

ಖಾನಾಪುರ, ಸೆ. 28 : (ಸಮದರ್ಶಿ ಸುದ್ದಿ) - ಖಾನಾಪುರ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ಸೂಕ್ತ ಪರಿಹಾರ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ತಕ್ಷಣ ಈಡೇರಿಸುವಂತೆ ಆಗ್ರಹಿಸಿ ರೈತ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಸೋಮವಾರ ಲಿಂಗನಮಠ ಕ್ರಾಸ್‌ನಲ್ಲಿ ನಾಲ್ಕು ತಾಸು ಬೃಹತ್ ರಸ್ತೆ ತಡೆ ಚಳವಳಿ ನಡೆಸಲಾಯಿತು.
ಅಖಿಲ ಕರ್ನಾಟಕ ರೈತ ಸಂಘ ಬೆಂಗಳೂರು, ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ, ಅಖಂಡ ಕರ್ನಾಟಕ ರೈತ ಸಂಘಟನೆ, ಕರ್ನಾಟಕ ರಕ್ಷಣಾ ವೇದಿಕೆ, ದಲಿತ ಹಾಗೂ ಮಹಿಳಾ ಸಂಘಟನೆಗಳ ಸಹಯೋಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಖಾನಾಪುರ, ಕಿತ್ತೂರು, ಅಳ್ನಾವರ, ಹಳಿಯಾಳ ಸೇರಿದಂತೆ ವಿವಿಧ ತಾಲೂಕುಗಳಿಂದ ರೈತರು, ರೈತ ಮುಖಂಡರು, ವ್ಯಾಪಾರಸ್ಥರು ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಬೆಳಗಾವಿ–ತಾಳಗುಪ್ಪ ಹಾಗೂ ರಾಮನಗರ–ಧಾರವಾಡ ರಾಜ್ಯ ಹೆದ್ದಾರಿಗಳ ಮಧ್ಯಭಾಗದಲ್ಲಿರುವ ಲಿಂಗನಮಠ ಕ್ರಾಸ್‌ನಲ್ಲಿ ಪ್ರತಿಭಟನಾಕಾರರು ರಸ್ತೆ ತಡೆ ನಡೆಸಿ ಸರ್ಕಾರದ ಗಮನ ಸೆಳೆದರು. ಸುಮಾರು ನಾಲ್ಕು ತಾಸು ನಡೆದ ಪ್ರತಿಭಟನೆಯಲ್ಲಿ ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಲಾಯಿತು.
ಖಾನಾಪುರ ತಾಲೂಕಿನಲ್ಲಿ ಮಳೆ ಕೊರತೆ ಹಾಗೂ ಕೃಷಿ ಸಂಕಷ್ಟದಿಂದ ರೈತರು ತೀವ್ರ ತೊಂದರೆ ಎದುರಿಸುತ್ತಿದ್ದು, ತಾಲೂಕನ್ನು ಕೂಡಲೇ ಬರಪೀಡಿತ ಪ್ರದೇಶವೆಂದು ಘೋಷಿಸಬೇಕು. ರೈತರಿಗೆ ಪ್ರತಿ ಟನ್‌ಗೆ ₹25 ಸಾವಿರ ಪರಿಹಾರ ಧನ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಕಬ್ಬು ಬೆಳೆಗಾರರು ಉತ್ಪಾದನಾ ವೆಚ್ಚ ಹೆಚ್ಚಳದಿಂದ ಸಂಕಷ್ಟಕ್ಕೆ ಸಿಲುಕಿದ್ದು, ಕಬ್ಬಿಗೆ ಪ್ರತಿ ಟನ್‌ಗೆ ₹6 ಸಾವಿರ ದರ ನಿಗದಿಪಡಿಸಬೇಕು. ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಹಾಗೂ ಕೃಷಿ ಉತ್ಪನ್ನಗಳಿಗೆ ರೈತರಿಗೆ ನ್ಯಾಯಯುತ ಆದಾಯ ದೊರೆಯುವಂತೆ ಸ್ಥಿರ ಬೆಂಬಲ ಬೆಲೆ ನಿಗದಿಪಡಿಸಬೇಕು ಎಂದು ಒತ್ತಾಯಿಸಿದರು.
ಖಾನಾಪುರ ತಾಲೂಕಿನ ನೀರಾವರಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಮಲಪ್ರಭಾ ನದಿಗೆ ಅಣೆಕಟ್ಟು ನಿರ್ಮಿಸಬೇಕು. ಇದರಿಂದ ಕೃಷಿಗೆ ನೀರಾವರಿ ಸೌಲಭ್ಯ ಒದಗಿಸುವುದರ ಜೊತೆಗೆ ತಾಲೂಕಿನ ಗ್ರಾಮಗಳಿಗೆ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಪ್ರತಿಭಟನಾಕಾರರು ಸರ್ಕಾರವನ್ನು ಆಗ್ರಹಿಸಿದರು.
ವಿದ್ಯುತ್ ಖಾಸಗೀಕರಣದ ಕ್ರಮವನ್ನು ಕೈಬಿಡಬೇಕು. ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ರೈತರಿಗೆ ಪ್ರತಿದಿನ ಕನಿಷ್ಠ ಏಳು ಗಂಟೆ ನಿರಂತರ ತ್ರಿಫೇಸ್ ವಿದ್ಯುತ್ ಪೂರೈಸಬೇಕು. ವಿದ್ಯುತ್ ಸಮಸ್ಯೆಯಿಂದ ಕೃಷಿ ಪಂಪ್‌ಸೆಟ್‌ಗಳನ್ನು ಸಮರ್ಪಕವಾಗಿ ಬಳಸಲು ಸಾಧ್ಯವಾಗುತ್ತಿಲ್ಲ ಎಂದು ರೈತ ಮುಖಂಡರು ದೂರಿದರು.
