LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಹುಬ್ಬಳ್ಳಿಯಲ್ಲಿ ರೈತರ ಬೃಹತ್ ಪ್ರತಿಭಟನೆ: ಜೋಶಿ ನಿವಾಸದ ಎದುರು ಧರಣಿ

ಹುಬ್ಬಳ್ಳಿ, ಸೆ. 29 : (ಸಮದರ್ಶಿ ಸುದ್ದಿ) - ಕಬ್ಬಿಗೆ ಪ್ರತಿ ಟನ್‌ಗೆ ₹5,500 ದರ ನಿಗದಿಪಡಿಸಬೇಕು, ನ್ಯಾಯಯುತ ಮತ್ತು ಲಾಭದಾಯಕ ಬೆಲೆ (ಎಫ್‌ಆರ್‌ಪಿ) ಪರಿಷ್ಕರಿಸಬೇಕು ಹಾಗೂ ಸ್ವಾಮಿನಾಥನ್ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ನೇತೃತ್ವದಲ್ಲಿ ಸಾವಿರಾರು ಕಬ್ಬು ಬೆಳೆಗಾರರು ಮಂಗಳವಾರ ಹುಬ್ಬಳ್ಳಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ನಗರದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಜಮಾಯಿಸಿದ ರೈತರು ತಮ್ಮ ಬೇಡಿಕೆಗಳ ಈಡೇರಿಕೆಗೆ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಕರ್ನಾಟಕದ ವಿವಿಧ ಜಿಲ್ಲೆಗಳ ಜತೆಗೆ ಮಹಾರಾಷ್ಟ್ರ ಸೇರಿದಂತೆ ನೆರೆಯ ರಾಜ್ಯಗಳಿಂದಲೂ ಕಬ್ಬು ಬೆಳೆಗಾರರು ಆಗಮಿಸಿದ್ದರು. ಮಹಾರಾಷ್ಟ್ರದ ರೈತ ಮುಖಂಡ ರಾಜು ಶೆಟ್ಟಿ ನೇತೃತ್ವದ ಶೆಟ್ಕರಿ ಸಂಘಟನೆಯ ಸದಸ್ಯರೂ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

2026-27ನೇ ಸಾಲಿನ ಕಬ್ಬು ನುರಿಸುವ ಹಂಗಾಮಿಗೆ ಪ್ರತಿ ಟನ್ ಕಬ್ಬಿಗೆ ₹5,500 ದರ ನಿಗದಿಪಡಿಸಬೇಕು ಎಂಬುದು ರೈತರ ಪ್ರಮುಖ ಬೇಡಿಕೆಯಾಗಿದೆ. ಕೃಷಿ ಉತ್ಪಾದನಾ ವೆಚ್ಚ ನಿರಂತರವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಬ್ಬಿನ ದರವನ್ನು ಅದಕ್ಕೆ ಅನುಗುಣವಾಗಿ ಪರಿಷ್ಕರಿಸಬೇಕು. ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕವಾಗಿ ಬೆಲೆ ನಿಗದಿಪಡಿಸಬೇಕು ಹಾಗೂ ದೀರ್ಘಕಾಲದಿಂದ ಬಾಕಿ ಇರುವ ಮಹದಾಯಿ ಯೋಜನೆಯನ್ನು ಅನುಷ್ಠಾನಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ರೈತರ ಹೋರಾಟದ ಹಿನ್ನೆಲೆಯಲ್ಲಿ ಕೇಂದ್ರ ಆಹಾರ ಮತ್ತು ಸಾರ್ವಜನಿಕ ವಿತರಣೆ ಸಚಿವ ಪ್ರಲ್ಹಾದ ಜೋಶಿ ಅವರು ರೈತ ಮುಖಂಡರನ್ನು ದೆಹಲಿಗೆ ಬಂದು ಮಾತುಕತೆ ನಡೆಸುವಂತೆ ಆಹ್ವಾನಿಸಿದ್ದರು. ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಮಸ್ಯೆಗಳನ್ನು ಆಲಿಸಿ ಪರಿಹಾರ ಕಂಡುಕೊಳ್ಳಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಅವರು ವಿಡಿಯೊ ಸಂದೇಶದಲ್ಲಿ ತಿಳಿಸಿದ್ದರು.

