ಗೋಕಾಕ, ನ. 14: ತಾಲ್ಲೂಕಿನ ತವಗ ಗ್ರಾಮದ ಏಕಲವ್ಯ ಮಾದರಿ ವಸತಿ ಶಾಲೆಯ ವಿದ್ಯಾರ್ಥಿ ರಾಜೇಂದ್ರ ಸಿದ್ದಪ್ಪ ರಾವಳ ಅವರು 2025–26ನೇ ಸಾಲಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಪರೀಕ್ಷೆಯಲ್ಲಿ ಶೇ. 97.17 ಅಂಕ ಗಳಿಸಿ ದೇಶಕ್ಕೆ ಪ್ರಥಮ ಸ್ಥಾನ ಪಡೆದ ಸಾಧನೆಗಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಸನ್ಮಾನಿತರಾಗಿದ್ದಾರೆ.
ಹೊಸದಿಲ್ಲಿಯ ರಾಷ್ಟ್ರಪತಿ ಭವನದಲ್ಲಿ ಗುರುವಾರ ಜನಜಾತೀಯ ಗೌರವ ದಿವಸದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬುಡಕಟ್ಟು ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ಸಾಧಕರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ರಾಜೇಂದ್ರ ಅವರ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ರಾಷ್ಟ್ರಪತಿಗಳು ಸನ್ಮಾನಿಸಿದರು.
ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಜುವಲ್ ಓರಾಂ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ವಿದ್ಯಾರ್ಥಿಯ ಸಾಧನೆಗೆ ಶಾಲೆಯ ಪ್ರಾಂಶುಪಾಲ ಮಹೇಂದ್ರ ಸಿಂಗ್ ಹಾಗೂ ಶಿಕ್ಷಕ ವೃಂದದ ಮಾರ್ಗದರ್ಶನ ಕಾರಣವಾಗಿದೆ. ರಾಷ್ಟ್ರೀಯ ಮತ್ತು ಕರ್ನಾಟಕ ಬುಡಕಟ್ಟು ವಿದ್ಯಾರ್ಥಿಗಳ ಶಿಕ್ಷಣ ಸಂಸ್ಥೆಗಳು ಒದಗಿಸಿದ ಶೈಕ್ಷಣಿಕ ಅವಕಾಶಗಳಿಗೆ ಪ್ರಾಂಶುಪಾಲರು ಕೃತಜ್ಞತೆ ಸಲ್ಲಿಸಿದ್ದಾರೆ.