ಬೆಂಗಳೂರು, ಜುಲೈ 17: ಗ್ರಾಮೀಣ ಪ್ರದೇಶದ ಜನರು ಇ-ಸ್ವತ್ತು ದಾಖಲೆಗಳಿಗಾಗಿ ಪಂಚಾಯಿತಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಸರ್ವರ್ ಸಮಸ್ಯೆಯಿಂದಾಗುವ ವಿಳಂಬಕ್ಕೂ ತೆರೆ ಎಳೆಯುವ ಉದ್ದೇಶದಿಂದ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಮನೆಬಾಗಿಲಿಗೇ ಇ-ಸ್ವತ್ತು ಸೇವೆ ತಲುಪಿಸುವ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಿದ್ಧತೆ ನಡೆಸಿದ್ದು, ಈ ಪ್ರಕ್ರಿಯೆಯಲ್ಲಿರುವ ತಾಂತ್ರಿಕ ಹಾಗೂ ಆಡಳಿತಾತ್ಮಕ ಸಮಸ್ಯೆಗಳನ್ನು ಪರಿಹರಿಸಲು ಐವರು ಸದಸ್ಯರ ಉನ್ನತ ಮಟ್ಟದ ಸಮಿತಿ ರಚಿಸುವಂತೆ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ ಬಿ.ಖಂಡ್ರೆ ಸೂಚನೆ ನೀಡಿದ್ದಾರೆ.
ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿ ಡಿ.ರಂದೀಪ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಲಿದ್ದು, ಬೆಂಗಳೂರು, ಮಂಗಳೂರು, ಕಲಬುರಗಿ ಹಾಗೂ ಬೆಳಗಾವಿ ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಸದಸ್ಯರಾಗಿರಲಿದ್ದಾರೆ. ಇ-ಸ್ವತ್ತು ವಿತರಣೆಯಲ್ಲಿ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಸಮಗ್ರವಾಗಿ ಅಧ್ಯಯನ ಮಾಡಿ ಪರಿಹಾರೋಪಾಯಗಳನ್ನು ಶಿಫಾರಸು ಮಾಡುವ ಜವಾಬ್ದಾರಿ ಸಮಿತಿಗೆ ನೀಡಲಾಗಿದೆ.
ಪ್ರಸ್ತುತ ಜಾರಿಯಲ್ಲಿರುವ ಇ-ಸ್ವತ್ತು ತಂತ್ರಾಂಶ, ನಿಯಮಾವಳಿ, ತಾಂತ್ರಿಕ ವ್ಯವಸ್ಥೆ ಹಾಗೂ ಆಡಳಿತಾತ್ಮಕ ಪ್ರಕ್ರಿಯೆಗಳಲ್ಲಿ ಅಗತ್ಯ ಬದಲಾವಣೆಗಳ ಕುರಿತು ಪರಿಶೀಲಿಸಿ, 10 ದಿನಗಳೊಳಗೆ ಕರಡು ವರದಿ ಸಲ್ಲಿಸುವಂತೆ ಸಚಿವರು ನಿರ್ದೇಶನ ನೀಡಿದ್ದಾರೆ. ವರದಿಯ ಆಧಾರದ ಮೇಲೆ ಗ್ರಾಮೀಣ ಪ್ರದೇಶಗಳಲ್ಲಿ ಇ-ಸ್ವತ್ತು ವಿತರಣಾ ವ್ಯವಸ್ಥೆಯನ್ನು ಮತ್ತಷ್ಟು ಸರಳೀಕರಿಸಲು ಕ್ರಮ ಕೈಗೊಳ್ಳಲಾಗುವುದು.
ರಾಜ್ಯದ ಗ್ರಾಮಠಾಣಾ ವ್ಯಾಪ್ತಿಯಲ್ಲಿ ಹಲವು ದಶಕಗಳಿಂದ ವಾಸಿಸುತ್ತಿರುವ ಸಾವಿರಾರು ಕುಟುಂಬಗಳ ಬಳಿ ಮನೆ ಅಥವಾ ನಿವೇಶನಕ್ಕೆ ಸಂಬಂಧಿಸಿದ ಅಧಿಕೃತ ಸರ್ಕಾರಿ ದಾಖಲೆಗಳಿಲ್ಲ. ಇದರಿಂದ ಫಾರಂ–9 ಮತ್ತು 11ಬಿ ಸೇರಿದಂತೆ ಇ-ಸ್ವತ್ತು ದಾಖಲೆ ಪಡೆಯಲು ಸಾಧ್ಯವಾಗುತ್ತಿಲ್ಲ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಮನೆಮನೆ ಸಮೀಕ್ಷೆ ನಡೆಸಿ, ದಾಖಲೆರಹಿತ ಸ್ವತ್ತುಗಳಿಗೂ ಕಾನೂನುಬದ್ಧವಾಗಿ ಇ-ಸ್ವತ್ತು ನೀಡಲು ಅಗತ್ಯ ಮಾರ್ಗಸೂಚಿಗಳನ್ನು ರೂಪಿಸುವಂತೆ ಸಮಿತಿಗೆ ಸೂಚಿಸಲಾಗಿದೆ.
ಅಧಿಕೃತ ಇ-ಸ್ವತ್ತು ದಾಖಲೆ ಇಲ್ಲದ ಕಾರಣ ಗ್ರಾಮೀಣ ಭಾಗದ ಜನರು ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಸಾಲ ಪಡೆಯಲು ಸಾಧ್ಯವಾಗುತ್ತಿಲ್ಲ. ಮನೆ ದುರಸ್ತಿ, ಪುನರ್ ನಿರ್ಮಾಣ, ಕಟ್ಟಡ ನಕ್ಷೆ ಅನುಮೋದನೆ, ಆಸ್ತಿ ಮಾರಾಟ ಹಾಗೂ ವರ್ಗಾವಣೆ ಪ್ರಕ್ರಿಯೆಗಳಲ್ಲೂ ತೊಂದರೆ ಎದುರಿಸುತ್ತಿದ್ದಾರೆ. ಹೊಸ ವ್ಯವಸ್ಥೆ ಜಾರಿಗೆ ಬಂದರೆ ಈ ಸಮಸ್ಯೆಗಳಿಗೆ ಪರಿಹಾರ ದೊರೆತು ಗ್ರಾಮೀಣ ಜನರ ಆರ್ಥಿಕ ಹಾಗೂ ಸಾಮಾಜಿಕ ಸಬಲೀಕರಣಕ್ಕೆ ನೆರವಾಗಲಿದೆ ಎಂದು ಇಲಾಖೆ ತಿಳಿಸಿದೆ.