ಆದರೆ, ದೆಹಲಿಗೆ ಬರುವ ಆಹ್ವಾನವನ್ನು ಪ್ರತಿಭಟನಾಕಾರರು ತಿರಸ್ಕರಿಸಿದರು. ಸಚಿವರೇ ಪ್ರತಿಭಟನಾ ಸ್ಥಳಕ್ಕೆ ಬಂದು ರೈತರ ಸಮಸ್ಯೆಗಳನ್ನು ಆಲಿಸಬೇಕು ಎಂದು ರೈತ ಮುಖಂಡ ಶಶಿಕಾಂತ ಗುರೂಜಿ ಒತ್ತಾಯಿಸಿದರು. ಬೇಡಿಕೆಗಳಿಗೆ ಸ್ಪಂದಿಸುವವರೆಗೂ ಹೋರಾಟ ಮುಂದುವರಿಸುವುದಾಗಿ ಅವರು ತಿಳಿಸಿದರು.

ಕಬ್ಬಿನ ಉತ್ಪಾದನಾ ವೆಚ್ಚ ಹೆಚ್ಚುತ್ತಿರುವುದರಿಂದ ಈಗಿನ ದರ ರೈತರಿಗೆ ಸಾಕಾಗುತ್ತಿಲ್ಲ ಎಂದು ರೈತ ಮುಖಂಡರು ಪ್ರತಿಪಾದಿಸಿದರು. ಕಬ್ಬಿನ ಎಫ್‌ಆರ್‌ಪಿ ಹೆಚ್ಚಿಸುವುದರ ಜತೆಗೆ ಸಕ್ಕರೆಯ ಕನಿಷ್ಠ ಮಾರಾಟ ಬೆಲೆಯನ್ನೂ ಪರಿಷ್ಕರಿಸಬೇಕು. ಎಥೆನಾಲ್ ಖರೀದಿಯಲ್ಲಿ ಕರ್ನಾಟಕದ ಉತ್ಪಾದಕರಿಗೆ ಹೆಚ್ಚಿನ ಅವಕಾಶ ಕಲ್ಪಿಸಬೇಕು ಎಂಬ ಬೇಡಿಕೆಯನ್ನೂ ಮುಂದಿಟ್ಟರು.

ರಾಣಿ ಚೆನ್ನಮ್ಮ ವೃತ್ತದಿಂದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ನಿವಾಸದತ್ತ ರೈತರು ಮೆರವಣಿಗೆ ನಡೆಸಿದರು. ಪ್ರತಿಭಟನೆಯ ಹಿನ್ನೆಲೆಯಲ್ಲಿ ಜೋಶಿ ಅವರ ಕೇಶ್ವಾಪುರ ನಿವಾಸ ಹಾಗೂ ಕಚೇರಿ ಸುತ್ತ ಪೊಲೀಸರು ಬ್ಯಾರಿಕೇಡ್‌ಗಳನ್ನು ಅಳವಡಿಸಿ ಬಿಗಿ ಭದ್ರತೆ ಕೈಗೊಂಡಿದ್ದರು. 250ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಹಾಗೂ ಸಶಸ್ತ್ರ ಪಡೆಗಳನ್ನು ನಿಯೋಜಿಸಲಾಗಿತ್ತು.

ಮಹಾರಾಷ್ಟ್ರ ಮತ್ತು ಕರ್ನಾಟಕದ ರೈತ ಸಂಘಟನೆಗಳ ಮುಖಂಡರು ಜೋಶಿ ಅವರ ನಿವಾಸದ ಎದುರು ಧರಣಿ ಆರಂಭಿಸಿದ್ದು, ತಮ್ಮ ಬೇಡಿಕೆಗಳು ಈಡೇರುವವರೆಗೆ ಹೋರಾಟ ಮುಂದುವರಿಸುವುದಾಗಿ ಎಚ್ಚರಿಸಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST