ಬೆಂಗಳೂರು, ನ. 4: ಕೇಂದ್ರ ಸರಕಾರ ಮೊದಲು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಸಲಿ. ಅದಕ್ಕೆ ಅನುಗುಣವಾಗಿ ರಾಜ್ಯದಲ್ಲಿಯೂ ಬಸ್ ಪ್ರಯಾಣ ದರ ಕಡಿಮೆ ಮಾಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದ್ದು, ದರ ಏರಿಕೆ ವಿರೋಧಿಸುತ್ತಿರುವ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿವೆ. ಹತ್ತು ದಿನಗಳ ಹಿಂದೆ ಡೀಸೆಲ್ ಖರೀದಿಸಲೂ ನಿಗಮಗಳ ಬಳಿ ಹಣವಿರಲಿಲ್ಲ. ಸರಕಾರವೇ ಹಣ ಬಿಡುಗಡೆ ಮಾಡಬೇಕಾಯಿತು. ನಿಗಮಗಳ ನಷ್ಟ ಹಾಗೂ ನಿರ್ವಹಣಾ ವೆಚ್ಚ ಹೆಚ್ಚಳದಿಂದ ಪ್ರಯಾಣ ದರ ಏರಿಕೆ ಅನಿವಾರ್ಯವಾಗಿದೆ ಎಂದು ಸಮರ್ಥಿಸಿಕೊಂಡರು.
ಡೀಸೆಲ್, ಪೆಟ್ರೋಲ್ ಮತ್ತು ಅಡುಗೆ ಅನಿಲದ ಬೆಲೆ ಹೆಚ್ಚಾದಾಗ ಬಿಜೆಪಿ ನಾಯಕರು ಏಕೆ ಧ್ವನಿ ಎತ್ತಲಿಲ್ಲ? ಬಸ್ ದರ ಏರಿಕೆ ವಿರೋಧಿಸುವವರು ಮೊದಲು ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಹೋಗಿ ಇಂಧನದ ಮೇಲಿನ ತೆರಿಗೆ ಮತ್ತು ಸೆಸ್ ಕಡಿಮೆ ಮಾಡುವಂತೆ ಒತ್ತಾಯಿಸಲಿ ಎಂದು ಸವಾಲು ಹಾಕಿದರು.
ಕೇಂದ್ರ ಸರಕಾರ ಇಂಧನ ಬೆಲೆ ಇಳಿಸಿದರೆ ರಾಜ್ಯ ಸರಕಾರವೂ ಬಸ್ ಪ್ರಯಾಣ ದರ ಕಡಿಮೆ ಮಾಡಲು ಸಿದ್ಧವಿದೆ ಎಂದು ಸ್ಪಷ್ಟಪಡಿಸಿದರು.
ರಾಜ್ಯದ ಮೂರು ಪ್ರಮುಖ ರಸ್ತೆ ಸಾರಿಗೆ ನಿಗಮಗಳ ಬಸ್ ಪ್ರಯಾಣ ದರವನ್ನು ಸರಾಸರಿ ಶೇ.23ರಷ್ಟು ಹೆಚ್ಚಿಸಲಾಗಿದ್ದು, ಪರಿಷ್ಕೃತ ದರ ಬುಧವಾರ ಮಧ್ಯರಾತ್ರಿಯಿಂದ ಜಾರಿಗೆ ಬರಲಿದೆ.