LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Local News

ಆರ್‌ಟಿಐ ಕಾರ್ಯಕರ್ತರು, ನಕಲಿ ಪತ್ರಕರ್ತರಿಂದ ಕಿರುಕುಳ ಆರೋಪ: ರಕ್ಷಣೆ ಕೋರಿ ಅಧಿಕಾರಿಗಳ ಮನವಿ

ಬೆಳಗಾವಿ, ಆಗಸ್ಟ್ 19: ಆರ್‌ಟಿಐ ಕಾರ್ಯಕರ್ತರು ಹಾಗೂ ಡಿಜಿಟಲ್ ಮತ್ತು ಮುದ್ರಣ ಮಾಧ್ಯಮದ ಪತ್ರಕರ್ತರೆಂದು ಹೇಳಿಕೊಂಡು ಕೆಲವರು ಸರ್ಕಾರಿ ಅಧಿಕಾರಿಗಳಿಗೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದು, ಹಣ ನೀಡುವಂತೆ ಒತ್ತಡ ಹಾಗೂ ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿ ಬೈಲಹೊಂಗಲ ಉಪವಿಭಾಗದ ವಿವಿಧ ಇಲಾಖೆಗಳ ಅಧಿಕಾರಿಗಳು ರಕ್ಷಣೆ ಕೋರಿ ಉಪವಿಭಾಗಾಧಿಕಾರಿ ಹಾಗೂ ಪೊಲೀಸರಿಗೆ ಮನವಿ ಸಲ್ಲಿಸಿದ್ದಾರೆ.

ಯಾವುದೇ ಸಾರ್ವಜನಿಕ ಹಿತಾಸಕ್ತಿ ಅಥವಾ ಸಾಮಾಜಿಕ ಉದ್ದೇಶವಿಲ್ಲದೆ ಹಳೆಯ ವಿಷಯಗಳಿಗೆ ಸಂಬಂಧಿಸಿದ ಮಾಹಿತಿಗಾಗಿ ಪದೇಪದೇ ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿಗಳನ್ನು ಸಲ್ಲಿಸಲಾಗುತ್ತಿದೆ. ಬಳಿಕ ಅರ್ಜಿಗಳ ಮೂಲಕ ಕೇಳಲಾದ ಮಾಹಿತಿಯನ್ನು ನೆಪವಾಗಿಸಿಕೊಂಡು ಅಧಿಕಾರಿಗಳ ಮೇಲೆ ಒತ್ತಡ ಹೇರಿ ಹಣ ನೀಡುವಂತೆ ಬೇಡಿಕೆ ಇಡಲಾಗುತ್ತಿದೆ ಎಂದು ಅಧಿಕಾರಿಗಳು ಮನವಿಯಲ್ಲಿ ಆರೋಪಿಸಿದ್ದಾರೆ.

ತಮ್ಮ ಬೇಡಿಕೆಗಳಿಗೆ ಅಧಿಕಾರಿಗಳು ಸ್ಪಂದಿಸದಿದ್ದರೆ ವಿವಿಧ ಇಲಾಖೆಗಳು ಹಾಗೂ ಹಿರಿಯ ಅಧಿಕಾರಿಗಳಿಗೆ ದೂರು ನೀಡುವುದಾಗಿ ಬೆದರಿಕೆ ಹಾಕಲಾಗುತ್ತಿದೆ. ಅಲ್ಲದೆ, ಕಚೇರಿಗಳ ಎದುರು ಪ್ರತಿಭಟನೆ ನಡೆಸುವುದು, ಧರಣಿ ಕೂರುವುದು ಹಾಗೂ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಎಚ್ಚರಿಕೆ ನೀಡಿ ಅಧಿಕಾರಿಗಳನ್ನು ಮಾನಸಿಕ ಒತ್ತಡಕ್ಕೆ ಒಳಪಡಿಸಲಾಗುತ್ತಿದೆ ಎಂದು ದೂರಿದ್ದಾರೆ.

