ಹೊಸದಿಲ್ಲಿ, ನ. 28: ರಾಜಕೀಯ ಲಾಭಕ್ಕಾಗಿ ಕ್ಷೇತ್ರ ಪುನರ್ವಿಂಗಡಣೆ ಮಸೂದೆಯನ್ನು ಜಾರಿಗೊಳಿಸಲು ಬಿಜೆಪಿ ಮುಂದಾಗಿದೆ. ಮಸೂದೆಯನ್ನು ತಡೆಯಲು ಅಗತ್ಯವಾದ ಸಂಖ್ಯಾಬಲ ನಮ್ಮ ಬಳಿ ಇದೆಯೋ ಇಲ್ಲವೋ ಗೊತ್ತಿಲ್ಲ. ಆದರೆ, ಮಸೂದೆಯ ವಿರುದ್ಧ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಶುಕ್ರವಾರ ಮಧ್ಯಾಹ್ನ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ನಡೆದ ಪಕ್ಷದ ಸಂಸದೀಯ ಕಾರ್ಯತಂತ್ರ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಕ್ಷೇತ್ರ ಪುನರ್ವಿಂಗಡಣೆ ಮಸೂದೆಗೆ ಸಂಬಂಧಿಸಿದಂತೆ ಕಾಂಗ್ರೆಸ್ನ ನಿಲುವು ಸ್ಪಷ್ಟವಾಗಿದ್ದು, ಅದನ್ನು ಪ್ರಬಲವಾಗಿ ವಿರೋಧಿಸಲಾಗುವುದು ಎಂದು ತಿಳಿಸಿದ್ದಾರೆ.
ಸಭೆಯಲ್ಲಿ ಕಾಂಗ್ರೆಸ್ನ ಎಲ್ಲ ಸಂಸದರು ಭಾಗವಹಿಸಿದ್ದರು. ಮಸೂದೆಗೆ ಸಂಬಂಧಿಸಿದಂತೆ ಶನಿವಾರ ಇತರ ಮಿತ್ರಪಕ್ಷಗಳ ನಾಯಕರೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಕಾಂಗ್ರೆಸ್ ಹಿರಿಯ ನಾಯಕ ಗೌರವ ಗೊಗೊಯ್ ತಿಳಿಸಿದ್ದಾರೆ.
ಈಗಿನ ಸ್ಥಾನಗಳಲ್ಲೇ ಮಹಿಳಾ ಮೀಸಲಾತಿ ಜಾರಿಯಾಗಲಿ
ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಗೊಗೊಯ್, ಲೋಕಸಭೆಯ ಹಾಲಿ ಸದಸ್ಯಬಲದಲ್ಲಿ ಯಾವುದೇ ಬದಲಾವಣೆ ಮಾಡದೆ, ಈಗಿರುವ ಸ್ಥಾನಗಳ ಆಧಾರದಲ್ಲಿಯೇ ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ಜಾರಿಗೊಳಿಸಬೇಕು. ಲೋಕಸಭೆಯಲ್ಲಿ ವಿವಿಧ ರಾಜ್ಯಗಳಿಗೆ ಈಗಿರುವ ಪ್ರಾತಿನಿಧ್ಯದ ಅನುಪಾತವನ್ನು ಮುಂದಿನ 25 ವರ್ಷಗಳವರೆಗೆ ಯಥಾಸ್ಥಿತಿಯಲ್ಲಿ ಮುಂದುವರಿಸಬೇಕು ಎಂಬುದು ಕಾಂಗ್ರೆಸ್ನ ಬೇಡಿಕೆಯಾಗಿದೆ ಎಂದು ಹೇಳಿದರು.
ಮಹಿಳಾ ಮೀಸಲಾತಿ ಜಾರಿಗೊಳಿಸಲು ಕ್ಷೇತ್ರ ಪುನರ್ವಿಂಗಡಣೆಯ ಅಗತ್ಯವೇ ಇಲ್ಲ. ಕ್ಷೇತ್ರ ಪುನರ್ವಿಂಗಡಣೆಯ ಮೂಲಕ ಮತದಾರರು ಯಾವ ಕ್ಷೇತ್ರದಲ್ಲಿ ಮತ ಚಲಾಯಿಸಬೇಕು ಎಂಬುದನ್ನೂ ನಿರ್ಧರಿಸಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಅವರು ಆರೋಪಿಸಿದರು.