ಕೋಲಾರ, ನ. 3: ಕಾಂಗ್ರೆಸ್ ನಾಯಕರು ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಮುಂದಾದರೆ ಅವರನ್ನು ತುಂಡು ತುಂಡಾಗಿ ಕತ್ತರಿಸಿ ಅರಬ್ಬಿ ಸಮುದ್ರಕ್ಕೆ ಎಸೆಯುವುದಾಗಿ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ನಗರದಲ್ಲಿ ಮಂಗಳವಾರ ಬಿಜೆಪಿ ಆಯೋಜಿಸಿದ್ದ ‘ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ಅಳಿಸಿ’ ಪಾದಯಾತ್ರೆಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.
‘ಕಾಂಗ್ರೆಸ್ ಅರಾಜಕತೆ ಸೃಷ್ಟಿಸಿದರೆ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಕಾಂಗ್ರೆಸ್ ನಾಯಕರನ್ನು ತುಂಡು ತುಂಡಾಗಿ ಕತ್ತರಿಸಿ ಅರಬ್ಬಿ ಸಮುದ್ರಕ್ಕೆ ಎಸೆಯುತ್ತಾರೆ’ ಎಂದು ಎಚ್ಚರಿಕೆ ನೀಡುವ ಮೂಲಕ ವಿವಾದಕ್ಕೆ ಕಾರಣರಾದರು.
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ಕಾಂಗ್ರೆಸ್ ರಾಜಕೀಯಗೊಳಿಸುತ್ತಿದೆ. ಅದರ ಹೆಸರಿನಲ್ಲಿ ಯುವಜನರನ್ನು ದಾರಿತಪ್ಪಿಸಿ ಅರಾಜಕತೆ ಸೃಷ್ಟಿಸಲು ಮುಂದಾಗಿದೆ. ಇದನ್ನು ವಿರೋಧಿಸಿ ಬಿಜೆಪಿ ಹೋರಾಟ ನಡೆಸುತ್ತಿದೆ ಎಂದು ಹೇಳಿದರು.
ರಾಜ್ಯದಲ್ಲಿ ಕನ್ನಡ ರಾಜ್ಯೋತ್ಸವ ನಿತ್ಯೋತ್ಸವವಾಗಬೇಕಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಬೆಲೆ ಏರಿಕೆಯ ನಿತ್ಯೋತ್ಸವ ನಡೆಸುತ್ತಿದೆ ಎಂದು ಟೀಕಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹದ್ದುಬಸ್ತಿನಲ್ಲಿಡಲು ರಾಜ್ಯದಲ್ಲಿ ಸ್ಟಿಂಗ್ ಕಾರ್ಯಾಚರಣೆಯ ಹುನ್ನಾರ ನಡೆಯುತ್ತಿದೆ ಎಂದೂ ಆರೋಪಿಸಿದರು.
ಪಾದಯಾತ್ರೆಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಹರೀಶ್ ದ್ವಿವೇದಿ, ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.