ಬೆಂಗಳೂರು, ಮೇ 10 : ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ ಅವರು ರವಿವಾರ ಬೆಳಗಿನಜಾವ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಕಿಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು.
66 ವರ್ಷದ ಸುಧಾಕರ್ ಅವರು ಕಳೆದ ಒಂದು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಕಿಮ್ಸ್ ಆಸ್ಪತ್ರೆಯ ತುರ್ತುನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬೆಳಿಗ್ಗೆ 3:15ರ ಸುಮಾರಿಗೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಮೊಣಕಾಲು ಸಂಬಂಧಿತ ಶಸ್ತ್ರಚಿಕಿತ್ಸೆಗಾಗಿ ಅವರು ಮೊದಲು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಶಸ್ತ್ರಚಿಕಿತ್ಸೆಯ ಬಳಿಕ ಶ್ವಾಸಕೋಶದ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಎಲೆಕ್ಟ್ರಾನಿಕ್ ಸಿಟಿಯ ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಅಲ್ಲಿ ತುರ್ತುನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಲಾಗುತ್ತಿತ್ತು.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಮೂಲದ ಡಿ. ಸುಧಾಕರ್ ಅವರು 1961ರ ಮಾರ್ಚ್ 28ರಂದು ಎನ್. ದಶರಥಯ್ಯ ಮತ್ತು ಕಾಂಚನಮಾಲಮ್ಮ ದಂಪತಿಯ ಪುತ್ರರಾಗಿ ಜನಿಸಿದ್ದರು.
ಚಳ್ಳಕೆರೆ ಪಟ್ಟಣದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಪೂರ್ಣಗೊಳಿಸಿದ ಅವರು, ಶಿವಮೊಗ್ಗದ ನ್ಯಾಷನಲ್ ಕಾಲೇಜಿನಲ್ಲಿ ಬಿ.ಕಾಂ ಪದವಿ ಪಡೆದಿದ್ದರು.
ತಂದೆಯಿಂದ ಬಂದ ಕೃಷಿ ಹಾಗೂ ಮದ್ಯ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದ ಸುಧಾಕರ್ ಅವರು ಬಳಿಕ ರಾಜಕೀಯ ಕ್ಷೇತ್ರಕ್ಕೆ ಪ್ರವೇಶಿಸಿದ್ದರು. ಮಾಜಿ ಶಾಸಕ ಎನ್. ಜಯಣ್ಣ ಅವರ ಮಾರ್ಗದರ್ಶನದಲ್ಲಿ ರಾಜಕೀಯ ಪಾಠ ಕಲಿತ ಅವರು ಹಂತ ಹಂತವಾಗಿ ಬೆಳೆಯುತ್ತ ಚಿತ್ರದುರ್ಗ ಜಿಲ್ಲೆಯ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದರು. ಪ್ರಸ್ತುತ ಅವರು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು.
ಮೃತ ಸಚಿವರು ಪತ್ನಿ ಹರ್ಷಿಣಿ, ಪುತ್ರ ಸುಹಾಸ್, ಪುತ್ರಿ ಸ್ಫೂರ್ತಿ ಸೇರಿದಂತೆ ಅಪಾರ ಬಂಧುಮಿತ್ರರು, ಅಭಿಮಾನಿಗಳು ಹಾಗೂ ಪಕ್ಷದ ಕಾರ್ಯಕರ್ತರನ್ನು ಅಗಲಿದ್ದಾರೆ.