ಬೆಳಗಾವಿ, ಜುಲೈ 23: ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳನ್ನು ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆಗೆ ಆಗ್ರಹಿಸಿ ‘ಯೂಥ್ ಆಫ್ ಬೆಳಗಾವಿ’ ಸಂಘಟನೆಯ ನೇತೃತ್ವದಲ್ಲಿ ಗುರುವಾರ ನಗರದ ರಾಣಿ ಚನ್ನಮ್ಮ ವೃತ್ತದಲ್ಲಿ ವಿದ್ಯಾರ್ಥಿಗಳು ಹಾಗೂ ಯುವಕರು ಪ್ರತಿಭಟನೆ ನಡೆಸಿದರು.
ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದ ಪ್ರತಿಭಟನಾಕಾರರು ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಿಂದ ಹಾನಿಗೊಳಗಾದ ವಿದ್ಯಾರ್ಥಿಗಳಿಗೆ ನ್ಯಾಯ ದೊರಕಿಸಬೇಕು ಹಾಗೂ ಹೊಸದಿಲ್ಲಿಯಲ್ಲಿ ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ಬಲಪ್ರಯೋಗದ ಬಗ್ಗೆ ಪ್ರಧಾನಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.
ರಾಣಿ ಚನ್ನಮ್ಮ ವೃತ್ತದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿವರೆಗೆ ಸಾಗಿತು. ಬಳಿಕ ಮೆರವಣಿಗೆ ಮತ್ತೆ ಚನ್ನಮ್ಮ ವೃತ್ತಕ್ಕೆ ಮರಳಿ ಧರಣಿಯಾಗಿ ಮಾರ್ಪಟ್ಟಿತು. ಮಳೆಯ ನಡುವೆಯೂ ಪ್ರತಿಭಟನಾಕಾರರು ಹೋರಾಟವನ್ನು ಮುಂದುವರಿಸಿದರು.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಕುರಿತು ನಿಗದಿತ ಅವಧಿಯಲ್ಲಿ ಪಾರದರ್ಶಕ ತನಿಖೆ ನಡೆಸಬೇಕು. ಅಕ್ರಮದಲ್ಲಿ ಭಾಗಿಯಾಗಿರುವ ಎಲ್ಲರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಹೊಸದಿಲ್ಲಿಯಲ್ಲಿ ವಿದ್ಯಾರ್ಥಿ ಪ್ರತಿಭಟನಾಕಾರರ ಮೇಲೆ ಪೊಲೀಸರು ನಡೆಸಿದ ಬಲಪ್ರಯೋಗದ ಬಗ್ಗೆ ಸ್ವತಂತ್ರ ತನಿಖೆ ನಡೆಸಿ ಹೊಣೆಗಾರರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಪ್ರತಿಭಟನೆಗೆ ನೇತೃತ್ವ ವಹಿಸಿದ್ದ ಕಾಂಗ್ರೆಸ್ ಮುಖಂಡ ಅಮನ್ ಸೇಠ, ಈ ಹೋರಾಟ ಯಾವುದೇ ರಾಜಕೀಯ ಪಕ್ಷದ ಕಾರ್ಯಕ್ರಮವಲ್ಲ. ವಿದ್ಯಾರ್ಥಿಗಳ ಭವಿಷ್ಯ ಮತ್ತು ನ್ಯಾಯಕ್ಕಾಗಿ ವಿವಿಧ ರಾಜಕೀಯ ಹಿನ್ನೆಲೆಯ ಜನರು ತಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗಿರಿಸಿ ಒಂದಾಗಿ ಭಾಗವಹಿಸಿದ್ದಾರೆ ಎಂದು ಹೇಳಿದರು.
ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ನ್ಯಾಯ ದೊರಕಬೇಕು. ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಆಟವಾಡಿದವರ ವಿರುದ್ಧ ಸರ್ಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿ ಅಥರ್ವ ಪುಣೇದ ಮಾತನಾಡಿ, ಮೊದಲ ಬಾರಿ ನೀಟ್ ಪರೀಕ್ಷೆಯಲ್ಲಿ 720 ಅಂಕಗಳಿಗೆ 520 ಅಂಕ ಗಳಿಸಿದ್ದೆ. ಪ್ರಶ್ನೆಪತ್ರಿಕೆ ಸೋರಿಕೆಯ ಹಿನ್ನೆಲೆಯಲ್ಲಿ ಮರುಪರೀಕ್ಷೆ ನಡೆಸಿದಾಗ 490 ಅಂಕ ಮಾತ್ರ ಬಂದವು. ನನ್ನಂತೆ ಅನೇಕ ವಿದ್ಯಾರ್ಥಿಗಳು ಅನ್ಯಾಯಕ್ಕೆ ಒಳಗಾಗಿದ್ದಾರೆ. ನಮ್ಮ ಶ್ರಮಕ್ಕೆ ನ್ಯಾಯ ದೊರಕಿಸಬೇಕು ಎಂದು ಮನವಿ ಮಾಡಿದರು.