ಬೆಳಗಾವಿ, ಜೂನ್ 5 : ನಿಶ್ಚಿತ ಠೇವಣಿಗಳಿಗೆ ಅಧಿಕ ಬಡ್ಡಿ ನೀಡುವ ಭರವಸೆ ನೀಡಿ ಸಾರ್ವಜನಿಕರಿಂದ ಹಣ ಸಂಗ್ರಹಿಸಿ ನಂತರ ಕಾನೂನು ಸಂಘರ್ಷಕ್ಕೆ ಸಿಲುಕಿರುವ ಶಿವಂ ಅಸೋಸಿಯೇಟ್ಸ್ ಪ್ರಕರಣದ ಬೆನ್ನಲ್ಲೇ ಬೆಳಗಾವಿಯಲ್ಲಿ ಮತ್ತೊಂದು ಹಣಕಾಸು ಸಂಸ್ಥೆ ವಿವಾದದ ಕೇಂದ್ರಬಿಂದುವಾಗಿದೆ. ಠೇವಣಿದಾರರಿಂದ ಸಂಗ್ರಹಿಸಿದ ಹಣವನ್ನು ಇತರ ವ್ಯವಹಾರಗಳಲ್ಲಿ ಹೂಡಿಕೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಭಾಗ್ಯನಗರದಲ್ಲಿರುವ ಆದಿತ್ಯರಾಜ್ ಕ್ಯಾಪಿಟಲ್ ಸಂಸ್ಥೆಯ ಕಚೇರಿಯ ಮೇಲೆ ಅಧಿಕಾರಿಗಳು ಗುರುವಾರ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದರು.
ಉಪವಿಭಾಗಾಧಿಕಾರಿ ಶರವಣ ನಾಯಕ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದು, ಸಂಸ್ಥೆಯ ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದ ದಾಖಲೆಗಳು, ಹೂಡಿಕೆ ವಿವರಗಳು ಹಾಗೂ ಠೇವಣಿ ಸಂಬಂಧಿತ ದಾಖಲೆಗಳನ್ನು ಪರಿಶೀಲಿಸಿದರು. ಕಾರ್ಯಾಚರಣೆಯ ವೇಳೆ ಟಿಳಕವಾಡಿ ಪೊಲೀಸ್ ಠಾಣೆಯ ಸಿಬ್ಬಂದಿ ಭದ್ರತೆ ಒದಗಿಸಿದರು.
ಆದಿತ್ಯರಾಜ್ ಕ್ಯಾಪಿಟಲ್ ಸಂಸ್ಥೆಯು ಸಾರ್ವಜನಿಕರಿಗೆ ಹೆಚ್ಚಿನ ಬಡ್ಡಿ ನೀಡುವ ಆಮಿಷವೊಡ್ಡಿ ದೊಡ್ಡ ಪ್ರಮಾಣದಲ್ಲಿ ಠೇವಣಿಗಳನ್ನು ಸಂಗ್ರಹಿಸಿದೆ ಎನ್ನಲಾಗಿದೆ. ಆದರೆ ಹೂಡಿಕೆದಾರರಿಗೆ ಯಾವುದೇ ಸಮರ್ಪಕ ಭದ್ರತೆ ಒದಗಿಸದೇ, ಸಂಗ್ರಹಿಸಿದ ಹಣವನ್ನು ಬೇರೆ ವ್ಯವಹಾರಗಳಲ್ಲಿ ಬಳಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಸಂಸ್ಥೆಯ ವಿರುದ್ಧ ಕರ್ನಾಟಕ ಹೂಡಿಕೆದಾರರ ಹಿತಾಸಕ್ತಿ ಸಂರಕ್ಷಣಾ ಕಾಯ್ದೆ ಹಾಗೂ ಬಡ್ಸ್ ಸೆಲ್ ಅಡಿಯಲ್ಲಿ ದೂರು ದಾಖಲಾಗಿತ್ತು.
ಸಂಸ್ಥೆಯಲ್ಲಿ ಹಣ ಹೂಡಿಕೆ ಮಾಡಿದ್ದ ಕೆಲವು ಠೇವಣಿದಾರರು, ಅವಧಿ ಪೂರ್ಣಗೊಂಡ ಬಳಿಕವೂ ಅಸಲು ಹಾಗೂ ಬಡ್ಡಿ ಹಣವನ್ನು ನಿಗದಿತ ದಿನಾಂಕದಂದು ಮರುಪಾವತಿಸಲಾಗಿಲ್ಲ ಎಂದು ಆರೋಪಿಸಿ ದೂರು ಸಲ್ಲಿಸಿದ್ದರು. ಈ ದೂರಿನ ಆಧಾರದ ಮೇಲೆ ಅಧಿಕಾರಿಗಳು ತನಿಖೆ ಆರಂಭಿಸಿದ್ದು, ಸಂಸ್ಥೆಯ ಹಣಕಾಸು ಚಟುವಟಿಕೆಗಳ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಮಹಾರಾಷ್ಟ್ರ ಮೂಲದ ಶಿವರಾಜ್ ಮಾನೆ ಎಂಬವರು ಈ ಸಂಸ್ಥೆಯ ಮಾಲೀಕರಾಗಿದ್ದು, ಬೆಳಗಾವಿಯ ಸ್ಥಳೀಯ ಯುವಕರನ್ನು ಉದ್ಯೋಗಕ್ಕೆ ನೇಮಿಸಿಕೊಂಡು ಸಂಸ್ಥೆಯ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಹೂಡಿಕೆದಾರರನ್ನು ಆಕರ್ಷಿಸಲು 1 ಲಕ್ಷ ರೂಪಾಯಿ ಠೇವಣಿಗೆ ತಿಂಗಳಿಗೆ 3,000 ರೂಪಾಯಿ ಬಡ್ಡಿ ನೀಡುವ ಭರವಸೆ ನೀಡಲಾಗುತ್ತಿತ್ತು ಎಂಬ ಆರೋಪವೂ ಕೇಳಿಬಂದಿದೆ.
ಇತ್ತೀಚಿನ ವರ್ಷಗಳಲ್ಲಿ ಹೆಚ್ಚಿನ ಲಾಭಾಂಶ ಮತ್ತು ಆಕರ್ಷಕ ಬಡ್ಡಿದರದ ಹೆಸರಿನಲ್ಲಿ ಸಾರ್ವಜನಿಕರಿಂದ ಹಣ ಸಂಗ್ರಹಿಸಿ ನಂತರ ವಿವಾದಕ್ಕೆ ಸಿಲುಕಿರುವ ಹಲವು ಸಂಸ್ಥೆಗಳ ಪ್ರಕರಣಗಳು ಬೆಳಕಿಗೆ ಬಂದಿವೆ. ಇದೇ ರೀತಿಯ ಆರೋಪಗಳು ಆದಿತ್ಯರಾಜ್ ಕ್ಯಾಪಿಟಲ್ ವಿರುದ್ಧವೂ ಕೇಳಿಬಂದಿರುವುದರಿಂದ ಹೂಡಿಕೆದಾರರಲ್ಲಿ ಆತಂಕ ಮನೆ ಮಾಡಿದೆ.
ದಾಳಿ ವೇಳೆ ವಶಪಡಿಸಿಕೊಂಡ ದಾಖಲೆಗಳು ಹಾಗೂ ಹಣಕಾಸು ವ್ಯವಹಾರಗಳ ಪರಿಶೀಲನೆಯ ನಂತರ ಸಂಸ್ಥೆಯ ವಿರುದ್ಧದ ಆರೋಪಗಳಲ್ಲಿ ಎಷ್ಟು ಸತ್ಯಾಂಶವಿದೆ ಎಂಬುದು ಸ್ಪಷ್ಟವಾಗಲಿದೆ. ತನಿಖೆ ಮುಂದುವರಿದಿದ್ದು, ಅಗತ್ಯವಿದ್ದರೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.