
ಬೆಳಗಾವಿ, ಸೆ. 30 : (ಸಮದರ್ಶಿ ಸುದ್ದಿ) - ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿರುವ ಆರೋಪದ ಹಿನ್ನೆಲೆಯಲ್ಲಿ ನಿಪ್ಪಾಣಿ ತಹಶೀಲ್ದಾರ್ ಸುರೇಶ ಮುಂಜೆ ಅವರಿಗೆ ಸಂಬಂಧಿಸಿದ ಮನೆ, ಕಚೇರಿ ಹಾಗೂ ಸಂಬಂಧಿಕರ ನಿವಾಸಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಬೆಳಗ್ಗೆ ಏಕಕಾಲಕ್ಕೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಬೆಳಗಾವಿ ಲೋಕಾಯುಕ್ತ ಎಸ್ಪಿ ಪ್ರಸನ್ನ ದೇಸಾಯಿ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳ ತಂಡ, ನಿಪ್ಪಾಣಿ ತಹಶೀಲ್ದಾರ ಕಚೇರಿ ಸೇರಿದಂತೆ ಹಲವು ಸ್ಥಳಗಳಲ್ಲಿ ಶೋಧ ನಡೆಸಿದೆ.
ನಿಪ್ಪಾಣಿ ಪಟ್ಟಣದಲ್ಲಿರುವ ಸುರೇಶ ಮುಂಜೆ ಅವರಿಗೆ ಸಂಬಂಧಿಸಿದ ನಿವಾಸ, ಅಥಣಿ ಪಟ್ಟಣದಲ್ಲಿರುವ ಮನೆ ಹಾಗೂ ಮೂಡಲಗಿಯಲ್ಲಿರುವ ಅವರ ಪತ್ನಿಯ ತವರು ಮನೆ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲಿಸಿದ್ದಾರೆ.
ಇದರ ಜೊತೆಗೆ ಮುಂಜೆ ಕುಟುಂಬದವರು ಸಂಪರ್ಕ ಹೊಂದಿದ್ದಾರೆ ಎನ್ನಲಾದ ಶ್ರೀ ನಾಗಲಿಂಗೇಶ್ವರ ಅರ್ಬನ್ ಕೋ-ಆಪರೇಟಿವ್ ಕ್ರೆಡಿಟ್ ಸೊಸೈಟಿ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದ್ದಾರೆ. ಆಸ್ತಿ ಹಾಗೂ ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ ಎಂದು ವರದಿಯಾಗಿದೆ.
ಸುರೇಶ ಮುಂಜೆ ವಿರುದ್ಧ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಕುರಿತು ಬಂದ ದೂರು ಮತ್ತು ಮಾಹಿತಿಯ ಆಧಾರದಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ವರದಿಗಳು ತಿಳಿಸಿವೆ. ಶೋಧದ ವೇಳೆ ಬ್ಯಾಂಕ್ ದಾಖಲೆಗಳು ಹಾಗೂ ಆಸ್ತಿಗೆ ಸಂಬಂಧಿಸಿದ ದಾಖಲೆಗಳನ್ನೂ ಪರಿಶೀಲಿಸಲಾಗಿದೆ.