ಬೆಳಗಾವಿ, ನ. 11: ಬೆಳಗಾವಿ ನಗರದ ಅಭಿವೃದ್ಧಿ ಕಾಮಗಾರಿಗಳಿಗೆ ಕಳೆದ ಮೂರು ವರ್ಷಗಳಿಂದ ರಾಜ್ಯ ಸರ್ಕಾರ ಸಮರ್ಪಕ ಅನುದಾನ ಬಿಡುಗಡೆ ಮಾಡುತ್ತಿಲ್ಲ. ಇದರಿಂದ ನಗರದ ಅಭಿವೃದ್ಧಿಗೆ ತೀವ್ರ ಹಿನ್ನಡೆಯಾಗಿದ್ದು, ಜನಸಾಮಾನ್ಯರು ತೊಂದರೆ ಅನುಭವಿಸುವಂತಾಗಿದೆ ಎಂದು ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಹಿಂದೆ ಪ್ರತಿ ವರ್ಷ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ನಡೆಯುವ ಸಂದರ್ಭದಲ್ಲಿ ನಗರದ ಅಭಿವೃದ್ಧಿಗಾಗಿ ₹15ರಿಂದ ₹20 ಕೋಟಿ ವಿಶೇಷ ಅನುದಾನ ನೀಡಲಾಗುತ್ತಿತ್ತು. ಆದರೆ ಕಳೆದ ಮೂರು ವರ್ಷಗಳಿಂದ ಯಾವುದೇ ಮಹತ್ವದ ಅನುದಾನ ಬಿಡುಗಡೆಯಾಗಿಲ್ಲ ಎಂದು ಆರೋಪಿಸಿದರು.
ನಗರದ ರಸ್ತೆಗಳ ದುರಸ್ತಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಜಿಲ್ಲಾಧಿಕಾರಿ ಹಾಗೂ ಮಹಾನಗರ ಪಾಲಿಕೆ ಆಯುಕ್ತರು ಸಮನ್ವಯದಿಂದ ಕಾರ್ಯನಿರ್ವಹಿಸಬೇಕಿದೆ. ಆದರೆ ರಸ್ತೆ ಅಭಿವೃದ್ಧಿಯ ಹೆಸರಿನಲ್ಲಿ ಕೇವಲ ತೇಪೆ ಹಾಕುವ ಕಾಮಗಾರಿಗಳಿಗೆ ಆದ್ಯತೆ ನೀಡಲಾಗುತ್ತಿದೆ. ಮಳೆ ಬಂದ ಎರಡೇ ದಿನಗಳಲ್ಲಿ ರಸ್ತೆಗಳಲ್ಲಿ ಮತ್ತೆ ಗುಂಡಿಗಳು ಕಾಣಿಸಿಕೊಳ್ಳುತ್ತಿವೆ. ಶಾಶ್ವತ ಪರಿಹಾರ ಕಲ್ಪಿಸುವ ಬದಲು ತಾತ್ಕಾಲಿಕ ದುರಸ್ತಿಗೆ ಹಣ ವ್ಯಯಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅಧಿವೇಶನದಲ್ಲಿ ಉತ್ತರ ಕರ್ನಾಟಕಕ್ಕೆ ಆದ್ಯತೆ ನೀಡಿ
ಡಿಸೆಂಬರ್ನಲ್ಲಿ ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಲ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳ ಚರ್ಚೆಗೆ ಹೆಚ್ಚಿನ ಸಮಯ ಮೀಸಲಿಡಬೇಕು. ಎಲ್ಲ ಶಾಸಕರು ಅಧಿವೇಶನದಲ್ಲಿ ಪೂರ್ಣ ಪ್ರಮಾಣದಲ್ಲಿ ಭಾಗವಹಿಸಿ ತಮ್ಮ ಕ್ಷೇತ್ರಗಳ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಮಂಡಿಸಬೇಕು ಎಂದು ಒತ್ತಾಯಿಸಿದರು.
ಕೇವಲ ಒಂದು ದಿನ ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತು ಚರ್ಚಿಸಿ, ಉಳಿದ ದಿನಗಳಲ್ಲಿ ಇತರ ವಿಷಯಗಳಿಗೆ ಆದ್ಯತೆ ನೀಡುವ ಪ್ರವೃತ್ತಿ ಬದಲಾಗಬೇಕು. ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ ಜನರ ನಿರೀಕ್ಷೆಗಳಿಗೆ ಅಧಿವೇಶನ ಸ್ಪಂದಿಸಬೇಕು ಎಂದು ಆಗ್ರಹಿಸಿದರು.
ಸ್ಮಾರ್ಟ್ಸಿಟಿ ಯೋಜನೆಯಡಿ ಕೈಗೊಂಡಿರುವ ಬಾಕಿ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಿ ಉದ್ಘಾಟನೆಗೆ ಸಿದ್ಧಪಡಿಸಬೇಕು. ಐಟಿ ಪಾರ್ಕ್, ಮೇಲ್ಸೇತುವೆ ಸೇರಿದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಯೋಗದಲ್ಲಿ ಅನುಷ್ಠಾನಗೊಳ್ಳಬೇಕಿರುವ ಯೋಜನೆಗಳಿಗೂ ವೇಗ ನೀಡಬೇಕು ಎಂದು ಹೇಳಿದರು.
ಮಹಾನಗರ ಪಾಲಿಕೆಗೆ ಸರ್ಕಾರದಿಂದ ಬರಬೇಕಾದ ಅನುದಾನ ಹಾಗೂ ವಿಶೇಷ ಅಭಿವೃದ್ಧಿ ಅನುದಾನವನ್ನು ತಕ್ಷಣ ಬಿಡುಗಡೆ ಮಾಡಬೇಕು. ಕೇಂದ್ರ ಸರ್ಕಾರದಿಂದ ದೊರೆಯಬೇಕಾದ ಹಣಕಾಸು ನೆರವು ಪಡೆಯಲು ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು. ಅಧಿಕಾರಿಗಳ ಕಾರ್ಯವೈಖರಿಯಲ್ಲೂ ಸುಧಾರಣೆಯಾಗಬೇಕು ಎಂದು ಅಭಯ ಪಾಟೀಲ ಆಗ್ರಹಿಸಿದರು.