ಬೆಳಗಾವಿ, ನ. 3: ಮಹಾನಗರ ಪಾಲಿಕೆಯ ವಲಯ ಕಚೇರಿಗಳಲ್ಲಿ ಮಧ್ಯವರ್ತಿಗಳು ಹಾಗೂ ಏಜೆಂಟರ ಹಾವಳಿ ಹೆಚ್ಚಾಗುತ್ತಿರುವ ಕುರಿತು ದೂರುಗಳು ಕೇಳಿಬರುತ್ತಿದ್ದು, ಇದಕ್ಕೆ ಕಡಿವಾಣ ಹಾಕಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಪಾಲಿಕೆಯ ತೆರಿಗೆ ನಿರ್ಧರಣೆ, ಹಣಕಾಸು ಹಾಗೂ ಅಪೀಲುಗಳ ಸ್ಥಾಯಿ ಸಮಿತಿ ಅಧ್ಯಕ್ಷ ರಮೇಶ ಮೈಲುಗೋಳ ಅಧಿಕಾರಿಗಳಿಗೆ ಸೂಚಿಸಿದರು.
ಮಂಗಳವಾರ ಮಹಾನಗರ ಪಾಲಿಕೆಯಲ್ಲಿ ನಡೆದ ಸ್ಥಾಯಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಮಿತಿ ಸದಸ್ಯರು, ನಗರಸೇವಕರು ಹಾಗೂ ಸಾರ್ವಜನಿಕರಿಂದ ಏಜೆಂಟರ ಹಾವಳಿ ಕುರಿತು ನಿರಂತರ ದೂರುಗಳು ಬರುತ್ತಿವೆ. ಸಾರ್ವಜನಿಕರು ತಮ್ಮ ಕೆಲಸಗಳಿಗಾಗಿ ಮಧ್ಯವರ್ತಿಗಳನ್ನು ಅವಲಂಬಿಸುವ ಪರಿಸ್ಥಿತಿ ನಿರ್ಮಾಣವಾಗಬಾರದು. ಅಗತ್ಯ ದಾಖಲೆಗಳೊಂದಿಗೆ ನೇರವಾಗಿ ಕಚೇರಿಗೆ ಬರುವ ಸಾರ್ವಜನಿಕರ ಕೆಲಸಗಳನ್ನು ವಿಳಂಬವಿಲ್ಲದೆ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ನಿರ್ದೇಶನ ನೀಡಿದರು.
ಉಪಮಹಾಪೌರ ಹನುಮಂತ ಕೊಂಗಾಲಿ ಅವರು, ಅಶೋಕನಗರದ ಬ್ಯಾಡ್ಮಿಂಟನ್ ಕೋರ್ಟ್ ಕಟ್ಟಡದ ವಾರ್ಷಿಕ ನಿರ್ವಹಣಾ ಅವಧಿ ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ ಬಾಕಿ ಮೊತ್ತವನ್ನು ಬಡ್ಡಿ ಸಹಿತ ವಸೂಲಿ ಮಾಡುವುದು ಹಾಗೂ ಹೊಸ ಒಡಂಬಡಿಕೆ ಮಾಡಿಕೊಳ್ಳುವ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಚರ್ಚಿಸಿದರು.
ಬಾಪಟಗಲ್ಲಿಯ ಕಾರು ಪಾರ್ಕಿಂಗ್ ಗುತ್ತಿಗೆ ಅವಧಿ ಮುಗಿದ ನಂತರ ಕೈಗೊಂಡ ಕ್ರಮಗಳ ಕುರಿತು ಸಮಿತಿ ಸದಸ್ಯ ಬ್ರಹ್ಮಾನಂದ ಮಿರಜಕರ್ ಅಧಿಕಾರಿಗಳನ್ನು ಪ್ರಶ್ನಿಸಿದರು. ಅಧಿಕಾರಿಗಳು ನೀಡಿದ ಉತ್ತರದಿಂದ ತೃಪ್ತರಾಗದ ಹಿನ್ನೆಲೆಯಲ್ಲಿ ಮಧ್ಯಪ್ರವೇಶಿಸಿದ ಆಡಳಿತ ಪಕ್ಷದ ನಾಯಕ ಸಂತೋಷ ಪೇಡ್ನೇಕರ, ಈ ವಿಷಯಕ್ಕೆ ಸಂಬಂಧಿಸಿದ ಸಮಗ್ರ ದಾಖಲೆಗಳು ಹಾಗೂ ಸಂಬಂಧಪಟ್ಟ ಸಿಬ್ಬಂದಿಯೊಂದಿಗೆ ಮುಂದಿನ ಸಭೆಗೆ ಹಾಜರಾಗಿ ಸ್ಪಷ್ಟನೆ ನೀಡುವಂತೆ ಸೂಚಿಸಿದರು.
ಆನ್‌ಲೈನ್ ಆಸ್ತಿ ತೆರಿಗೆ ತಂತ್ರಾಂಶ ನಿರ್ವಹಿಸುತ್ತಿರುವ ಕಂಪನಿಯ ವಾರ್ಷಿಕ ನಿರ್ವಹಣಾ ಅವಧಿ ವಿಸ್ತರಣೆ, ಅನುಮೋದನೆಗಾಗಿ ಬಾಕಿ ಉಳಿದಿರುವ ಇ-ಆಸ್ತಿ ಕಡತಗಳು ಹಾಗೂ ಸಹ್ಯಾದ್ರಿ ನಗರದ ಸಾರ್ವಜನಿಕ ಉದ್ಯಾನವನಕ್ಕೆ 'ವೀರ ಸಾವರ್ಕರ್ ಉದ್ಯಾನವನ' ಎಂದು ನಾಮಕರಣ ಮಾಡುವ ಪ್ರಸ್ತಾವನೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಕೆಲವು ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದ್ದು, ಉಳಿದವುಗಳನ್ನು ಮುಂದಿನ ಸಭೆಯಲ್ಲಿ ಮಂಡಿಸುವಂತೆ ಸೂಚಿಸಲಾಯಿತು.
ಮಹಾಪೌರ ಪ್ರೀತಿ ಕಾಮಕರ ಮಾತನಾಡಿ, ನಗರದ ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚಿನ ಅನುದಾನದ ಅಗತ್ಯವಿದೆ. ಆದ್ದರಿಂದ ಆಸ್ತಿ ತೆರಿಗೆ ಸೇರಿದಂತೆ ವಿವಿಧ ಮೂಲಗಳಿಂದ ಬಾಕಿ ಇರುವ ತೆರಿಗೆ ವಸೂಲಿಗೆ ಆದ್ಯತೆ ನೀಡಿ ಪಾಲಿಕೆಯ ಆದಾಯ ಹೆಚ್ಚಿಸಲು ಅಧಿಕಾರಿಗಳು ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಸಮಿತಿ ಸದಸ್ಯರಾದ ಶಂಕರ ಪಾಟೀಲ, ರವಿರಾಜ ಸಂಬ್ರೇಕರ, ದೀಪಾಲಿ ಟೋಪಗಿ, ಮೋದಿನಸಾಬ ಮತವಾಲೆ, ಬಸವರಾಜ ಮೋದಗೇಕರ, ಕಂದಾಯ ವಿಭಾಗದ ಉಪ ಆಯುಕ್ತ ಡಾ. ಸಿದ್ದು ಹುಲ್ಲೋಳಿ, ಆಡಳಿತ ವಿಭಾಗದ ಉಪ ಆಯುಕ್ತ ಉದಯಕುಮಾರ ಬಿ.ಟಿ., ಪರಿಷತ್ ಕಾರ್ಯದರ್ಶಿ ರಮೇಶ ಬಡಿಗೇರ ಸೇರಿದಂತೆ ನಗರಸೇವಕರು, ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.