ಬೆಳಗಾವಿ, ಆ.5: ಕಳೆದ ಹಲವು ದಿನಗಳಿಂದ ಬೆಳಗಾವಿ ಸಮೀಪದ ಸುತಗಟ್ಟಿ ಗ್ರಾಮ ಹಾಗೂ ಸುತ್ತಮುತ್ತಲಿನ ಪ್ರದೇಶದ ಜನರಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬುಧವಾರ ಯಶಸ್ವಿಯಾಗಿ ಬೋನಿಗೆ ಸೆರೆ ಹಿಡಿದಿದ್ದು ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
ಕಾಕತಿ ಅರಣ್ಯ ವಲಯ ವ್ಯಾಪ್ತಿಯ ಸುತಗಟ್ಟಿ ಗ್ರಾಮದ ಹೊರವಲಯದಲ್ಲಿ ಕಳೆದ ಕೆಲವು ದಿನಗಳಿಂದ ಚಿರತೆ ನಿರಂತರವಾಗಿ ಕಾಣಿಸಿಕೊಳ್ಳುತ್ತಿತ್ತು. ಮುಂಜಾನೆ ಮತ್ತು ಸಂಜೆಯ ವೇಳೆಯಲ್ಲಿ ಹೊಲಗದ್ದೆಗಳು, ಗ್ರಾಮೀಣ ರಸ್ತೆಗಳು ಹಾಗೂ ಜನವಸತಿ ಸಮೀಪ ಓಡಾಡುತ್ತಿದ್ದ ಚಿರತೆಯ ದರ್ಶನದಿಂದ ರೈತರು, ಮಹಿಳೆಯರು ಮತ್ತು ಶಾಲಾ ಮಕ್ಕಳು ಭಯಭೀತರಾಗಿದ್ದರು. ಹಲವರು ಒಬ್ಬರೇ ಹೊಲಗಳಿಗೆ ತೆರಳಲು ಹಿಂದೇಟು ಹಾಕುತ್ತಿದ್ದು, ಮಕ್ಕಳನ್ನು ಶಾಲೆಗೆ ಕಳುಹಿಸುವ ವಿಚಾರದಲ್ಲಿಯೂ ಪೋಷಕರು ಆತಂಕ ವ್ಯಕ್ತಪಡಿಸಿದ್ದರು.
ಸ್ಥಳೀಯರು ಚಿರತೆಯ ಚಲನವಲನವನ್ನು ಮೊಬೈಲ್‌ನಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಈ ವಿಡಿಯೊಗಳು ವೈರಲ್ ಆಗುತ್ತಿದ್ದಂತೆ ಸಾರ್ವಜನಿಕರಲ್ಲಿ ಆತಂಕ ಮತ್ತಷ್ಟು ಹೆಚ್ಚಾಗಿದ್ದು, ತಕ್ಷಣ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು.
ಗ್ರಾಮಸ್ಥರ ದೂರಿನ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ವಿಶೇಷ ಕಾರ್ಯಾಚರಣೆ ಆರಂಭಿಸಿದರು. ಚಿರತೆಯ ಹೆಜ್ಜೆ ಗುರುತುಗಳನ್ನು ಆಧರಿಸಿ ಅದರ ಸಂಚಾರ ಮಾರ್ಗವನ್ನು ಪತ್ತೆಹಚ್ಚಿದ ಅಧಿಕಾರಿಗಳು, ಅದು ಆಗಾಗ್ಗೆ ಓಡಾಡುತ್ತಿದ್ದ ಸ್ಥಳದಲ್ಲಿ ಬೋನು ಅಳವಡಿಸಿದ್ದರು.
ಬುಧವಾರ ಬೆಳಗಿನ ವೇಳೆಯಲ್ಲಿ ಚಿರತೆ ಬೋನಿನೊಳಗೆ ಪ್ರವೇಶಿಸಿದ್ದು, ಯಾವುದೇ ಅವಘಡ ಸಂಭವಿಸದೆ ಸುರಕ್ಷಿತವಾಗಿ ಸೆರೆ ಹಿಡಿಯಲಾಯಿತು. ಬಳಿಕ ಅರಣ್ಯ ಇಲಾಖೆ ಸಿಬ್ಬಂದಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿ ಚಿರತೆಯನ್ನು ತಮ್ಮ ವಶಕ್ಕೆ ಪಡೆದರು.
ಚಿರತೆ ಸೆರೆ ಸಿಕ್ಕಿರುವುದರಿಂದ ಸುತಗಟ್ಟಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಜನರು ನಿರಾಳರಾಗಿದ್ದಾರೆ. ಹಲವು ದಿನಗಳಿಂದ ಭಯದ ವಾತಾವರಣದಲ್ಲಿ ಬದುಕುತ್ತಿದ್ದ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಯ ತ್ವರಿತ ಕಾರ್ಯಾಚರಣೆಯನ್ನು ಶ್ಲಾಘಿಸಿದ್ದಾರೆ.
ಈ ಘಟನೆ ಕಾಕತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.