Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessFinancialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ರೈತರ ಹೋರಾಟ ತೀವ್ರ: ಬೆಳಗಾವಿ, ಧಾರವಾಡ, ವಿಜಯಪುರದಲ್ಲಿ ಪ್ರತಿಭಟನೆ

news_1793453539_0_443.webp

 

news_1793453539_1_304.webp

 

ಬೆಳಗಾವಿ, ಅ.31: ಕಬ್ಬಿಗೆ ಪ್ರತಿ ಟನ್‌ಗೆ ₹5,500 ದರ ನಿಗದಿಪಡಿಸಬೇಕೆಂದು ಆಗ್ರಹಿಸಿ ಉತ್ತರ ಕರ್ನಾಟಕದಲ್ಲಿ ನಡೆಯುತ್ತಿರುವ ರೈತರ ಹೋರಾಟ ಶನಿವಾರ ಮತ್ತಷ್ಟು ತೀವ್ರಗೊಂಡಿತು. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕರೆ ನೀಡಿದ್ದ ರಾಜ್ಯವ್ಯಾಪಿ ಬಂದ್ ಹಿನ್ನೆಲೆಯಲ್ಲಿ ಬೆಳಗಾವಿ, ಧಾರವಾಡ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ರೈತರು ರಸ್ತೆ ತಡೆ, ಧರಣಿ ಹಾಗೂ ಪ್ರತಿಭಟನೆ ನಡೆಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ವಿವಿಧೆಡೆ ರಾಷ್ಟ್ರೀಯ ಹೆದ್ದಾರಿಗಳ ಸಂಚಾರಕ್ಕೆ ಅಡ್ಡಿಪಡಿಸಲು ಯತ್ನಿಸಿದ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ವಾಗ್ವಾದ ನಡೆಯಿತು.

ಬೆಳಗಾವಿ ನಗರದ ಕೇಂದ್ರ ಬಸ್ ನಿಲ್ದಾಣದ ಮುಖ್ಯ ಪ್ರವೇಶದ್ವಾರದ ಬಳಿ ರೈತರು ಬಸ್‌ಗಳನ್ನು ತಡೆದು ಪ್ರತಿಭಟನೆ ನಡೆಸಿದರು. ಕಬ್ಬಿಗೆ ನ್ಯಾಯಯುತ ದರ ಘೋಷಿಸುವಂತೆ ಆಗ್ರಹಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಮುಖ್ಯದ್ವಾರದ ಬಳಿ ಪ್ರತಿಭಟನೆ ನಡೆದರೂ ಮತ್ತೊಂದು ದ್ವಾರದ ಮೂಲಕ ಬಸ್‌ಗಳ ಸಂಚಾರ ಮುಂದುವರಿಯಿತು. ಗೋವಾ ಮತ್ತು ಮಹಾರಾಷ್ಟ್ರಕ್ಕೆ ತೆರಳುವ ಬಸ್‌ಗಳು ಸೇರಿದಂತೆ ಬಹುತೇಕ ಸಾರಿಗೆ ಸೇವೆಗಳು ಎಂದಿನಂತೆ ಕಾರ್ಯನಿರ್ವಹಿಸಿದವು.

ಆದರೆ ಬೆಳಗಾವಿ ನಗರದಲ್ಲಿ ಬಂದ್‌ಗೆ ನಿರೀಕ್ಷಿತ ಬೆಂಬಲ ವ್ಯಕ್ತವಾಗಲಿಲ್ಲ. ಕೇಂದ್ರ ಬಸ್ ನಿಲ್ದಾಣ ಹಾಗೂ ಸಿಟಿ ಮಾರ್ಕೆಟ್ ಸುತ್ತಮುತ್ತಲಿನ ಬಹುತೇಕ ಅಂಗಡಿ ಮುಂಗಟ್ಟುಗಳು ತೆರೆದಿದ್ದವು. ಶಾಲಾ-ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸಿದವು. ಆಟೊರಿಕ್ಷಾ ಹಾಗೂ ಇತರ ವಾಹನಗಳ ಸಂಚಾರವೂ ಸಾಮಾನ್ಯವಾಗಿತ್ತು. ರೈತರ ಪ್ರತಿಭಟನೆ ನಡೆದರೂ ನಗರದ ವ್ಯಾಪಾರ ವಹಿವಾಟು ಸಂಪೂರ್ಣ ಸ್ಥಗಿತಗೊಳ್ಳಲಿಲ್ಲ.

ವಿಜಯಪುರ ಜಿಲ್ಲೆಯ ಹಿಟ್ಟಿನಹಳ್ಳಿ ಟೋಲ್‌ಗೇಟ್ ಬಳಿ ರೈತರು ಪ್ರತಿಭಟನೆ ನಡೆಸಿ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು. ಟೋಲ್‌ಗೇಟ್ ಸಮೀಪ ಜಮಾಯಿಸಿದ ರೈತರು ರಸ್ತೆ ತಡೆ ನಡೆಸಲು ಮುಂದಾದಾಗ ಪೊಲೀಸರು ಮಧ್ಯಪ್ರವೇಶಿಸಿದರು. ಈ ಸಂದರ್ಭದಲ್ಲಿ ರೈತರು ಮತ್ತು ಪೊಲೀಸರ ನಡುವೆ ತೀವ್ರ ಮಾತಿನ ಚಕಮಕಿ ನಡೆಯಿತು. ಪ್ರತಿಭಟನೆಯಿಂದ ವಾಹನ ಸಂಚಾರಕ್ಕೆ ಅಡಚಣೆಯಾಗಿ, ವಿವಿಧ ಊರುಗಳಿಂದ ಆಗಮಿಸಿದ್ದ ಪ್ರಯಾಣಿಕರು ವಾಹನಗಳಿಂದ ಇಳಿದು ನಡೆದುಕೊಂಡು ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ರೈತ ಮುಖಂಡ ಭಾಗ್ಯರಸ ಸಣ್ಣದ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ ಕಬ್ಬು ಬೆಳೆಗಾರರ ಬೇಡಿಕೆಗಳನ್ನು ಈಡೇರಿಸುವಲ್ಲಿ ವಿಫಲವಾಗಿವೆ ಎಂದು ಆರೋಪಿಸಿದರು. ರೈತರಿಗೆ ನ್ಯಾಯಯುತ ದರ ದೊರೆಯುವವರೆಗೆ ಹೋರಾಟ ನಿಲ್ಲಿಸುವುದಿಲ್ಲ. ಪ್ರತಿಭಟನೆಗೆ ಅನುಮತಿ ನೀಡದಿದ್ದರೂ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಎಚ್ಚರಿಸಿದರು.

ಧಾರವಾಡ ಜಿಲ್ಲೆಯ ನಿಗದಿ ಗ್ರಾಮದಲ್ಲಿಯೂ ರೈತರು ರಸ್ತೆ ತಡೆದು ಬೃಹತ್ ಪ್ರತಿಭಟನೆ ನಡೆಸಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ಕಬ್ಬಿಗೆ ಕೂಡಲೇ ನ್ಯಾಯಯುತ ದರ ಘೋಷಿಸಬೇಕೆಂದು ಒತ್ತಾಯಿಸಿದರು. ವಿಶೇಷವಾಗಿ ಸಗಣಿಯ ಬುಟ್ಟಿಗಳನ್ನು ಪ್ರತಿಭಟನಾ ಸ್ಥಳಕ್ಕೆ ತಂದು ಇರಿಸುವ ಮೂಲಕ ಸರ್ಕಾರಗಳ ವಿರುದ್ಧ ವಿಭಿನ್ನ ರೀತಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

ಕಲಘಟಗಿ–ತಡಸ ಹೆದ್ದಾರಿಯಲ್ಲಿ ರೈತರು ಟೈರ್‌ಗಳಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು. ಕಬ್ಬು ಬೆಳೆಗಾರರ ಬೇಡಿಕೆಗಳನ್ನು ನಿರ್ಲಕ್ಷಿಸುತ್ತಿರುವ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಾಗಲಕೋಟೆ ಜಿಲ್ಲೆಯಲ್ಲಿಯೂ ರೈತರ ಪ್ರತಿಭಟನೆಗಳು ನಡೆದಿರುವ ಬಗ್ಗೆ ವರದಿಯಾಗಿದೆ.

ಬಹುತೇಕ ಸಕ್ಕರೆ ಕಾರ್ಖಾನೆಗಳು ರಾಜಕೀಯ ಪ್ರಭಾವ ಹೊಂದಿರುವ ವ್ಯಕ್ತಿಗಳ ಒಡೆತನದಲ್ಲಿದ್ದು, ಕಬ್ಬಿನ ದರ ಹೆಚ್ಚಳಕ್ಕೆ ಅಡ್ಡಿಯಾಗುತ್ತಿವೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ರೈತರ ಹಿತಾಸಕ್ತಿಯನ್ನು ಕಾಪಾಡಬೇಕಾದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಕ್ಕರೆ ಕಾರ್ಖಾನೆಗಳ ಪರ ನಿಲುವು ತಾಳುತ್ತಿವೆ. ಕಬ್ಬಿನ ಉತ್ಪಾದನಾ ವೆಚ್ಚ ಹೆಚ್ಚುತ್ತಿದ್ದರೂ ಬೆಳೆಗಾರರಿಗೆ ನ್ಯಾಯಯುತ ದರ ದೊರೆಯುತ್ತಿಲ್ಲ ಎಂದು ದೂರಿದರು.

ರೈತರ ಹೆದ್ದಾರಿ ತಡೆ ಹೋರಾಟದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾಡಳಿತವು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪ್ರತಿಭಟನೆ ನಡೆಸುವುದನ್ನು ನಿಷೇಧಿಸಿದೆ. ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023ರ ಕಲಂ 163ರ ಅಡಿಯಲ್ಲಿ ನಿಷೇಧಾಜ್ಞೆ ಹೊರಡಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ-48 ಸೇರಿದಂತೆ ಜಿಲ್ಲೆಯ ಮೂಲಕ ಹಾದುಹೋಗುವ ಯಾವುದೇ ರಾಷ್ಟ್ರೀಯ ಹೆದ್ದಾರಿಯಲ್ಲಿ ವ್ಯಕ್ತಿಗಳು, ಸಂಘಟನೆಗಳು ಅಥವಾ ಗುಂಪುಗಳು ಪ್ರತಿಭಟನೆ ನಡೆಸುವುದು ಹಾಗೂ ವಾಹನ ಸಂಚಾರಕ್ಕೆ ಅಡ್ಡಿಪಡಿಸುವುದನ್ನು ನಿಷೇಧಿಸಲಾಗಿದೆ.

ಜಿಲ್ಲೆಯ ಮೂರು ಟೋಲ್‌ಗೇಟ್‌ಗಳಲ್ಲಿಯೂ ಪ್ರತಿಭಟನೆ ನಡೆಸುವಂತಿಲ್ಲ. ಟ್ರ್ಯಾಕ್ಟರ್ ಅಥವಾ ಇತರ ವಾಹನಗಳನ್ನು ನಿಲ್ಲಿಸಿ ರಾಷ್ಟ್ರೀಯ ಹೆದ್ದಾರಿಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ತಡೆಯುವಂತಿಲ್ಲ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ. ಸಾರ್ವಜನಿಕ ಅಥವಾ ಸರ್ಕಾರಿ ಆಸ್ತಿಪಾಸ್ತಿಗೆ ಹಾನಿ ಉಂಟುಮಾಡಿದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಡಳಿತ ಎಚ್ಚರಿಸಿದೆ.