ತಾಲೂಕಿನ ಗ್ರಾಮೀಣ ಭಾಗದ ರಸ್ತೆಗಳು ತೀವ್ರವಾಗಿ ಹದಗೆಟ್ಟಿದ್ದು, ಸಂಚಾರಕ್ಕೆ ತೊಂದರೆಯಾಗುತ್ತಿದೆ. ಸುಮಾರು 830 ಕಿ.ಮೀ. ಹದಗೆಟ್ಟ ರಸ್ತೆಗಳನ್ನು ತುರ್ತಾಗಿ ದುರಸ್ತಿಪಡಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಬೇಕು ಎಂಬ ಬೇಡಿಕೆಯನ್ನೂ ಪ್ರತಿಭಟನಾಕಾರರು ಮುಂದಿಟ್ಟರು.
ಗೃಹಲಕ್ಷ್ಮಿ ಯೋಜನೆಯ ಬಾಕಿ ಹಣದ ಜೊತೆಗೆ ವಿಧವಾ ವೇತನ, ಅಂಗವಿಕಲರ ವೇತನ ಹಾಗೂ ವೃದ್ಧಾಪ್ಯ ವೇತನ ಸೇರಿದಂತೆ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳಡಿ ಬಾಕಿ ಉಳಿದಿರುವ ಹಣವನ್ನು ಫಲಾನುಭವಿಗಳಿಗೆ ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಲಾಯಿತು.
ರೈತರ ಆರ್ಥಿಕ ಸ್ಥಿತಿ ಸುಧಾರಿಸಲು ಡಾ. ಸ್ವಾಮಿನಾಥನ್ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಬೇಕು. ಕೃಷಿ ಉತ್ಪನ್ನಗಳಿಗೆ ಲಾಭದಾಯಕ ಬೆಲೆ ದೊರೆಯುವಂತೆ ಕ್ರಮ ಕೈಗೊಳ್ಳುವುದರೊಂದಿಗೆ ರೈತರ ಜ್ವಲಂತ ಸಮಸ್ಯೆಗಳಿಗೆ ಸರ್ಕಾರ ವಿಳಂಬ ಮಾಡದೆ ಪರಿಹಾರ ಕಲ್ಪಿಸಬೇಕು ಎಂದು ಹೋರಾಟಗಾರರು ಒತ್ತಾಯಿಸಿದರು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರ್ ದುಂಡಪ್ಪ ಕುಮಾರ ರೈತ ಮುಖಂಡರಿಂದ ಮನವಿ ಸ್ವೀಕರಿಸಿದರು. ರೈತರು ಹಾಗೂ ವಿವಿಧ ಸಂಘಟನೆಗಳು ಮುಂದಿಟ್ಟಿರುವ ಬೇಡಿಕೆಗಳ ಕುರಿತು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ವರದಿ ಸಲ್ಲಿಸಿ ಮುಂದಿನ ಕ್ರಮಕ್ಕೆ ಕಳುಹಿಸಲಾಗುವುದು ಎಂದು ಅವರು ತಿಳಿಸಿದರು.
ಪ್ರತಿಭಟನೆಯಲ್ಲಿ ಅವರೊಳ್ಳಿ-ಬಿಳಕಿ ರುದ್ರಸ್ವಾಮಿ ಮಠದ ಚನ್ನಬಸವದೇವರು, ಹಿಡಕಲ್ ಪ್ರಭು ಅಡವಿಸಿದ್ದೇಶ್ವರ ಮಹಾಸ್ವಾಮೀಜಿ, ತೊಲಗಿ ಅದೃಶ್ಯಾನಂದ ಮಹಾಸ್ವಾಮೀಜಿ, ಅಖಿಲ ಕರ್ನಾಟಕ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕಿಶೋರ ಮಿಠಾರಿ, ನಂದಗಡ ಮಾರ್ಕೆಟಿಂಗ್ ಅಧ್ಯಕ್ಷ ಶ್ರೀಶೈಲ್ ಮಾಟೊಳ್ಳಿ, ಲಿಂಗನಮಠ ಗ್ರಾಪಂ ಮಾಜಿ ಅಧ್ಯಕ್ಷ ಕಾಶೀಮ ಹಟ್ಟಿಹೊಳಿ, ರೈತ ಮುಖಂಡರಾದ ಪಾಂಡುರಂಗ ಮೀಟಗಾರ, ಬಾಬು ಬಿಜಾಪುರ, ಮಹಾಂತೇಶ ಸಂಗೊಳ್ಳಿ, ಯಲ್ಲಪ್ಪ ಗುಪಿತ, ಯಲ್ಲಾರಿ ನೀಲಜಕರ, ಮೈಕಲ್ ಫರ್ನಾಂಡಿಸ್, ಬಸವರಾಜ ಮುಗಳಿಹಾಳ, ಚಂದ್ರಗೌಡ ಪಾಟೀಲ, ರಾಜು ರಪಾಟಿ, ಬಸವರಾಜ ನಾಯಕ, ಪಾಂಡು ಪಾಟೀಲ, ಭೈರು ಮಾಂದವಿ ಸೇರಿದಂತೆ ತಾಲೂಕಿನ ರೈತ ಮುಖಂಡರು ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.