ಬೆಂಗಳೂರು, ನ. 16: ರಾಜ್ಯದಲ್ಲಿ ಮುಂಬರುವ ದಿನಗಳಲ್ಲಿ ಚಳಿಯ ತೀವ್ರತೆ ಮತ್ತಷ್ಟು ಹೆಚ್ಚಾಗಲಿದ್ದು, ಡಿಸೆಂಬರ್ ಮತ್ತು ಜನವರಿಯಲ್ಲಿ ತಾಪಮಾನ ಗಣನೀಯವಾಗಿ ಕುಸಿಯುವ ಸಾಧ್ಯತೆಯಿದೆ. ಉತ್ತರ ಕರ್ನಾಟಕದ 11 ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 10ರಿಂದ 12 ಡಿಗ್ರಿ ಸೆಲ್ಸಿಯಸ್ಗೆ ಇಳಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹವಾಮಾನ ಇಲಾಖೆಯ ತಜ್ಞ ಸಿ.ಎಸ್. ಪಾಟೀಲ ಅವರ ಪ್ರಕಾರ, ರಾಜ್ಯದಲ್ಲಿ ಸದ್ಯ ಒಣ ಹವೆ ಮುಂದುವರಿದಿದ್ದು, ರಾತ್ರಿ ವೇಳೆ ತಾಪಮಾನ ಮತ್ತಷ್ಟು ಇಳಿಕೆಯಾಗಲಿದೆ. ವಿಶೇಷವಾಗಿ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಚಳಿಯ ತೀವ್ರತೆ ಹೆಚ್ಚಾಗಲಿದೆ.
ಬೆಳಗಾವಿ, ಬಾಗಲಕೋಟೆ, ವಿಜಯಪುರ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 10ರಿಂದ 12 ಡಿಗ್ರಿ ಸೆಲ್ಸಿಯಸ್ಗೆ ಕುಸಿಯುವ ನಿರೀಕ್ಷೆಯಿದೆ.
ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 12ರಿಂದ 14 ಡಿಗ್ರಿ ಸೆಲ್ಸಿಯಸ್ ಹಾಗೂ ಕರಾವಳಿ ಜಿಲ್ಲೆಗಳಲ್ಲಿ 18ರಿಂದ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಸದ್ಯ ಬೆಂಗಳೂರಿನಲ್ಲಿ ಕನಿಷ್ಠ 16 ಡಿಗ್ರಿ ಹಾಗೂ ಮಂಗಳೂರಿನಲ್ಲಿ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ನವೆಂಬರ್ 16ರಿಂದ 20ರವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಚಂಡಮಾರುತದ ಪ್ರಭಾವವಿಲ್ಲ
ಬಂಗಾಳಕೊಲ್ಲಿಯಲ್ಲಿ ತೀವ್ರಗೊಳ್ಳುತ್ತಿರುವ ಚಂಡಮಾರುತ ಆಂಧ್ರಪ್ರದೇಶದ ನೆಲ್ಲೂರು ಬಳಿ ಭೂಸ್ಪರ್ಶ ಮಾಡುವ ಸಾಧ್ಯತೆಯಿದೆ. ಆದರೆ, ಕರ್ನಾಟಕದಲ್ಲಿ ಇದರ ಪರಿಣಾಮದಿಂದ ಮಳೆಯಾಗುವ ಸಾಧ್ಯತೆಯಿಲ್ಲ. ಹೀಗಾಗಿ ರಾಜ್ಯದಲ್ಲಿ ಒಣ ಹವೆಯೊಂದಿಗೆ ಚಳಿಯ ತೀವ್ರತೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.