ಬೆಳಗಾವಿ, ಅ. 17 (ಸಮದರ್ಶಿ ಸುದ್ದಿ): ಕಬ್ಬಿಗೆ ಲಾಭದಾಯಕ ಬೆಲೆ ನಿಗದಿಪಡಿಸುವುದು ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕೋಡಿಹಳ್ಳಿ ಚಂದ್ರಶೇಖರ ನೇತೃತ್ವದ ಬಣದ ಕಾರ್ಯಕರ್ತರು ಶನಿವಾರ ನಗರದ ರಾಣಿ ಚನ್ನಮ್ಮ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ರಾಣಿ ಚನ್ನಮ್ಮ ವೃತ್ತದಲ್ಲಿ ಸುಮಾರು ಎರಡು ತಾಸು ಮಾನವ ಸರಪಳಿ ನಿರ್ಮಿಸಿ ರಸ್ತೆ ಸಂಚಾರ ತಡೆದ ರೈತರು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ ಮಾತನಾಡಿ, 2026–27ನೇ ಸಾಲಿನ ಕಬ್ಬಿಗೆ ಕೇಂದ್ರ ಸರ್ಕಾರ ನಿಗದಿಪಡಿಸಿರುವ ದರವನ್ನು ಪರಿಷ್ಕರಿಸಿ, ರೈತರಿಗೆ ಲಾಭದಾಯಕ ಬೆಲೆ ನೀಡಬೇಕು. ಕೂಲಿ ಹಾಗೂ ಕೃಷಿಗೆ ಅಗತ್ಯವಾದ ವಸ್ತುಗಳ ಬೆಲೆ ಗಣನೀಯವಾಗಿ ಏರಿಕೆಯಾಗಿರುವುದರಿಂದ ಕೇಂದ್ರ ಸರ್ಕಾರ ನ್ಯಾಯಯುತ ಎಫ್ಆರ್ಪಿ ನಿಗದಿಪಡಿಸಬೇಕು. ರಾಜ್ಯ ಸರ್ಕಾರವೂ ಹೆಚ್ಚುವರಿ ಸಹಾಯಧನ ನೀಡಿ ರೈತರ ಹಿತ ಕಾಪಾಡಬೇಕು ಎಂದು ಒತ್ತಾಯಿಸಿದರು.
ಬೆಳೆ ಹಾನಿಯಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೃಷಿ ಚಟುವಟಿಕೆಗಳಿಗೆ ಅಗತ್ಯವಾದ ನಿರಂತರ ಸಿಂಗಲ್ ಫೇಸ್ ವಿದ್ಯುತ್ ಪೂರೈಸುವಲ್ಲಿ ಸರ್ಕಾರ ವಿಫಲವಾಗಿದೆ. ಕೂಡಲೇ ಸಮರ್ಪಕ ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಬೆಳೆ ವಿಮೆ ಕಂತು ಪಾವತಿಸಿದರೂ ರೈತರಿಗೆ ಪರಿಹಾರ ದೊರೆಯುತ್ತಿಲ್ಲ. ಹಂದಿ ಹಾಗೂ ಕಾಡುಪ್ರಾಣಿಗಳ ಹಾವಳಿಯಿಂದ ಬೆಳೆಗಳು ನಾಶವಾಗುತ್ತಿದ್ದು, ಅವುಗಳ ನಿಯಂತ್ರಣಕ್ಕೆ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಬರಪೀಡಿತ ಪ್ರದೇಶಗಳೆಂದು ಘೋಷಿಸಿದ್ದರೂ ಅನೇಕ ರೈತರಿಗೆ ಇನ್ನೂ ಪರಿಹಾರ ತಲುಪಿಲ್ಲ. ಬಾಕಿ ಇರುವ ಬೆಳೆ ಹಾನಿ ಪರಿಹಾರವನ್ನು ತಕ್ಷಣ ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯ ಬಳಿಕ ರೈತ ಮುಖಂಡರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ತಮ್ಮ ಬೇಡಿಕೆಗಳ ಮನವಿ ಸಲ್ಲಿಸಿದರು.
ರಾಣಿ ಚನ್ನಮ್ಮ ವೃತ್ತದಲ್ಲಿ ಎರಡು ತಾಸು ನಡೆದ ಪ್ರತಿಭಟನೆಯಿಂದ ವೃತ್ತಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿ, ಸಂಚಾರ ದಟ್ಟಣೆಯಿಂದ ಸಾರ್ವಜನಿಕರು ಪರದಾಡುವಂತಾಯಿತು.