ಮುಖ್ಯಮಂತ್ರಿ, ಲೋಕಾಯುಕ್ತ, ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳಿಗೆ ಅಧಿಕಾರಿಗಳ ವಿರುದ್ಧ ಮೇಲಿಂದ ಮೇಲೆ ದೂರುಗಳನ್ನು ಸಲ್ಲಿಸಲಾಗುತ್ತಿದೆ. ಬಳಿಕ ಆ ದೂರುಗಳ ಆಧಾರದ ಮೇಲೆ ಹಿರಿಯ ಅಧಿಕಾರಿಗಳ ಕಚೇರಿಗಳ ಎದುರು ಪ್ರತಿಭಟನೆ ನಡೆಸುವುದಾಗಿ ಹೇಳಿ ಒತ್ತಡ ಹೇರುವ ಮೂಲಕ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಲಾಗುತ್ತಿದೆ ಎಂದು ಅಧಿಕಾರಿಗಳು ಆರೋಪಿಸಿದ್ದಾರೆ.

ಜುಲೈ 24ರಂದು ಕರ್ನಾಟಕ ನೀರಾವರಿ ನಿಗಮದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮೊಹಮ್ಮದ್ ತೌಫಿಕ್ ಶೇಖ್ ಅವರ ವಿರುದ್ಧ ಆರೋಪಗಳನ್ನು ಒಳಗೊಂಡ ಮನವಿಯೊಂದನ್ನು ಬೈಲಹೊಂಗಲ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಸಲ್ಲಿಸಿದ ಘಟನೆಯನ್ನೂ ಅಧಿಕಾರಿಗಳು ಉಲ್ಲೇಖಿಸಿದ್ದಾರೆ. ಇಂತಹ ದೂರುಗಳು ಹಾಗೂ ಅರ್ಜಿಗಳನ್ನು ವೈಯಕ್ತಿಕ ಉದ್ದೇಶಕ್ಕಾಗಿ ಬಳಸಿಕೊಂಡು ಅಧಿಕಾರಿಗಳನ್ನು ಗುರಿಯಾಗಿಸಿಕೊಂಡು ಒತ್ತಡ ಹೇರುವ ಪ್ರವೃತ್ತಿ ಹೆಚ್ಚಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಮಾಹಿತಿ ಹಕ್ಕು ಕಾಯ್ದೆ ಸಾರ್ವಜನಿಕರಿಗೆ ಸರ್ಕಾರದ ಕಾರ್ಯವೈಖರಿ ಹಾಗೂ ಆಡಳಿತದಲ್ಲಿ ಪಾರದರ್ಶಕತೆ ಖಚಿತಪಡಿಸಿಕೊಳ್ಳಲು ರೂಪಿಸಲಾದ ಪ್ರಮುಖ ಕಾನೂನು. ಆದರೆ, ಕಾಯ್ದೆಯ ಉದ್ದೇಶಕ್ಕೆ ವಿರುದ್ಧವಾಗಿ ಅದನ್ನು ದುರುಪಯೋಗಪಡಿಸಿಕೊಂಡು ಸರ್ಕಾರಿ ಅಧಿಕಾರಿಗಳನ್ನು ಬೆದರಿಸುವುದು ಅಥವಾ ವೈಯಕ್ತಿಕ ಲಾಭಕ್ಕಾಗಿ ಒತ್ತಡ ಹೇರುವುದು ಕಂಡುಬಂದರೆ ಅಂತಹ ಪ್ರಕರಣಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಅಧಿಕಾರಿಗಳು ಒತ್ತಾಯಿಸಿದ್ದಾರೆ.