ಧಾರವಾಡ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಸಹ ಪುಣೆ–ಬೆಂಗಳೂರು, ಹುಬ್ಬಳ್ಳಿ–ಅಂಕೋಲಾ, ನವಲಗುಂದ–ಸೊಲ್ಲಾಪುರ ಹಾಗೂ ಹುಬ್ಬಳ್ಳಿ–ಬಳ್ಳಾರಿ ರಾಷ್ಟ್ರೀಯ ಹೆದ್ದಾರಿಗಳು ಮತ್ತು ಅವುಗಳ ಸುತ್ತಮುತ್ತಲಿನ 5 ಕಿ.ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಸಾರ್ವಜನಿಕ ಶಾಂತಿ ಕಾಪಾಡುವುದು, ತುರ್ತು ಸೇವೆಗಳ ಸಂಚಾರಕ್ಕೆ ಅಡ್ಡಿಯಾಗದಂತೆ ನೋಡಿಕೊಳ್ಳುವುದು ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಕಬ್ಬಿಗೆ ಪ್ರತಿ ಟನ್‌ಗೆ ₹5,500 ದರ ನಿಗದಿಪಡಿಸುವುದರ ಜೊತೆಗೆ ನ್ಯಾಯಯುತ ಮತ್ತು ಲಾಭದಾಯಕ ಬೆಲೆ ಲೆಕ್ಕಾಚಾರದಲ್ಲಿ ಮೂಲ ಸಕ್ಕರೆ ಇಳುವರಿ ಪ್ರಮಾಣವನ್ನು ಶೇ 9.5ಕ್ಕೆ ಇಳಿಸುವುದು ಹಾಗೂ ಕೇಂದ್ರ ಸರ್ಕಾರದ ಎಥೆನಾಲ್ ನೀತಿಯನ್ನು ಮರುಪರಿಶೀಲಿಸುವುದು ರೈತರ ಪ್ರಮುಖ ಬೇಡಿಕೆಗಳಾಗಿವೆ.

ಈ ಮಧ್ಯೆ, ಶನಿವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ಪ್ರತಿಭಟನಾನಿರತ ಕಬ್ಬು ಬೆಳೆಗಾರರು ಕಟಾವು ಕಾರ್ಯವನ್ನು ಪುನರಾರಂಭಿಸುವಂತೆ ಮನವಿ ಮಾಡಿದರು. ಕಬ್ಬು ಕಟಾವು ವಿಳಂಬವಾದರೆ ಅದರಲ್ಲಿನ ರಸದ ಪ್ರಮಾಣ ಕಡಿಮೆಯಾಗುವ ಜೊತೆಗೆ ಬೆಂಕಿ ಅವಘಡದ ಅಪಾಯವೂ ಹೆಚ್ಚಾಗುತ್ತದೆ. ಇದರಿಂದ ರೈತರಿಗೇ ನಷ್ಟವಾಗಲಿದೆ ಎಂದು ಎಚ್ಚರಿಸಿದರು.

ಸಕ್ಕರೆಯ ದರವನ್ನು ಕೇಂದ್ರ ಸರ್ಕಾರ ಹೆಚ್ಚಿಸಬೇಕಾಗಿದೆ. ಸಕ್ಕರೆ ದರ ಹೆಚ್ಚಳವಾಗದೆ ಕಾರ್ಖಾನೆಗಳು ರೈತರಿಗೆ ಹೆಚ್ಚಿನ ಹಣ ಪಾವತಿಸುವುದು ಕಷ್ಟವಾಗುತ್ತದೆ. ಕೇಂದ್ರ ಸರ್ಕಾರ ಮತ್ತು ಸಕ್ಕರೆ ಕಾರ್ಖಾನೆಗಳು ಕೈಗೊಳ್ಳುವ ತೀರ್ಮಾನದಂತೆ ರೈತರಿಗೆ ಹಣ ಪಾವತಿಯಾಗುವಂತೆ ನೋಡಿಕೊಳ್ಳುವುದು ರಾಜ್ಯ ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ರೈತರ ಹಿತಾಸಕ್ತಿ ಕಾಪಾಡಲು ಸರ್ಕಾರ ಬದ್ಧವಾಗಿದೆ. ಕಬ್ಬು ಬೆಳೆಗಾರರು ತಮ್ಮ ಬೆಳೆಯನ್ನು ಹಾಳಾಗಲು ಬಿಡದೆ ಕಟಾವು ಕಾರ್ಯಕ್ಕೆ ಮುಂದಾಗಬೇಕು. ರೈತ ಮುಖಂಡರು ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ಸಹಕರಿಸಬೇಕು ಎಂದು ಮುಖ್ಯಮಂತ್ರಿ ಮನವಿ ಮಾಡಿದರು.

