ಬೆಂಗಳೂರು, ನ. 20: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ರಹಸ್ಯ ಕಾರ್ಯಾಚರಣೆ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ನಾಯಕಿ ಕೃಪಾ ಆಳ್ವಾ ಹಾಗೂ ಖಾಸಗಿ ಸುದ್ದಿ ವಾಹಿನಿಯ ಮುಖ್ಯಸ್ಥ ರಾಕೇಶ ಶೆಟ್ಟಿ ಸೇರಿದಂತೆ ಆರು ಆರೋಪಿಗಳ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನಗರದ ಸಿವಿಲ್ ಮತ್ತು ಸೆಷನ್ಸ್ ಕೋರ್ಟ ಶುಕ್ರವಾರ ವಜಾಗೊಳಿಸಿದೆ.
ಪ್ರಕರಣದಲ್ಲಿ ಪೊಲೀಸ್ ವಿಚಾರಣೆ ಎದುರಿಸುತ್ತಿರುವ ಆರೋಪಿಗಳು ಬಂಧನದಿಂದ ರಕ್ಷಣೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ, ಅವರ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿರುವುದರಿಂದ ಬಂಧನದ ಸಾಧ್ಯತೆ ಎದುರಾಗಿದೆ.
ಕೃಪಾ ಆಳ್ವಾ, ರಾಕೇಶ ಶೆಟ್ಟಿ, ಜೆಡಿಎಸ್ ಸಾಮಾಜಿಕ ಜಾಲತಾಣ ಕಾರ್ಯಕರ್ತ ಪ್ರಜ್ವಲ್ ಪ್ರಸಾದ್, ಚಂದನ್ ಎಚ್.ಎಸ್., ಕೆ.ವಿ. ಪ್ರಶಾಂತ ಕುಮಾರ ಹಾಗೂ ವಿನೋದ ಕುಮಾರ ಅವರ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ ಎಂದು ವರದಿಯಾಗಿದೆ.
ಈ ಹಿನ್ನೆಲೆಯಲ್ಲಿ ಕೇಂದ್ರ ಅಪರಾಧ ವಿಭಾಗದ ಪೊಲೀಸರು ಆರೋಪಿಗಳನ್ನು ಬಂಧಿಸುವ ಸಾಧ್ಯತೆಯಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.
ಸಿಸಿಬಿ ಮುಂದೆ ಹಾಜರಾಗಿದ್ದ ಕೃಪಾ ಆಳ್ವಾ
ಸಿದ್ದರಾಮಯ್ಯ ವಿರುದ್ಧ ನಡೆದಿರುವುದಾಗಿ ಹೇಳಲಾದ ರಹಸ್ಯ ಕಾರ್ಯಾಚರಣೆ ಪ್ರಕರಣದಲ್ಲಿ ಕೃಪಾ ಆಳ್ವಾ ಅವರ ಹೆಸರು ಪ್ರಮುಖವಾಗಿ ಕೇಳಿಬಂದಿತ್ತು. ಸಿದ್ದರಾಮಯ್ಯ ಅವರೇ ಬಹಿರಂಗವಾಗಿ ಕೃಪಾ ಆಳ್ವಾ ಹೆಸರು ಪ್ರಸ್ತಾಪಿಸಿದ್ದರು.
ಇದರ ಬೆನ್ನಲ್ಲೇ ಕೃಪಾ ಆಳ್ವಾ ಕೇಂದ್ರ ಅಪರಾಧ ವಿಭಾಗದ ಪೊಲೀಸರ ಮುಂದೆ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸಿದ್ದರು.
ಪ್ರಕರಣದಲ್ಲಿ ಕೃಪಾ ಆಳ್ವಾ ಅವರೊಂದಿಗೆ ಸಂಪರ್ಕ ಹೊಂದಿದ್ದಾರೆ ಎನ್ನಲಾದ ಖಾಸಗಿ ಸುದ್ದಿ ವಾಹಿನಿಯ ಮುಖ್ಯಸ್ಥ ರಾಕೇಶ ಶೆಟ್ಟಿ ಕೂಡ ಬಂಧನದ ಭೀತಿಯಿಂದ ನಿರೀಕ್ಷಣಾ ಜಾಮೀನು ಕೋರಿದ್ದರು.
ಇದೀಗ ಆರು ಆರೋಪಿಗಳ ಅರ್ಜಿಗಳು ವಜಾಗೊಂಡಿರುವುದರಿಂದ ತನಿಖೆಯ ಮುಂದಿನ ಕ್ರಮಗಳ ಬಗ್ಗೆ ಕುತೂಹಲ ಮೂಡಿದೆ.