ಮುಂಬೈ, ಅ.15: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಾಲಿವುಡ್ ನಟ ಇಮ್ರಾನ್ ಖಾನ್ ಅವರಿಗೆ ಅಕ್ಟೋಬರ್ 28ರೊಳಗೆ ಭಾರತ ತೊರೆಯುವಂತೆ ಮುಂಬೈ ಪೊಲೀಸರು ‘ಲೀವ್ ಇಂಡಿಯಾ ನೋಟಿಸ್’ ಜಾರಿಗೊಳಿಸಿದ್ದಾರೆ ಎಂದು ವರದಿಯಾಗಿದೆ.
ಬಾಲಿವುಡ್ ನಟ ಆಮಿರ್ ಖಾನ್ ಅವರ ಸೋದರಳಿಯ ಇಮ್ರಾನ್ ಖಾನ್ ಅಮೆರಿಕದ ಪೌರತ್ವ ಹೊಂದಿದ್ದು, ಭಾರತದ ಸಾಗರೋತ್ತರ ನಾಗರಿಕ (ಒಸಿಐ) ಕಾರ್ಡ್ ಪಡೆದಿದ್ದಾರೆ. ವಿದೇಶಿ ಪೌರತ್ವ ಹೊಂದಿರುವವರು ರಾಜಕೀಯ ಪ್ರತಿಭಟನೆಗಳಲ್ಲಿ ಭಾಗವಹಿಸುವುದಕ್ಕೆ ಸಂಬಂಧಿಸಿದ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪದಡಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ರಾಜೀನಾಮೆಗೆ ಆಗ್ರಹಿಸಿ ಅಕ್ಟೋಬರ್ 10ರಂದು ಮುಂಬೈನ ಆಗಸ್ಟ್ ಕ್ರಾಂತಿ ಮೈದಾನದಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಬೆಂಬಲದೊಂದಿಗೆ ನಡೆದ ಪ್ರತಿಭಟನೆಯಲ್ಲಿ ಇಮ್ರಾನ್ ಖಾನ್ ಭಾಗವಹಿಸಿದ್ದರು. ಈ ವೇಳೆ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದರು.
ಭಾರತೀಯ ಮೂಲದವರಾಗಿದ್ದರೂ ಇಮ್ರಾನ್ ಖಾನ್ ಅಮೆರಿಕದ ಪೌರತ್ವ ಹೊಂದಿರುವುದರಿಂದ ವಲಸೆ ನಿಯಮಗಳು ಅವರಿಗೆ ಅನ್ವಯಿಸುತ್ತವೆ. ರಾಜಕೀಯ ಪ್ರತಿಭಟನೆಯಲ್ಲಿ ಪಾಲ್ಗೊಂಡಿರುವುದು ನಿಯಮಗಳ ಉಲ್ಲಂಘನೆಯಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ ಎನ್ನಲಾಗಿದೆ.
ಇಮ್ರಾನ್ ಖಾನ್ ಅವರಿಗೆ ನೀಡಿರುವ ನೋಟಿಸ್ನಲ್ಲಿ ಅಕ್ಟೋಬರ್ 28ರೊಳಗೆ ದೇಶ ತೊರೆಯುವಂತೆ ಸೂಚಿಸಲಾಗಿದೆ. ನಿಗದಿತ ಅವಧಿಯಲ್ಲಿ ಭಾರತ ತೊರೆಯದಿದ್ದರೆ ಮುಂದಿನ ಕಾನೂನು ಕ್ರಮ ಎದುರಿಸಬೇಕಾಗಬಹುದು.
ಭಾರತೀಯ ಪೌರತ್ವ ಪಡೆಯುವ ಪ್ರಕ್ರಿಯೆಯಲ್ಲಿರುವುದಾಗಿ ಇಮ್ರಾನ್ ಖಾನ್ ಈ ಹಿಂದೆ ಹೇಳಿಕೊಂಡಿದ್ದರು. ಆದರೆ, ಆ ಬಳಿಕ ಅವರಿಗೆ ಭಾರತದ ಪೌರತ್ವ ದೊರೆತಿರುವ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ ಎಂದು ಇಂಡಿಯಾ ಟುಡೇ ವರದಿ ಉಲ್ಲೇಖಿಸಿದೆ.
ಇಮ್ರಾನ್ ಖಾನ್ ಅವರನ್ನು ಕೂಡಲೇ ಗಡೀಪಾರು ಮಾಡಬೇಕೆಂದು ಬಿಜೆಪಿ ನಾಯಕ ಕಿರಿಟ್ ಸೋಮಯ್ಯ ಆಗ್ರಹಿಸಿದ್ದಾರೆ. ವಿದೇಶಿ ಪೌರತ್ವ ಹೊಂದಿರುವ ವ್ಯಕ್ತಿಗಳು ಭಾರತದಲ್ಲಿ ರಾಜಕೀಯ ಪ್ರತಿಭಟನೆಗಳಲ್ಲಿ ಭಾಗವಹಿಸುವುದು ಕಾನೂನುಬದ್ಧವೇ ಎಂಬುದನ್ನು ಪರಿಶೀಲಿಸುವಂತೆ ಅವರು ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.