ಆದರೆ ಕಬ್ಬಿಗೆ ₹5,500 ದರ ನಿಗದಿಪಡಿಸುವ ಕುರಿತು ಸ್ಪಷ್ಟ ತೀರ್ಮಾನ ಪ್ರಕಟಿಸಬೇಕೆಂದು ರೈತರು ಪಟ್ಟು ಹಿಡಿದಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಸ್ಪರ ಹೊಣೆಗಾರಿಕೆ ವರ್ಗಾಯಿಸುವ ಬದಲು ರೈತರು ಎದುರಿಸುತ್ತಿರುವ ಆರ್ಥಿಕ ಸಂಕಷ್ಟಕ್ಕೆ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.

ಶನಿವಾರದ ಪ್ರತಿಭಟನೆಗಳ ಬಳಿಕವೂ ಕಬ್ಬಿನ ದರ ವಿವಾದಕ್ಕೆ ಅಂತಿಮ ಪರಿಹಾರ ದೊರೆತಿಲ್ಲ. ಬೆಳಗಾವಿ, ಧಾರವಾಡ, ವಿಜಯಪುರ ಸೇರಿದಂತೆ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ರೈತರ ಅಸಮಾಧಾನ ಮುಂದುವರಿದಿದ್ದು, ಬೇಡಿಕೆಗಳನ್ನು ಈಡೇರಿಸದಿದ್ದರೆ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸುವುದಾಗಿ ರೈತ ಮುಖಂಡರು ಎಚ್ಚರಿಸಿದ್ದಾರೆ.

Author
Samadarshi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಡಾ. ಜಿನದತ್ತ ದೇಸಾಯಿ ನಿಧನಸಕ್ಕರೆ ಕನಿಷ್ಠ ಮಾರಾಟ ದರ 50 ರೂ.ಗೆ ಹೆಚ್ಚಿಸಲಿ: ಡಿ.ಕೆ. ಶಿವಕುಮಾರಘಟಪ್ರಭಾದಲ್ಲಿ ರೈತರ ಬಂದ್‌ಗೆ ಬೆಂಬಲ: ವ್ಯಾಪಾರ ವಹಿವಾಟು ಸಂಪೂರ್ಣ ಸ್ಥಗಿತರೈತರ ಹೋರಾಟ ತೀವ್ರ: ಬೆಳಗಾವಿ, ಧಾರವಾಡ, ವಿಜಯಪುರದಲ್ಲಿ ಪ್ರತಿಭಟನೆದೀಪಾವಳಿ : ಪ್ರಯಾಣಿಕರಿಗಾಗಿ 2,600 ಹೆಚ್ಚುವರಿ ಬಸ್‌ಗಳ ವ್ಯವಸ್ಥೆಜ್ಞಾನೇಶ ಕುಮಾರ ವಿರುದ್ಧ ಜನತಾ ಮಹಾಭಿಯೋಗ: ಖರ್ಗೆ ನಿವಾಸದಲ್ಲಿ ಅಣಕು ಸಂಸತ್ಭಾರತೀಯ ವಾಯುಪಡೆಗೆ ನೂತನ ಸಾರಥಿ ಅಶುತೋಷ ದೀಕ್ಷಿತಶಿವಾನಂದ ನೀಲಣ್ಣನವರಗೆ ಇಡಿ ಬಿಗ್ ಶಾಕ್: ₹427 ಕೋಟಿ ಆಸ್ತಿ ಜಪ್ತಿಪಂಚತಾರಾ ಹೋಟೆಲ್ ಈಜುಕೊಳದಲ್ಲಿ ವಿದ್ಯುತ್ ಆಘಾತ: ಇಬ್ಬರು ವಿದೇಶಿಗರ ಸಾವುಹಾಲಿನ ದರ ಏರಿಕೆ ಅನಿವಾರ್ಯ: ಡಿ.ಕೆ. ಶಿವಕುಮಾರ ಸಮರ್ಥನೆ