ಬನಾಸಕಾಂಠ (ಗುಜರಾತ್), ಅ. 30: ಗುಜರಾತ್‌ನ ಬನಾಸಕಾಂಠ ಜಿಲ್ಲೆಯ ಭೀಲ್ಡಿಯಲ್ಲಿ ಭಾರತೀಯ ತಳಿ ಸಂವರ್ಧನೆ ಮತ್ತು ಸಂಶೋಧನಾ ಕೇಂದ್ರವನ್ನು ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ, ₹14,000 ಕೋಟಿ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ರೈತರ ಕಲ್ಯಾಣಕ್ಕೆ ತಮ್ಮ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಮೋದಿ, ‘ನನ್ನ ಕೊನೆಯ ಉಸಿರಿರುವವರೆಗೂ ದೇಶದ ಜನರ ಸೇವೆ ಮಾಡುತ್ತೇನೆ. ರೈತರ ಕಲ್ಯಾಣ ಹಾಗೂ ದೇಶದ ಅಭಿವೃದ್ಧಿಯೇ ನಮ್ಮ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ’ ಎಂದು ಹೇಳಿದರು.
ಈ ಸಂದರ್ಭದಲ್ಲಿ ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಅವರು, ‘ದೇಶ ಸಂಕಷ್ಟಕ್ಕೆ ಸಿಲುಕಿದಾಗಲೂ ಸಂಭ್ರಮಿಸುವ ಕೆಲವರು ನಮ್ಮಲ್ಲಿದ್ದಾರೆ. ನನ್ನ ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಉದ್ದೇಶದಿಂದ ಇರಾನ್ ಯುದ್ಧದ ಸಂದರ್ಭದಲ್ಲಿ ದೇಶದಲ್ಲಿ ರಸಗೊಬ್ಬರ ಹಾಗೂ ಅಡುಗೆ ಅನಿಲದ ತೀವ್ರ ಅಭಾವ ಉಂಟಾಗಲಿದೆ ಎಂಬ ಸುಳ್ಳು ವದಂತಿಗಳನ್ನು ಹಬ್ಬಿಸಲಾಗಿತ್ತು’ ಎಂದು ಆರೋಪಿಸಿದರು.
‘ಜಾಗತಿಕ ಮಟ್ಟದಲ್ಲಿ ಅನಿಶ್ಚಿತತೆ ಹೆಚ್ಚಾಗಿದ್ದರೂ ನಮ್ಮ ಸರ್ಕಾರ ದೇಶದ ಜನರ ಹಿತಾಸಕ್ತಿಗಳನ್ನು ಕಾಪಾಡಲು ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ವಿಶೇಷವಾಗಿ ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಆದ್ಯತೆ ನೀಡಲಾಗಿದೆ’ ಎಂದು ತಿಳಿಸಿದರು.
‘ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ರಸಗೊಬ್ಬರಗಳ ಬೆಲೆ ಗಣನೀಯವಾಗಿ ಏರಿಕೆಯಾಗಿದ್ದರೂ ಅದರ ಆರ್ಥಿಕ ಹೊರೆಯನ್ನು ರೈತರ ಮೇಲೆ ಬೀಳಲು ಬಿಡಲಿಲ್ಲ. ರೈತರಿಗೆ ಕೈಗೆಟುಕುವ ದರದಲ್ಲಿ ರಸಗೊಬ್ಬರ ದೊರೆಯುವಂತೆ ಸರ್ಕಾರ ಕ್ರಮ ಕೈಗೊಂಡಿದೆ’ ಎಂದು ಹೇಳಿದರು.
‘ರೈತರ ಕಲ್ಯಾಣ ಮತ್ತು ಆರ್ಥಿಕ ಸಬಲೀಕರಣಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ದೇಶದ ಸಣ್ಣ ಹಾಗೂ ಅತಿಸಣ್ಣ ರೈತರಿಗೆ ಈವರೆಗೆ ₹4.5 ಲಕ್ಷ ಕೋಟಿ ಆರ್ಥಿಕ ನೆರವು ಒದಗಿಸಲಾಗಿದೆ. ಕೃಷಿ ಕ್ಷೇತ್ರದ ಅಭಿವೃದ್ಧಿ ಮತ್ತು ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸಲು ನಿರಂತರ ಪ್ರಯತ್ನಿಸಲಾಗುತ್ತಿದೆ’ ಎಂದು ಮೋದಿ ವಿವರಿಸಿದರು.
ದೇಶದ ಅಭಿವೃದ್ಧಿಯಲ್ಲಿ ರೈತರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಕೃಷಿ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸುವ ಮೂಲಕ ರೈತರ ಆದಾಯ ಹಾಗೂ ಜೀವನಮಟ್ಟ ಸುಧಾರಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ಪ್ರಧಾನಿ ಹೇಳಿದರು.