ರಸ್ತೆ ಕಾಮಗಾರಿ ವೇಳೆ ವಿದ್ಯುತ್ ಸ್ಪರ್ಶ: 8 ಕಾರ್ಮಿಕರ ದುರ್ಮರಣ
ಜೈಪುರ, ನ. 2: ರಸ್ತೆ ನಿರ್ಮಾಣ ಕಾಮಗಾರಿ ವೇಳೆ ಜಲ್ಲಿಕಲ್ಲು ಮಿಶ್ರಣದ ಯಂತ್ರಕ್ಕೆ ಅಧಿಕ ಒತ್ತಡದ ವಿದ್ಯುತ್ ತಂತಿ ಸ್ಪರ್ಶಿಸಿದ ಪರಿಣಾಮ 8 ಕಾರ್ಮಿಕರು ಮೃತಪಟ್ಟಿದ್ದು, ಐವರು ಗಾಯಗೊಂಡಿರುವ ದಾರುಣ ಘಟನೆ ರಾಜಸ್ಥಾನದ ಜುಂಜುನು ಜಿಲ್ಲೆಯ ಛಾಪೋಲಿ ಗ್ರಾಮದಲ್ಲಿ ಸೋಮವಾರ ಸಂಭವಿಸಿದೆ.
ಛಾಪೋಲಿ ಮತ್ತು ಕದಮ್ಕುಂಡ್ ಗ್ರಾಮಗಳನ್ನು ಸಂಪರ್ಕಿಸುವ ರಸ್ತೆ ನಿರ್ಮಾಣದ ವೇಳೆ ಯಂತ್ರವು ಮೇಲ್ಭಾಗದ ವಿದ್ಯುತ್ ತಂತಿಗೆ ತಗುಲಿದೆ. ಪರಿಣಾಮ ವಿದ್ಯುತ್ ಪ್ರವಹಿಸಿ ಕಾರ್ಮಿಕರು ಆಘಾತಕ್ಕೊಳಗಾಗಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಉದಯಪುರವಾಟಿ ಪೊಲೀಸ್ ಠಾಣಾಧಿಕಾರಿ ರಾಮಪಾಲ ತಿಳಿಸಿದ್ದಾರೆ.
ಘಟನೆಯಿಂದ ಆಕ್ರೋಶಗೊಂಡ ಗ್ರಾಮಸ್ಥರು ಪ್ರತಿಭಟನೆ ನಡೆಸಿ, ಸುರಕ್ಷತಾ ಕ್ರಮಗಳ ನಿರ್ಲಕ್ಷ್ಯವೇ ದುರಂತಕ್ಕೆ ಕಾರಣ ಎಂದು ಆರೋಪಿಸಿದರು. ಕಾಮಗಾರಿ ಮೇಲ್ವಿಚಾರಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ರಾಜಸ್ಥಾನ ಮುಖ್ಯಮಂತ್ರಿ ಭಜನಲಾಲ ಶರ್ಮಾ ಘಟನೆಗೆ ಸಂತಾಪ ವ್ಯಕ್ತಪಡಿಸಿ, ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ. ಮೃತರ ಕುಟುಂಬಗಳಿಗೆ ನೆರವು ಹಾಗೂ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಸಾರ್ವಜನಿಕರ ಸಹಭಾಗಿತ್ವದಲ್ಲಿ ಖಾಸಗಿಯಾಗಿ ರಸ್ತೆ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗಿತ್ತು ಎಂದು ಇಂಧನ ಸಚಿವ ಹೀರಾಲಾಲ ನಾಗರ ತಿಳಿಸಿದ್ದಾರೆ.