LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Local News

ದೆಹಲಿಯಲ್ಲಿ ರಸ್ತೆ ಅಪಘಾತ: ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ ಸೇರಿ ಆರು ಮಂದಿಗೆ ಗಾಯ

ನವದೆಹಲಿ, 24: ದೆಹಲಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಸೇರಿದಂತೆ ಆರು ಮಂದಿ ಗಾಯಗೊಂಡಿದ್ದಾರೆ. ಭಾನುವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಶಾಸಕ ಅಭಯ ಪಾಟೀಲ ಹಾಗೂ ದೆಹಲಿಯ ಕಿರಾರಿ ವಿಧಾನಸಭಾ ಕ್ಷೇತ್ರದ ಶಾಸಕ ಅನಿಲ ಝಾ ಪ್ರಯಾಣಿಸುತ್ತಿದ್ದ ಇನ್ನೋವಾ ಕಾರಿಗೆ ಸ್ವಿಫ್ಟ್ ಕಾರೊಂದು ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಗಾಯಗೊಂಡ ಎಲ್ಲರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಗಂಭೀರ ಗಾಯಗಳಾಗಿಲ್ಲ. ಎಲ್ಲರ ಆರೋಗ್ಯ ಸ್ಥಿರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಾನುವಾರ ರಾತ್ರಿ ಸುಮಾರು 9.30ರ ವೇಳೆಗೆ ದೆಹಲಿಯ ಕೇಂದ್ರ ಭಾಗದಲ್ಲಿರುವ ಐ.ಪಿ. ಎಸ್ಟೇಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ. ಪಿಡಬ್ಲ್ಯೂಡಿ ಕಚೇರಿ ಸಮೀಪ ಈ ಘಟನೆ ನಡೆದಿದ್ದು, ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು.

ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, 32 ವರ್ಷದ ಅಶುತೋಷ ಪಾಂಡೆ ಅವರು ತಮ್ಮ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಸ್ವಿಫ್ಟ್ ಕಾರಿನಲ್ಲಿ ಲಕ್ಷ್ಮೀ ನಗರದಿಂದ ಐಟಿಒ ಕಡೆಗೆ ತೆರಳುತ್ತಿದ್ದರು. ಪಿಡಬ್ಲ್ಯೂಡಿ ಕಚೇರಿ ಸಮೀಪ ತಲುಪಿದಾಗ ಸ್ವಿಫ್ಟ್ ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಬಳಿಕ ಕಾರು ರೇಲಿಂಗ್ ದಾಟಿ ಎದುರಿನಿಂದ ಬರುತ್ತಿದ್ದ ಇನ್ನೋವಾ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆ ಸಮಯದಲ್ಲಿ ಇನ್ನೋವಾ ಕಾರಿನಲ್ಲಿ ಅಭಯ ಪಾಟೀಲ ಹಾಗೂ ದೆಹಲಿಯ ಅನಿಲ ಝಾ ಪ್ರಯಾಣಿಸುತ್ತಿದ್ದರು. ಸ್ವಿಫ್ಟ್ ಕಾರಿನಲ್ಲಿದ್ದ ಅಶುತೋಷ ಪಾಂಡೆ, ಅವರ ಪತ್ನಿ ಹಾಗೂ ಇಬ್ಬರು ಮಕ್ಕಳು ಮತ್ತು ಇನ್ನೋವಾ ಕಾರಿನಲ್ಲಿದ್ದ ಇಬ್ಬರು ಶಾಸಕರು ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಗಾಯಾಳುಗಳನ್ನು ವಾಹನಗಳಿಂದ ಹೊರತೆಗೆದು, ಹೆಚ್ಚಿನ ಚಿಕಿತ್ಸೆಗಾಗಿ ಲೋಕನಾಯಕ ಜೈ ಪ್ರಕಾಶ ಆಸ್ಪತ್ರೆಗೆ ದಾಖಲಿಸಿದರು.

ವೈದ್ಯಕೀಯ ತಪಾಸಣೆಯ ಬಳಿಕ ಗಾಯಗೊಂಡ ಎಲ್ಲರಿಗೂ ಸಣ್ಣಪುಟ್ಟ ಗಾಯಗಳಾಗಿರುವುದು ದೃಢಪಟ್ಟಿದೆ. ಯಾರಿಗೂ ಗಂಭೀರ ಸ್ವರೂಪದ ಗಾಯಗಳಾಗಿಲ್ಲ. ಸದ್ಯ ಎಲ್ಲ ಗಾಯಾಳುಗಳ ಆರೋಗ್ಯ ಸ್ಥಿರವಾಗಿದ್ದು, ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ರಸ್ತೆ ವಿಭಜಕಕ್ಕೆ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದ ಬಳಿಕ ನಿಯಂತ್ರಣ ಕಳೆದುಕೊಂಡು ಎದುರಿನಿಂದ ಬರುತ್ತಿದ್ದ ಇನ್ನೋವಾ ಕಾರಿಗೆ ಡಿಕ್ಕಿ ಹೊಡೆದಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST