ಹೊಸದಿಲ್ಲಿ, ಜೂ. 8 : ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನತೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಇರಾನ್‌ನಲ್ಲಿರುವ ಭಾರತೀಯ ನಾಗರಿಕರು ಸಾಧ್ಯವಾದಷ್ಟು ಬೇಗ ದೇಶ ತೊರೆಯುವಂತೆ ಕೇಂದ್ರ ಸರ್ಕಾರ ಸಲಹೆ ನೀಡಿದೆ. ಅಲ್ಲದೆ, ಅನಗತ್ಯ ಕಾರಣಗಳಿಗೆ ಇರಾನ್‌ಗೆ ಪ್ರಯಾಣಿಸುವುದನ್ನು ತಪ್ಪಿಸುವಂತೆ ಭಾರತೀಯರಿಗೆ ಎಚ್ಚರಿಕೆ ನೀಡಲಾಗಿದೆ.
ತೆಹರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಸೋಮವಾರ ಹೊಸ ಪ್ರಯಾಣ ಸಲಹೆ ಪ್ರಕಟಿಸಿದ್ದು, ಪ್ರಾದೇಶಿಕ ಭದ್ರತಾ ಪರಿಸ್ಥಿತಿ ಹದಗೆಟ್ಟಿರುವ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ. ಇತ್ತೀಚಿನ ಬೆಳವಣಿಗೆಗಳ ಹಿನ್ನೆಲೆ ನೀಡಲಾಗಿರುವ ಇದು ಎಂಟನೇ ಪ್ರಯಾಣ ಸಲಹೆಯಾಗಿದೆ.
ಪ್ರದೇಶದಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಗಮನದಲ್ಲಿಟ್ಟುಕೊಂಡು ಯಾವುದೇ ಭಾರತೀಯ ನಾಗರಿಕರು ಇರಾನ್‌ಗೆ ಪ್ರಯಾಣಿಸಬಾರದು. ಈಗಾಗಲೇ ಅಲ್ಲಿರುವವರು ಲಭ್ಯವಿರುವ ಸಾರಿಗೆ ವ್ಯವಸ್ಥೆಗಳನ್ನು ಬಳಸಿಕೊಂಡು ಆದಷ್ಟು ಬೇಗ ದೇಶ ತೊರೆಯಬೇಕು ಎಂದು ರಾಯಭಾರ ಕಚೇರಿ ತಿಳಿಸಿದೆ.
ಇಸ್ರೇಲ್ ಸೋಮವಾರ ಮುಂಜಾನೆ ಇರಾನ್‌ನ ಮಧ್ಯ ಮತ್ತು ಪಶ್ಚಿಮ ಭಾಗಗಳ ಮೇಲೆ ವೈಮಾನಿಕ ದಾಳಿ ನಡೆಸಿದ ಕೆಲವೇ ಗಂಟೆಗಳ ಬಳಿಕ ಈ ಎಚ್ಚರಿಕೆ ಹೊರಬಿದ್ದಿದೆ. ಇರಾನ್ ನಡೆಸಿದ ಕ್ಷಿಪಣಿ ದಾಳಿಗೆ ಪ್ರತಿಯಾಗಿ ಇಸ್ರೇಲ್ ಈ ಕಾರ್ಯಾಚರಣೆ ನಡೆಸಿದ್ದು, ಇದರ ಪರಿಣಾಮ ಮಧ್ಯಪ್ರಾಚ್ಯದಲ್ಲಿ ಮತ್ತೊಮ್ಮೆ ಯುದ್ಧದ ಆತಂಕ ಹೆಚ್ಚಾಗಿದೆ.
ವಿದ್ಯಾರ್ಥಿಗಳು, ಉದ್ಯಮಿಗಳು, ಯಾತ್ರಿಕರು, ಪ್ರವಾಸಿಗರು ಸೇರಿದಂತೆ ಇರಾನ್‌ನಲ್ಲಿ ವಾಸಿಸುತ್ತಿರುವ ಎಲ್ಲ ಭಾರತೀಯರು ಎಚ್ಚರಿಕೆಯಿಂದ ಇರಬೇಕು ಹಾಗೂ ರಾಯಭಾರ ಕಚೇರಿಯ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಕೇಂದ್ರ ಸರ್ಕಾರ ಮನವಿ ಮಾಡಿದೆ.