ಬೆಂಗಳೂರು, ಮೇ 18 : ಕೆಎಸ್ಸಾರ್ಟಿಸಿ, ಬಿಎಂಟಿಸಿ ಸೇರಿದಂತೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರು ಕರೆ ನೀಡಿರುವ ಮೇ 20ರ ಅನಿರ್ದಿಷ್ಟಾವಧಿ ಮುಷ್ಕರ ಯಾವುದೇ ಕಾರಣಕ್ಕೂ ಹಿಂಪಡೆಯುವುದಿಲ್ಲ ಎಂದು ಕೆಎಸ್ಸಾರ್ಟಿಸಿ ಸ್ಟಾಫ್ ಆಂಡ್ ವರ್ಕರ್ಸ್ ಫೆಡರೇಷನ್ ಸ್ಪಷ್ಟಪಡಿಸಿದೆ.
ಸಾರಿಗೆ ನೌಕರರ 26 ತಿಂಗಳ ವೇತನ ಬಾಕಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮುಷ್ಕರಕ್ಕೆ ಕರೆ ನೀಡಲಾಗಿದ್ದು, ಬಾಕಿ ವೇತನವಾಗಿ ₹1,272 ಕೋಟಿ ಬಿಡುಗಡೆ ಮಾಡಬೇಕು ಎಂದು ನೌಕರರು ಒತ್ತಾಯಿಸಿದ್ದಾರೆ.
ಈ ಸಂಬಂಧ ಸೋಮವಾರ ಕಾರ್ಮಿಕ ಇಲಾಖೆ ಆಯುಕ್ತರ ಕಚೇರಿಯಲ್ಲಿ ಸಂಧಾನ ಸಭೆ ನಡೆದರೂ ಯಾವುದೇ ಫಲಿತಾಂಶ ದೊರಕಲಿಲ್ಲ. ಸರಕಾರದ ಮನವೊಲಿಕೆ ಪ್ರಯತ್ನಗಳನ್ನು ನೌಕರರು ತಿರಸ್ಕರಿಸಿದ್ದು, ಮುಖ್ಯಮಂತ್ರಿ ಅಥವಾ ಸಾರಿಗೆ ಸಚಿವರ ನೇತೃತ್ವದಲ್ಲಿ ಸಭೆ ನಡೆಸಿ ಲಿಖಿತ ಭರವಸೆ ನೀಡಿದರೆ ಮಾತ್ರ ಮುಷ್ಕರ ಹಿಂಪಡೆಯಲಾಗುವುದು ಎಂದು ನೌಕರರ ಸಂಘಟನೆಗಳು ತಿಳಿಸಿವೆ.
ಈ ಕುರಿತು ಪ್ರತಿಕ್ರಿಯಿಸಿದ ಕೆಎಸ್ಸಾರ್ಟಿಸಿ ಸ್ಟಾಫ್ ಆಂಡ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷೆ ಜ್ಯೋತಿ ಅನಂತ ಸುಬ್ಬರಾವ್, ಸರಕಾರ ಮುಷ್ಕರವನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿರುವುದು ಸರಿಯಲ್ಲ ಎಂದು ಆಕ್ಷೇಪಿಸಿದರು. ಕಾರ್ಮಿಕರನ್ನು ಒತ್ತಡಕ್ಕೆ ಒಳಪಡಿಸಿ ಶೇ.12.5ರಷ್ಟು ವೇತನ ಹೆಚ್ಚಳಕ್ಕೆ ಒಪ್ಪಿಗೆ ಇದೆ ಎಂದು ಬಲವಂತವಾಗಿ ಹೇಳಿಕೆ ಬರೆಸಿಕೊಳ್ಳಲಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ ಎಂದು ಹೇಳಿದರು.
ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಬಗ್ಗೆ ಮಾತನಾಡುವ ಕಾಂಗ್ರೆಸ್ ಸರಕಾರ ಸಾರಿಗೆ ನೌಕರರ ವೇತನ ಮತ್ತು ಸೌಲಭ್ಯಗಳ ವಿಷಯದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ಟೀಕಿಸಿದ ಅವರು, ನೌಕರರಿಗೆ ನ್ಯಾಯಯುತವಾಗಿ ಬಾಕಿ ವೇತನ ಹಾಗೂ ಇತರ ಸೌಲಭ್ಯಗಳನ್ನು ನೀಡುವವರೆಗೆ ಹೋರಾಟ ಮುಂದುವರಿಯಲಿದೆ ಎಂದು ಎಚ್ಚರಿಸಿದರು.
ಇದರ ನಡುವೆ, ಮುಷ್ಕರದಲ್ಲಿ ಭಾಗವಹಿಸುವ ನೌಕರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಕೆಎಸ್ಸಾರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷ ತಿಳಿಸಿದ್ದಾರೆ. ಮೇ 20ರಂದು ಕರ್ತವ್ಯಕ್ಕೆ ಗೈರುಹಾಜರಾಗುವ ನೌಕರರಿಗೆ ಕೆಲಸ ಮಾಡದಿದ್ದಾಗ ವೇತನವಿಲ್ಲ ಎಂಬ ನಿಯಮದಡಿ ವೇತನ ಕಡಿತಗೊಳಿಸಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.
ಈ ಕುರಿತು ಸುತ್ತೋಲೆ ಹೊರಡಿಸಿರುವ ಅವರು, ಕರ್ನಾಟಕ ಅಗತ್ಯ ಸೇವಾ ನಿರ್ವಹಣಾ ಕಾಯ್ದೆ-2013ರ ಪ್ರಕಾರ ರಸ್ತೆ ಸಾರಿಗೆ ನಿಗಮಗಳ ನೌಕರರು ಮುಷ್ಕರ ನಡೆಸುವಂತಿಲ್ಲ ಎಂದು ತಿಳಿಸಿದ್ದಾರೆ. ಅಲ್ಲದೇ, ಈ ವಿಚಾರ ಸದ್ಯ ಕಾರ್ಮಿಕ ಆಯುಕ್ತರ ಮುಂದೆ ರಾಜೀ ಸಂಧಾನ ಹಂತದಲ್ಲಿರುವುದರಿಂದ ಕೈಗಾರಿಕಾ ವಿವಾದಗಳ ಕಾಯ್ದೆಯ ಅನ್ವಯ ಮುಷ್ಕರ ಕಾನೂನುಬಾಹಿರವಾಗುತ್ತದೆ ಎಂದು ಹೇಳಿದ್ದಾರೆ.
ರಾಜ್ಯದ ಜನರಿಗೆ ತೊಂದರೆಯಾಗದಂತೆ ಮೇ 20ರಿಂದ ಸಾರಿಗೆ ಸೇವೆಗಳಲ್ಲಿ ವ್ಯತ್ಯಯವಾಗದಂತೆ ಎಲ್ಲಾ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅನಿವಾರ್ಯ ಸಂದರ್ಭಗಳನ್ನು ಹೊರತುಪಡಿಸಿ ಯಾವುದೇ ರಜೆ ಮಂಜೂರು ಮಾಡಬಾರದು ಎಂದೂ ಸೂಚಿಸಲಾಗಿದೆ.
ಮುಷ್ಕರದ ಅವಧಿಯಲ್ಲಿ ಕರ್ತವ್ಯಕ್ಕೆ ಗೈರುಹಾಜರಾಗುವ ನೌಕರರ ಘಟಕವಾರು ಹಾಗೂ ವರ್ಗವಾರು ಪಟ್ಟಿಯನ್ನು ಸಿದ್ಧಪಡಿಸಿ, ಅವರ ವಿರುದ್ಧ ಶಿಸ್ತಿನ ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.
ಇದೇ ವೇಳೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ನೌಕರರ ಸಂಘವು ಜಂಟಿ ಕ್ರಿಯಾ ಸಮಿತಿಯಿಂದ ಹೊರಬರುತ್ತಿರುವುದಾಗಿ ಘೋಷಿಸಿದೆ. ಜಂಟಿ ಕ್ರಿಯಾ ಸಮಿತಿ ಕರೆ ನೀಡಿರುವ ಮುಷ್ಕರದಲ್ಲಿ ತಮ್ಮ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಭಾಗವಹಿಸುವುದಿಲ್ಲ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ವೆಂಕಟರವಣಪ್ಪ ತಿಳಿಸಿದ್ದಾರೆ.