ಹೊಸದಿಲ್ಲಿ, ಜುಲೈ 21: ‘ಸಂಸತ್ ಚಲೊ’ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳು ಮತ್ತು ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ಲಾಠಿ ಚಾರ್ಜ್ ನಡೆಸಿ, ಅಶ್ರುವಾಯು ಶೆಲ್‌ಗಳನ್ನು ಸಿಡಿಸಿರುವುದಕ್ಕೆ ಸಂಬಂಧಿಸಿದ ಅರ್ಜಿಯ ತುರ್ತು ವಿಚಾರಣೆಗೆ ದೆಹಲಿ ಹೈಕೋರ್ಟ್ ಮಂಗಳವಾರ ನಿರಾಕರಿಸಿದೆ.
ಮುಖ್ಯ ನ್ಯಾಯಮೂರ್ತಿ ಡಿ.ಕೆ. ಉಪಾಧ್ಯಾಯ ಹಾಗೂ ನ್ಯಾಯಮೂರ್ತಿ ತೇಜಸ್ ಕಾರಿಯಾ ಅವರನ್ನೊಳಗೊಂಡ ವಿಭಾಗೀಯ ಪೀಠ, ಇಂತಹ ವಿಷಯಗಳಲ್ಲಿ ನ್ಯಾಯಾಲಯವನ್ನು ಅನಗತ್ಯವಾಗಿ ಎಳೆಯಬೇಡಿ ಎಂದು ಅರ್ಜಿದಾರರಿಗೆ ಸೂಚಿಸಿತು.
ಅರ್ಜಿಯ ನಿಯಮಿತ ವಿಚಾರಣೆಯನ್ನು ಬುಧವಾರ ಕೈಗೆತ್ತಿಕೊಳ್ಳಲಾಗುವುದು ಎಂದು ನ್ಯಾಯಪೀಠ ತಿಳಿಸಿತು.
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ, ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ) ನೇತೃತ್ವದಲ್ಲಿ ಸೋಮವಾರ ಸಾವಿರಾರು ವಿದ್ಯಾರ್ಥಿಗಳು ‘ಸಂಸತ್ ಚಲೊ’ ಪ್ರತಿಭಟನೆ ನಡೆಸಿದ್ದರು.
ಪ್ರತಿಭಟನೆಯನ್ನು ಹತ್ತಿಕ್ಕಲು ಪೊಲೀಸರು ಬಲಪ್ರಯೋಗ ನಡೆಸಿದ್ದಾರೆ. ಲಾಠಿ ಚಾರ್ಜ್ ಮತ್ತು ಅಶ್ರುವಾಯು ಶೆಲ್‌ಗಳ ಬಳಕೆಯಿಂದ ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಹೋರಾಟಗಾರ ಸೊನಮ್ ವಾಂಗ್ಚುಕ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೊ ಅವರನ್ನೂ ಪೊಲೀಸರು ತಳ್ಳಿದ್ದಾರೆ ಎಂದು ಸಿಜೆಪಿ ಆರೋಪಿಸಿದೆ.
ಆದರೆ, ಗೀತಾಂಜಲಿ ಅವರ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಆರೋಪವನ್ನು ದೆಹಲಿ ಪೊಲೀಸರು ತಳ್ಳಿಹಾಕಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಮಾಹಿತಿ ಸಂಪೂರ್ಣ ಸುಳ್ಳು ಹಾಗೂ ಜನರನ್ನು ದಾರಿ ತಪ್ಪಿಸುವಂತಿದೆ ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.