ಹೊಸದಿಲ್ಲಿ, ಮೇ 8 : 2021ರ ಲಖೀಂಪುರ್ ಖೇರಿ ಹಿಂಸಾಚಾರ ಪ್ರಕರಣದಲ್ಲಿ ಸಾಕ್ಷಿಗಳನ್ನು ವಿಚಾರಣೆಗೆ ಹಾಜರುಪಡಿಸುವಲ್ಲಿ ಉಂಟಾಗಿರುವ ವಿಳಂಬದ ಬಗ್ಗೆ ಸುಪ್ರೀಮ ಕೋರ್ಟ ಶುಕ್ರವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ಸಾಕ್ಷಿಗಳ ಹಾಜರಾತಿ ಖಾತರಿಗೊಳಿಸಲು ಅಗತ್ಯ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು. ಜೊತೆಗೆ ಸಾಕ್ಷಿ ರಕ್ಷಣೆ ಯೋಜನೆಯಡಿ ಅವರಿಗೆ ಭದ್ರತೆ ಒದಗಿಸಬೇಕು ಎಂದು ವಿಚಾರಣಾ ನ್ಯಾಯಾಲಯಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.
ರೈತರು ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಬೆಂಗಾವಲು ಪಡೆಯ ವಾಹನ ಹರಿದು ಐವರು ರೈತರು ಸಾವನ್ನಪ್ಪಿದ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಕೇಂದ್ರ ಸಚಿವ ಅಜಯ್ ಮಿಶ್ರಾ ಪುತ್ರ ಆಶಿಶ್ ಮಿಶ್ರಾ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ನ್ಯಾಯಮೂರ್ತಿ ಜೋಯ್ ಮಲ್ಯ ಬಾಗ್ಚಿ ಅವರಿದ್ದ ನ್ಯಾಯಪೀಠ ನಡೆಸಿತು.
ಸುಪ್ರೀಂ ಕೋರ್ಟ್‌ನ ಹಿಂದಿನ ಆದೇಶದಂತೆ ಆಶಿಶ್ ಮಿಶ್ರಾ ಮಧ್ಯಂತರ ಜಾಮೀನಿನ ಮೇಲೆ ಹೊರಗಿದ್ದಾನೆ.
ಪ್ರಕರಣದ ಮೊದಲ ವಿಚಾರಣೆಯಲ್ಲಿ 44 ಸಾಕ್ಷಿಗಳ ವಿಚಾರಣೆ ಪೂರ್ಣಗೊಂಡಿದ್ದು, 15 ಮಂದಿಯನ್ನು ಬಿಡುಗಡೆಗೊಳಿಸಲಾಗಿದೆ. ಇನ್ನೂ 72 ಸಾಕ್ಷಿಗಳ ವಿಚಾರಣೆ ಬಾಕಿಯಿದೆ ಎಂದು ರಾಜ್ಯ ಸರ್ಕಾರದ ಪರ ವಕೀಲರು ನ್ಯಾಯಾಲಯಕ್ಕೆ ಮಾಹಿತಿ ನೀಡಿದರು. ಎರಡನೇ ವಿಚಾರಣೆಯಲ್ಲಿ 35 ಸಾಕ್ಷಿಗಳ ಪೈಕಿ 25 ಮಂದಿಯನ್ನು ಬಿಡುಗಡೆಗೊಳಿಸಲಾಗಿದ್ದು, ಇನ್ನೂ 9 ಮಂದಿ ವಿಚಾರಣೆಗೆ ಬಾಕಿ ಇದ್ದಾರೆ ಎಂದೂ ತಿಳಿಸಲಾಯಿತು.
ಆಶಿಶ್ ಮಿಶ್ರಾ ಪರ ಹಿರಿಯ ವಕೀಲ ಸಿದ್ಧಾರ್ಥ್ ದವೆ ವಾದ ಮಂಡಿಸಿ, ಸಾಕ್ಷಿಗಳ ವಿರುದ್ಧ ಜಾಮೀನುಸಹಿತ ಹಾಗೂ ಜಾಮೀನುರಹಿತ ವಾರೆಂಟ್‌ಗಳನ್ನು ಹೊರಡಿಸಿದ್ದರೂ ಕಳೆದ 2 ತಿಂಗಳಿಂದ ಯಾವುದೇ ಸಾಕ್ಷಿಯನ್ನು ವಿಚಾರಣೆಗೊಳಪಡಿಸಲಾಗಿಲ್ಲ ಎಂದು ನ್ಯಾಯಾಲಯದ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ವಿಚಾರಣೆಯ ವಿಳಂಬದ ಬಗ್ಗೆ ಪ್ರಾಸಿಕ್ಯೂಷನ್ ಅಧಿಕಾರಿಗಳನ್ನು ತೀವ್ರವಾಗಿ ಪ್ರಶ್ನಿಸಿತು. ಮಾರ್ಚ್‌ನಿಂದ ಇಲ್ಲಿಯವರೆಗೆ ಏನು ಕ್ರಮ ಕೈಗೊಂಡಿದ್ದೀರಿ ಎಂದು ನ್ಯಾಯಪೀಠ ಪ್ರಶ್ನಿಸಿತು.
ಇದಕ್ಕೆ ಉತ್ತರಿಸಿದ ರಾಜ್ಯ ಸರ್ಕಾರದ ಪರ ವಕೀಲರು, ವಿಚಾರಣೆಯ ವಿಳಂಬದ ಕುರಿತು ಸಂಬಂಧಿತ ಪ್ರಾಸಿಕ್ಯೂಷನ್ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ನ್ಯಾಯಾಲಯಕ್ಕೆ ತಿಳಿಸಿದರು.