ಹೊಸದಿಲ್ಲಿ, ಅ. 19: ಕುಖ್ಯಾತ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರನ್ನು ದೆಹಲಿ ಪೊಲೀಸ್ ಅಧಿಕಾರಿಯೊಬ್ಬರು ‘ಲಾರೆನ್ಸ್ ಬಿಷ್ಣೋಯ ಸಾಹೇಬ’ ಎಂದು ಸಂಬೋಧಿಸಿರುವ ಹಳೆಯ ವಿಡಿಯೊವನ್ನು ಹಂಚಿಕೊಂಡಿರುವ ಕಾಕ್ರೋಚ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ದೆಹಲಿ ಪೊಲೀಸರ ವರ್ತನೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ದೆಹಲಿ ಪೊಲೀಸ್ ಡಿಸಿಪಿಯ ಹಳೆಯ ವಿಡಿಯೊ ಹಂಚಿಕೊಂಡಿರುವ ಅವರು, ಗ್ಯಾಂಗ್‌ಸ್ಟರ್‌ಗಳಿಗೆ ನೀಡುವ ಗೌರವವನ್ನು ಶಾಂತಿಯುತವಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳು ಹಾಗೂ ಸಾಮಾಜಿಕ ಕಾರ್ಯಕರ್ತರಿಗೆ ಏಕೆ ನೀಡುವುದಿಲ್ಲ ಎಂದು ಪ್ರಶ್ನಿಸಿದ್ದಾರೆ.
ವಿಡಿಯೊದಲ್ಲಿ ಪೊಲೀಸ್ ಅಧಿಕಾರಿ ಲಾರೆನ್ಸ್ ಬಿಷ್ಣೋಯ್ ಅವರನ್ನು ‘ಸಾಹೇಬ್’ ಎಂದು ಸಂಬೋಧಿಸಿರುವುದು ಕೇಳಿಸುತ್ತದೆ. ಇದನ್ನು ಉಲ್ಲೇಖಿಸಿರುವ ದೀಪ್ಕೆ, ದೆಹಲಿ ಪೊಲೀಸರು ದರೋಡೆಕೋರರಿಗೆ ತೋರಿಸುವ ಗೌರವದ ಹತ್ತನೇ ಒಂದು ಭಾಗವನ್ನಾದರೂ ಪ್ರತಿಭಟನಾನಿರತ ವಿದ್ಯಾರ್ಥಿಗಳು ಮತ್ತು ಕಾರ್ಯಕರ್ತರಿಗೆ ತೋರಿಸಲಿ ಎಂದು ವ್ಯಂಗ್ಯವಾಡಿದ್ದಾರೆ.
ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ಅಭಿಜೀತ್ ದೀಪ್ಕೆ ಅವರನ್ನು ಪೊಲೀಸರು ಹಲವು ಬಾರಿ ವಶಕ್ಕೆ ಪಡೆದಿರುವ ಹಿನ್ನೆಲೆಯಲ್ಲಿ ಅವರ ಈ ಹೇಳಿಕೆ ಗಮನ ಸೆಳೆದಿದೆ.
ಇದೇ ವೇಳೆ, ಭಾನುವಾರ ಸಂಜೆ ಮುಂಬೈನಲ್ಲಿ ಬಾಲಿವುಡ್ ನಟ ಟೈಗರ್ ಶ್ರಾಫ್ ಅವರನ್ನು ಗುರಿಯಾಗಿಸಿಕೊಂಡು ನಡೆದ ಗುಂಡಿನ ದಾಳಿಯ ಹೊಣೆಯನ್ನು ಲಾರೆನ್ಸ್ ಬಿಷ್ಣೋಯ ಗ್ಯಾಂಗ್ ಹೊತ್ತುಕೊಂಡಿದೆ ಎಂದು ವರದಿಯಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಹರಿಯಾಣದ ರೆಹಾನ್ ಅಲಿಯಾಸ್ ಸುಕ್ಕಾ, ಬಿಹಾರದ ಹೃತಿಕ್ ಕುರ್ಮಿ ಅಲಿಯಾಸ್ ರೋಷನ್ ಹಾಗೂ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗುಂಡಿನ ದಾಳಿಯಲ್ಲಿ ಟೈಗರ್ ಶ್ರಾಫ್ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.