ಮಂಗಳೂರು, ನ. 23: ರಾಜ್ಯದಲ್ಲಿ ಪ್ಯಾಕೇಜ್ಡ್ ಕುಡಿಯುವ ನೀರಿನ ಗುಣಮಟ್ಟ ಮತ್ತು ಉತ್ಪಾದನಾ ಘಟಕಗಳ ಕಾರ್ಯನಿರ್ವಹಣೆ ಪರಿಶೀಲಿಸಲು ಆರೋಗ್ಯ ಇಲಾಖೆ ವಿಶೇಷ ತಪಾಸಣಾ ಅಭಿಯಾನ ಆರಂಭಿಸಿದ್ದು, 112 ಘಟಕಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಶೀಲನೆಗೆ ಒಳಪಟ್ಟ ಘಟಕಗಳ ಪೈಕಿ 60 ಘಟಕಗಳಿಂದ ಕುಡಿಯುವ ನೀರಿನ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಗಳಿಗೆ ಕಳುಹಿಸಲಾಗಿದೆ. ಪರೀಕ್ಷಾ ವರದಿಗಳು ಬಂದ ನಂತರ ನಿಯಮ ಉಲ್ಲಂಘಿಸಿರುವ ಘಟಕಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ದೆಹಲಿಯಲ್ಲಿ ‘ಬಿಸ್ಲೇರಿ’ ಬ್ರಾಂಡ್ ವಿರುದ್ಧ ನಡೆದ ದಾಳಿಯ ವರದಿಗಳ ಕುರಿತು ಪ್ರತಿಕ್ರಿಯಿಸಿದ ಸಚಿವರು, ಕರ್ನಾಟಕದಲ್ಲಿನ ಪರಿಸ್ಥಿತಿಯ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆಯುವುದಾಗಿ ತಿಳಿಸಿದರು.
ರಾಜ್ಯದಲ್ಲಿ ಉತ್ಪಾದನೆಯಾಗುವ ಪ್ಯಾಕೇಜ್ಡ್ ಕುಡಿಯುವ ನೀರಿನ ಜತೆಗೆ ಇತರ ರಾಜ್ಯಗಳಿಂದ ಕರ್ನಾಟಕಕ್ಕೆ ಸರಬರಾಜಾಗುವ ನೀರಿನ ಗುಣಮಟ್ಟವನ್ನೂ ಪರೀಕ್ಷಿಸಲಾಗುವುದು. ನಿಗದಿತ ಸುರಕ್ಷತಾ ಮಾನದಂಡಗಳನ್ನು ಪಾಲಿಸದ ಕಂಪನಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಸರ್ಕಾರ ಆದ್ಯತೆ ನೀಡಿದ್ದು, ಕುಡಿಯುವ ನೀರಿನ ಗುಣಮಟ್ಟದ ವಿಷಯದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಖಾದರ್ ಸ್ಪಷ್ಟಪಡಿಸಿದರು.