ಹಾವೇರಿ, ಅ. 17 (ಸಮದರ್ಶಿ ಸುದ್ದಿ): ಪ್ರತಿ ಟನ್ ಕಬ್ಬಿಗೆ ₹5,500 ದರ ನಿಗದಿಪಡಿಸಬೇಕು, ಸಕ್ಕರೆಯ ಕನಿಷ್ಠ ಮಾರಾಟ ಬೆಲೆಯನ್ನು ₹31ರಿಂದ ₹60ಕ್ಕೆ ಹೆಚ್ಚಿಸಬೇಕು ಹಾಗೂ ಸ್ವಾಮಿನಾಥನ್ ಆಯೋಗದ ವರದಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಹೋರಾಟ ತೀವ್ರಗೊಂಡಿದ್ದು, ಶನಿವಾರ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಅಣಕು ಶವಯಾತ್ರೆಯೊಂದಿಗೆ ಹಾವೇರಿಯಿಂದ ಹುಬ್ಬಳ್ಳಿಗೆ ಪಾದಯಾತ್ರೆ ಆರಂಭಿಸಿದ್ದಾರೆ.
ಹಾವೇರಿಯ ಹುಕ್ಕೇರಿ ಮಠದಿಂದ ಆರಂಭವಾದ ರೈತರ ಪಾದಯಾತ್ರೆಗೆ ದಿಂಗಾಲೇಶ್ವರ ಸ್ವಾಮೀಜಿ ಚಾಲನೆ ನೀಡಿದರು. ನೂರಾರು ರೈತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆಯಲ್ಲಿ ಪಾಲ್ಗೊಂಡರು.
ಕಬ್ಬು ಬೆಳೆಗಾರರ ಸಮಸ್ಯೆಗಳ ಕುರಿತು ಚರ್ಚಿಸಲು ದೆಹಲಿಗೆ ಕರೆಸಿಕೊಂಡ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಯಾವುದೇ ಸ್ಪಷ್ಟ ಭರವಸೆ ನೀಡದೆ ರೈತರನ್ನು ಅವಮಾನಿಸಿ ಕಳುಹಿಸಿದ್ದಾರೆ. ರೈತರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಲ್ಲಿ ವಿಫಲರಾಗಿರುವುದನ್ನು ಖಂಡಿಸಿ ಅವರ ಅಣಕು ಶವಯಾತ್ರೆ ನಡೆಸಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಹುಕ್ಕೇರಿ ಮಠದಿಂದ ಹೊರಟ ಪಾದಯಾತ್ರೆಯು ಎಂ.ಜಿ. ರಸ್ತೆ, ಹೊಸಮನಿ ಸಿದ್ದಪ್ಪ ವೃತ್ತ ಹಾಗೂ ಹಳೇ ಪಿ.ಬಿ. ರಸ್ತೆ ಮೂಲಕ ಸಾಗಿತು. ಅಲ್ಲಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಶಿಗ್ಗಾವಿ ಮಾರ್ಗವಾಗಿ ಹುಬ್ಬಳ್ಳಿಯತ್ತ ರೈತರು ಪಾದಯಾತ್ರೆ ಮುಂದುವರಿಸಿದ್ದಾರೆ.
ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವವರೆಗೆ ಹೋರಾಟ ನಿಲ್ಲಿಸುವುದಿಲ್ಲ ಎಂದು ರೈತ ಮುಖಂಡರು ಎಚ್ಚರಿಸಿದ್ದಾರೆ. ಸೋಮವಾರ ಹುಬ್ಬಳ್ಳಿಯಲ್ಲಿರುವ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ನಿವಾಸಕ್ಕೆ ಮುತ್ತಿಗೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.