ಅದೇ ರೀತಿ, ಮಾಧ್ಯಮ ಪ್ರತಿನಿಧಿಗಳ ಸೋಗಿನಲ್ಲಿ ಅಧಿಕಾರಿಗಳಿಗೆ ಬೆದರಿಕೆ ಹಾಕುವವರು ಅಥವಾ ಬ್ಲ್ಯಾಕ್‌ಮೇಲ್ ನಡೆಸುವವರ ವಿರುದ್ಧವೂ ಕಾನೂನುಬದ್ಧವಾಗಿ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಪತ್ರಿಕೋದ್ಯಮ ಹಾಗೂ ಮಾಹಿತಿ ಹಕ್ಕು ಕಾಯ್ದೆಯಂತಹ ಪ್ರಜಾಪ್ರಭುತ್ವದ ಪ್ರಮುಖ ವ್ಯವಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ಅಧಿಕಾರಿಗಳ ಮೇಲೆ ಒತ್ತಡ ಹೇರುವ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು ಎಂದು ಮನವಿ ಮಾಡಿದ್ದಾರೆ.

ಸರ್ಕಾರಿ ಅಧಿಕಾರಿಗಳ ವಿರುದ್ಧ ಯಾರೇ ದೂರು ಸಲ್ಲಿಸಿದರೂ ಅದನ್ನು ತಕ್ಷಣವೇ ಸತ್ಯವೆಂದು ಪರಿಗಣಿಸಿ ಕ್ರಮ ಕೈಗೊಳ್ಳುವ ಬದಲು, ದೂರುಗಳಲ್ಲಿರುವ ಆರೋಪಗಳ ಕುರಿತು ಸೂಕ್ತ ಪರಿಶೀಲನೆ ಹಾಗೂ ಅಗತ್ಯ ತನಿಖೆ ನಡೆಸಿದ ಬಳಿಕವೇ ಮುಂದಿನ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳು ಆಗ್ರಹಿಸಿದ್ದಾರೆ. ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳು ಯಾವುದೇ ಭಯ, ಬೆದರಿಕೆ ಅಥವಾ ಅನಗತ್ಯ ಒತ್ತಡವಿಲ್ಲದೆ ಕೆಲಸ ಮಾಡಲು ಅಗತ್ಯ ರಕ್ಷಣೆ ಒದಗಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಅಧಿಕಾರಿಗಳ ವಿರುದ್ಧ ಸುಳ್ಳು ಅಥವಾ ದುರುದ್ದೇಶಪೂರ್ವಕ ದೂರುಗಳನ್ನು ಸಲ್ಲಿಸಿ ಅವರ ಕರ್ತವ್ಯಕ್ಕೆ ಅಡ್ಡಿಪಡಿಸುವವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಬೇಕು. ಸಾರ್ವಜನಿಕ ಸೇವೆಯಲ್ಲಿ ತೊಡಗಿರುವ ಅಧಿಕಾರಿಗಳಿಗೆ ನಿರಂತರವಾಗಿ ಬೆದರಿಕೆ ಹಾಗೂ ಮಾನಸಿಕ ಕಿರುಕುಳ ನೀಡಿದರೆ ಆಡಳಿತ ವ್ಯವಸ್ಥೆಯ ಕಾರ್ಯನಿರ್ವಹಣೆಯ ಮೇಲೆಯೇ ಪರಿಣಾಮ ಬೀರುವ ಸಾಧ್ಯತೆಯಿದೆ. ಹೀಗಾಗಿ, ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಮನವಿ ಸಲ್ಲಿಸುವ ಸಂದರ್ಭದಲ್ಲಿ ಕರ್ನಾಟಕ ನೀರಾವರಿ ನಿಗಮದ ಉಪವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮೊಹಮ್ಮದ್ ತೌಫಿಕ್ ಶೇಖ್, ಜಿಲ್ಲಾ ಪಂಚಾಯಿತಿ ಎಂಜಿನಿಯರಿಂಗ್ ಉಪವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮಹೇಶ ಹೂಳಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಅಜಿತ ಕುಮಾರ ಬಿರಾದಾರ ಹಾಗೂ ಲೋಕೋಪಯೋಗಿ ಮತ್ತು ಒಜಿಎಸ್‌ಎ ಉಪವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಅನಿಲ ಎಂ. ಉಪಸ್ಥಿತರಿದ್ದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST