ಬೀದರ್, ನ. 26: ಮುಂದಿನ ವರ್ಷ ನಡೆಯಲಿರುವ ರಾಷ್ಟ್ರೀಯ ಜನಗಣತಿಯಲ್ಲಿ ವೀರಶೈವ ಲಿಂಗಾಯತ ಸಮಾಜದವರು ಧರ್ಮದ ಅಂಕಣದಲ್ಲಿ ಏನೆಂದು ನಮೂದಿಸಬೇಕು ಎಂಬ ಕುರಿತು ನಾಡಿನ ಮಠಾಧೀಶರೊಂದಿಗೆ ಚರ್ಚಿಸಿ ಒಮ್ಮತದ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷ ಹಾಗೂ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಧರ್ಮದ ಅಂಕಣದಲ್ಲಿ ಲಿಂಗಾಯತ ಎಂದು ನಮೂದಿಸಲು ಮಠಾಧಿಪತಿಗಳ ಒಕ್ಕೂಟ ಹಾಗೂ ವೀರಶೈವ ಎಂದು ನಮೂದಿಸಲು ಮಹಾಸಭೆ ಕರೆ ನೀಡಿರುವುದರಿಂದ ಗೊಂದಲ ಸೃಷ್ಟಿಯಾಗಿಲ್ಲವೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಯಾವುದೇ ಗೊಂದಲವಿಲ್ಲ. ಎಲ್ಲರೂ ಸಮಾಜವನ್ನು ಒಗ್ಗೂಡಿಸುವ ಪ್ರಯತ್ನ ನಡೆಸುತ್ತಿದ್ದಾರೆ ಎಂದರು.
ಬಸವಣ್ಣನವರ ಅವಹೇಳನ ಸಹಿಸುವುದಿಲ್ಲ
ಬಸವಣ್ಣನವರ ಅವಹೇಳನವನ್ನು ಸಹಿಸಲು ಸಾಧ್ಯವಿಲ್ಲ. ಸಮಾಜದ ಎಲ್ಲ ಒಳಪಂಗಡಗಳು ಹಾಗೂ ವಿವಿಧ ಪಕ್ಷಗಳ ಮುಖಂಡರು ಲೇಖಕ ರವಿ ಹಂಜ್ ಅವರ ಧೋರಣೆಯನ್ನು ಖಂಡಿಸಿ, ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ಸರ್ಕಾರ ಈಗಾಗಲೇ ವಿವಾದಿತ ಕೃತಿಯನ್ನು ಮುಟ್ಟುಗೋಲು ಹಾಕಿಕೊಂಡಿದೆ ಎಂದರು.
ಶಂಕರ ಬಿದರಿ ಅವರನ್ನು ಮಹಾಸಭೆಯಿಂದ ಉಚ್ಚಾಟಿಸಬೇಕೆಂಬ ಒತ್ತಾಯಕ್ಕೆ ಪ್ರತಿಕ್ರಿಯಿಸಿದ ಖಂಡ್ರೆ, ಕೃತಿಯಲ್ಲಿನ ವಿಷಯ ತಮಗೆ ತಿಳಿದಿರಲಿಲ್ಲ ಎಂದು ಬಿದರಿ ಸ್ಪಷ್ಟಪಡಿಸಿದ್ದಾರೆ. ಅವರು ಮೊದಲಿನಿಂದಲೂ ಬಸವತತ್ವದ ಪ್ರತಿಪಾದಕರಾಗಿದ್ದಾರೆ ಎಂದು ಹೇಳಿದರು.
ಕನ್ಹೇರಿಯ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಅವರು ಭಾಲ್ಕಿಯ ಲಿಂಗೈಕ್ಯ ಚನ್ನಬಸವ ಪಟ್ಟದ್ದೇವರು ನಿರ್ಮಿಸಿದ ಮಠದ ಕುರಿತು ಹಗುರವಾಗಿ ಮಾತನಾಡಿರುವುದಕ್ಕೆ ಪ್ರತಿಕ್ರಿಯಿಸಿ, ನಮ್ಮ ಗುರುಗಳ ಮೇಲಿನ ಭಕ್ತಿ, ಶ್ರದ್ಧೆ ಮತ್ತು ವಿಶ್ವಾಸವನ್ನು ಯಾರಿಂದಲೂ ಕಸಿದುಕೊಳ್ಳಲು ಸಾಧ್ಯವಿಲ್ಲ. ಮಹಾಪುರುಷರನ್ನು ಅವಹೇಳನ ಮಾಡುವವರಿಗೆ ಸಮಾಜ ಮನ್ನಣೆ ನೀಡುವುದಿಲ್ಲ ಎಂದರು.
28ರಿಂದ ಶರಣ ಕಮ್ಮಟ
ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ಮಾತನಾಡಿ, ಬಸವಣ್ಣನವರ ವಿಚಾರಧಾರೆ ಸೂರ್ಯನ ಬೆಳಕಿನಂತಿದ್ದು, ಅದರ ಪ್ರಸಾರವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದರು.
ಅನುಭವ ಮಂಟಪದ ಆವರಣದಲ್ಲಿ ನ. 28 ಮತ್ತು 29ರಂದು 47ನೇ ಶರಣ ಕಮ್ಮಟ ಹಾಗೂ ಅನುಭವ ಮಂಟಪ ಉತ್ಸವ ನಡೆಯಲಿದ್ದು, ಬಸವ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದರು.
ಗುರುಬಸವ ಪಟ್ಟದ್ದೇವರು, ಶಶಿಧರ ಕೋಸಂಬೆ, ಬಸವರಾಜ ಧನ್ನೂರ, ಬಾಬುವಾಲಿ, ಜೈರಾಜ ಖಂಡ್ರೆ, ಯೋಗೇಶ ಸಿರಿಗೆರೆ ಮತ್ತಿತರರು ಉಪಸ್ಥಿತರಿದ್ದರು.