ಬೆಂಗಳೂರು, ಅ. 24 (ಸಮದರ್ಶಿ ಸುದ್ದಿ): ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಅಮಾನತುಗೊಂಡಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ ಗಂಗ್ವಾರ ವಿರುದ್ಧ ಕಾನೂನು ಕ್ರಮ ಮುಂದುವರಿಸಲು ಪ್ರಾಸಿಕ್ಯೂಷನ್ ಅನುಮತಿ ನೀಡಲಾಗಿದೆ ಎಂದು ಡಿ.ಕೆ. ಶಿವಕುಮಾರ ತಿಳಿಸಿದ್ದಾರೆ.
ಶನಿವಾರ ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿರುವ ಅವರು, ಸರ್ಕಾರಿ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆಸಿ ಯುವಜನರ ಭವಿಷ್ಯಕ್ಕೆ ಧಕ್ಕೆ ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.
ಸಾರ್ವಜನಿಕ ನೇಮಕಾತಿ ವ್ಯವಸ್ಥೆಯ ಮೇಲಿನ ಜನರ ವಿಶ್ವಾಸ ಕಾಪಾಡುವುದು ಸರ್ಕಾರದ ಆದ್ಯತೆಯಾಗಿದೆ. ಭ್ರಷ್ಟಾಚಾರದಲ್ಲಿ ಭಾಗಿಯಾದವರಿಗೆ ಯಾವುದೇ ರಕ್ಷಣೆ ನೀಡುವುದಿಲ್ಲ. ಆಡಳಿತದಲ್ಲಿ ಪಾರದರ್ಶಕತೆ ಮತ್ತು ಪ್ರಾಮಾಣಿಕತೆ ಕಾಪಾಡುವ ವಿಷಯದಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.
ನೇಮಕಾತಿ ಪ್ರಕ್ರಿಯೆಯ ವಿಶ್ವಾಸಾರ್ಹತೆಗೆ ಧಕ್ಕೆ ತರುವ ಅಕ್ರಮಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಬದ್ಧವಾಗಿದೆ ಎಂದು ಶಿವಕುಮಾರ ತಿಳಿಸಿದ್ದಾರೆ.