗಾಗಬಾರದು. ಆದರೆ ಅಗತ್ಯ ಜಾಗೃತಿ ವಹಿಸಬೇಕು ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಹೇಳಿದ್ದಾರೆ.
ಮಾಧ್ಯಮದೊಂದಿಗೆ ಮಾತನಾಡಿದ ಅವರು, ಆರೋಗ್ಯ ಇಲಾಖೆ ಅಧಿಕಾರಿಗಳು ಕೇಂದ್ರ ಸರ್ಕಾರದ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಪರಿಸ್ಥಿತಿಯನ್ನು ನಿಗಾ ವಹಿಸುತ್ತಿದ್ದಾರೆ ಎಂದರು.
ದೇಶದಲ್ಲಿ ಇದುವರೆಗೆ ಯಾವುದೇ ಎಬೋಲಾ ಪ್ರಕರಣ ಪತ್ತೆಯಾಗಿಲ್ಲ. ನೆರೆಯ ರಾಷ್ಟ್ರಗಳಲ್ಲಿಯೂ ಸೋಂಕು ದೃಢಪಟ್ಟಿಲ್ಲ. ಆದರೂ ಮುಂಜಾಗ್ರತಾ ಕ್ರಮವಾಗಿ ಸರ್ಕಾರ ಅಗತ್ಯ ಸಿದ್ಧತೆ ಮಾಡಿಕೊಂಡಿದೆ ಎಂದು ತಿಳಿಸಿದ್ದಾರೆ.
ಆಫ್ರಿಕಾ ದೇಶಗಳಾದ ಉಗಾಂಡಾ, ಕಾಂಗೋ ಸೇರಿದಂತೆ ಎಬೋಲಾ ಸೋಂಕು ಕಾಣಿಸಿಕೊಂಡಿರುವ ಪ್ರದೇಶಗಳಿಂದ ಬಂದವರನ್ನು 21 ದಿನಗಳ ಕಾಲ ನಿಗಾದಲ್ಲಿ ಇರಿಸಲಾಗುವುದು ಎಂದು ಹೇಳಿದರು. ಸೋಂಕಿನ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣ ಆರೋಗ್ಯ ಇಲಾಖೆಗೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ ಎಂದರು.
ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡಬಾರದು. ಸರ್ಕಾರ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ. ಕೇಂದ್ರ ಸರ್ಕಾರವೂ ಈ ಕುರಿತು ಮಾರ್ಗಸೂಚಿ ಬಿಡುಗಡೆ ಮಾಡಿದೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ರಾಜ್ಯದ ವಿಮಾನ ನಿಲ್ದಾಣಗಳು ಹಾಗೂ ಆರೋಗ್ಯ ಕೇಂದ್ರಗಳಲ್ಲಿ ನಿಗಾ ಹೆಚ್ಚಿಸಲಾಗಿದ್ದು, ಸೋಂಕು ತಡೆಗೆ ಅಗತ್ಯ ವೈದ್ಯಕೀಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.