LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆ

ಉಡುಪಿ, ಮೇ 16 : ಚುನಾವಣೆ ಮುಗಿದ ತಕ್ಷಣ ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಮಾಡಿರುವುದು ಸಂಪೂರ್ಣ ರಾಜಕಾರಣ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಆರೋಪಿಸಿದರು.

ಉಡುಪಿಯಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಗಂಟೆ ಬಾರಿಸಬೇಕು ಎಂದರೆ ಗಂಟೆ ಬಾರಿಸಿದ್ದೇವೆ, ಚಪ್ಪಾಳೆ ತಟ್ಟಬೇಕು ಎಂದರೆ ತಟ್ಟಿದ್ದೇವೆ, ಪೆಟ್ರೋಲ್‌, ಡೀಸೆಲ್‌ ಕಡಿಮೆ ಬಳಸಿ ಎಂದರೆ ಪಾಲಿಸಿದ್ದೇವೆ. ದೇಶಕ್ಕಾಗಿ ಮಿತವ್ಯಯ ಪಾಲಿಸೋಣ. ಆದರೆ ಇಂತಹ ಪರಿಸ್ಥಿತಿ ಬರಲು ಕಾರಣ ಯಾರು ಎಂಬುದನ್ನೂ ಹೇಳಬೇಕು ಎಂದು ಪ್ರಶ್ನಿಸಿದರು.

ಈಗ ಬಂಗಾರ ಖರೀದಿಸಬೇಡಿ ಎಂದು ಹೇಳಲಾಗುತ್ತಿದೆ. ಆದರೆ ದೇಶದ ಪರಿಸ್ಥಿತಿಗೆ ಸಂಬಂಧಿಸಿದಂತೆ ಕೇಂದ್ರ ಸರಕಾರ ಯಾವ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುತ್ತಿದೆ ಎಂಬುದನ್ನು ಜನರಿಗೆ ತಿಳಿಸಬೇಕು ಎಂದು ಹೇಳಿದರು. ಅಮೆರಿಕ ಭಾರತದ ಮೇಲೆ ಯಾವ ರೀತಿ ಪ್ರಭಾವ ಬೀರುತ್ತಿದೆ ಎಂಬುದು ಮಾಧ್ಯಮಗಳಲ್ಲಿ ಕಾಣಿಸುತ್ತಿದೆ. ಭಾರತದ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ನೀಡುತ್ತಿರುವ ಹೇಳಿಕೆಗಳೂ ಎಲ್ಲರಿಗೂ ಗೊತ್ತಿವೆ ಎಂದು ವ್ಯಂಗ್ಯವಾಡಿದರು.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗದಿದ್ದರೂ ದಿಢೀರ್‌ ಆಗಿ ₹3 ಹೆಚ್ಚಿಸಿ ಜನರ ಮೇಲೆ ಹೊರೆ ಹಾಕಲಾಗಿದೆ. ಡಾ. ಮನಮೋಹನ್‌ ಸಿಂಗ್‌ ಪ್ರಧಾನಿಯಾಗಿದ್ದ ಅವಧಿಯಲ್ಲಿ ಕಚ್ಚಾ ತೈಲದ ಬೆಲೆ ಹೆಚ್ಚಾದರೂ ಜನರ ಮೇಲೆ ಹೆಚ್ಚುವರಿ ಹೊರೆ ಹಾಕಲಾಗಿರಲಿಲ್ಲ ಎಂದು ಹೇಳಿದರು.

ಹಿಜಾಬ್‌ ವಿವಾದ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಶಿಕ್ಷಣ ಕ್ಷೇತ್ರದಲ್ಲಿ ರಾಜಕಾರಣ ಮಾಡಬಾರದು. ವಿದ್ಯಾರ್ಥಿಗಳು ಮುಗ್ಧರಾಗಿದ್ದು, ಅವರ ಭವಿಷ್ಯದ ದೃಷ್ಟಿಯಿಂದ ಉತ್ತಮ ವಾತಾವರಣ ನಿರ್ಮಿಸಬೇಕು. ಮಕ್ಕಳ ಭವಿಷ್ಯದ ಜೊತೆ ರಾಜಕಾರಣ ಮಾಡಬಾರದು ಎಂದು ಹೇಳಿದರು. ಹಿಜಾಬ್‌ ಸೇರಿದಂತೆ ಇತರ ವಿಚಾರಗಳ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.

ಮುಖ್ಯಮಂತ್ರಿ ಬದಲಾವಣೆ ಹಾಗೂ ಸಚಿವ ಸಂಪುಟ ವಿಸ್ತರಣೆ ಕುರಿತ ಪ್ರಶ್ನೆಗೆ, ಅದು ಪಕ್ಷದ ಹೈಕಮಾಂಡ್‌ ತೀರ್ಮಾನ. ನಾವು ಪಕ್ಷದ ಶಿಸ್ತಿನ ಸಿಪಾಯಿಗಳು. ಈ ಕುರಿತು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದರು.

ಬಾಗಲಕೋಟೆಯಲ್ಲಿ ಅಂಗನವಾಡಿಗಳಿಂದ ಹಣ ಸಂಗ್ರಹಿಸಲಾಗಿದೆ ಎಂಬ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಯಾವುದೇ ಅಂಗನವಾಡಿಯಿಂದ ಹಣ ಪಡೆದಿಲ್ಲ. ಯಾರಾದರೂ ಹಣ ಸಂಗ್ರಹಿಸಿರುವುದು ಸಾಬೀತಾದರೆ ಅವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು. ಈ ಸಂಬಂಧ ತನಿಖೆ ನಡೆಸಲಾಗುವುದು ಎಂದು ತಿಳಿಸಿದರು.

 

 

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST